ಜಿಲ್ಲೆ

ವಚನ ಸಾಹಿತ್ಯಕ್ಕೆ ಹಡಪದ ಅಪ್ಪಣ್ಣ ಕೊಡುಗೆ ಅವಿಸ್ಮರಣೀಯ: ಅಪರ ಜಿಲ್ಲಾಧಿಕಾರಿ ವೀಣಾ

ಗೋಪಾಲಕೃಷ್ಣ ಪಾದೂರ್

ಉಡುಪಿ: ಹಡಪದ ಅಪ್ಪಣ್ಣ ಅವರು ವಚನಗಳನ್ನು ರಚಿಸುವುದರೊಂದಿಗೆ ಸಮಾಜ ಸುಧಾರಣೆಗೆ ಮುಂದಾಗಿದ್ದರು. ಡಾ.ಫ.ಗು.ಹಳಕಟ್ಟಿ ಅವರು ವಚನಗಳನ್ನು ಸಂಗ್ರಹಿಸಿ ಮುದ್ರಿಸುವುರೊಂದಿಗೆ ಜನ ಸಾಮಾನ್ಯರಿಗೆ ತಲುಪುವಂತೆ ಮಾಡಿದ್ದಾರೆ. ಸಮಾಜಕ್ಕೆ ಇವರಿಬ್ಬರ ಕೊಡುಗೆ ಅವಿಸ್ಮರಣೀಯ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಹೇಳಿದರು.

ಸೋಮವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಡಾ.ಫ.ಗು.ಹಳಕಟ್ಟಿ ಹಾಗೂ ಹಡಪದ ಅಪ್ಪಣ್ಣ ಜನ್ಮದಿನ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

12ನೇ ಶತಮಾನದ ಅರಸೊತ್ತಿಗೆ ಕಾಲದಲ್ಲಿ ಸಮಾಜದ ಸುಧಾರಣೆಗೆ ಬಸವಣ್ಣ , ಅಕ್ಕಮಹಾದೇವಿ , ಅಂಬಿಗರ ಚೌಡಯ್ಯ , ಅಲ್ಲಮಪ್ರಭು ಮೊದಲಾದವರು ಸರಳ ಭಾಷೆಯ ವಚನಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಮುಂದಾದರು. ಅವರ ವಚನಗಳಿಂದ ಜನಸಾಮಾನ್ಯರು ಬದಲಾವಣೆಗೊಳ್ಳಲು ಸಾಧ್ಯವಾಯಿತು. ವಚನಗಳು ವಿಶ್ವ ಸಾಹಿತ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರು.
ಇಂದಿನ ಯುವಜನತೆ ವಚನಗಳನ್ನು ಓದಿ, ಅವುಗಳಲ್ಲಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಶಿಸ್ತು ಸಮನ್ವಯದೊಂದಿಗೆ ಉತ್ತಮ ಶಿಕ್ಷಣವಂತರಾಗಿ ಭವಿಷ್ಯ ರೂಪಿಸಿಕೊಳ್ಳುವುದರೊಂದಿಗೆ ಸದೃಢ ಭಾರತ ನಿರ್ಮಾಣ ಮಾಡಲು ಮುಂದಾಗಬೇಕು ಎಂದರು.

ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ನಿಕೇತನ ಮಾತನಾಡಿ, ಡಾ.ಫ.ಗು.ಹಳಕಟ್ಟಿ ಅವರು ವಚನ ಸಾಹಿತ್ಯ ಸಂಗ್ರಹ ಮತ್ತು ವಚನಗಳ ಕೊಡುಗೆಯ ಮೂಲಕ ವ್ಯಕ್ತಿತ್ವ ವಿಕಸನ ಹಾಗೂ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಿದ್ದಾರೆ. ಅವರು ಹಳ್ಳಿ ಹಳ್ಳಿಗಳನ್ನು ಸುತ್ತಿ ಓಲೆಗರಿಗಳಲ್ಲಿ ಬರೆದ ವಚನ ಸಾಹಿತ್ಯವನ್ನು ಸಂಗ್ರಹಿಸಿ ತಮ್ಮ ಸ್ವಂತ ಹಣದಿಂದ ಮುದ್ರಣ ಮಾಡುವುದರೊಂದಿಗೆ ಸಾರ್ವಜನಿಕರಿಗೆ ದೊರಕುವಂತೆ ಮಾಡಿದರು ಎಂದರು. ಕಲಾವಿದರಾದ ಸ್ವಪ್ನರಾಜ್ ಹಾಗೂ ರಾಜು ಸಂತೆಕಟ್ಟೆ ವಚನ ಗಾಯನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ.ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಎಂ ಜಿ ಎಂ ಸಂಧ್ಯಾ ಕಾಲೇಜಿನ ಕನ್ನಡ ಉಪನ್ಯಾಸಕ ರಾಮಾಂಜಿ ನಿರೂಪಿಸಿ, ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್ ವಂದಿಸಿದರು.