ವಿಜಯಪುರ: ಮುದ್ದೇಬಿಹಾಳ ತಾಲೂಕಿನ ನಾಲತವಾಡ ಗ್ರಾಮದ 10ನೇ ತರಗತಿಯ ಓದುತ್ತಿದ್ದ ವಾಲ್ಮೀಕಿ ಸಮಾಜದ ವಿದ್ಯಾರ್ಥಿನಿಗೆ ಬಲವಂತದಿಂದ ತಾಳಿಕಟ್ಟಿ ಚಿತ್ರಹಿಂಸೆ ನೀಡಿ ವಿದ್ಯಾರ್ಥಿನಿ ಸಾವಿಗೆ ಕಾರಣವಾದ ಸಂಗಮೇಶ ಜುಂಜಾವರ ಸೇರಿ ಇನ್ನುಳಿದ ಆರೋಪಿಗಳನ್ನು ಹಾಗೂ ಘಟನೆಗೆ ಪ್ರಚೋದನೆ ನೀಡಿದವರನ್ನು ಗಲ್ಲಿಗೇರಿಸುವ ಮೂಲಕ ಮೃತ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸುವಂತೆ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಆಗ್ರಹಿಸಿದ್ದಾರೆ.
ವಿದ್ಯಾರ್ಥಿನಿಯು ಆರೋಪಿತ ವ್ಯಕ್ತಿಯ ಬಗ್ಗೆ ಈ ಮೊದಲೇ ಪೊಲೀಸರಿಗೆ ಮಾಹಿತಿ ನೀಡಿದ್ದರೂ ಕೂಡ, ಯಾವುದೇ ಕ್ರಮ ಕೈಗೊಳ್ಳದಿರುವುದೇ ಈ ಘಟನೆಗೆ ಕಾರಣವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಲ್ಲದೆ, ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿರುವ ಹಿನ್ನೆಲೆ ಸರ್ಕಾರ ಕೂಡಲೇ ಸಂಬಂಧಿಸಿದ ಪೊಲೀಸ್ ಠಾಣಾಧಿಕಾರಿಗಳನ್ನು ಸೇರಿದಂತೆ ಎಲ್ಲ ಆರೋಪಿತರನ್ನು ಸಿಬಿಐ ತನಿಖೆಗೆ ಒಳಪಡಿಸುವ ಮೂಲಕ ಮುಂಬರುವ ದಿನಗಳಲ್ಲಿ ಇಂತಹ ಅಮಾನವೀಯ ಕೃತ್ಯ ನಡೆಯದಂತೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಘಟನೆ ನಡೆದು ವಾರಗಳೇ ಉರುಳಿದರೂ ಸ್ಥಳೀಯ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಂತ್ರಸ್ತ ದಲಿತ ಕುಟುಂಬಕ್ಕೆ ಭೇಟಿಯಾಗಿ ಸಾಂತ್ವನ ಹೇಳದೆ ಇರುವುದು ಖಂಡನೀಯ. ಕೂಡಲೇ ಸಂಬಂಧಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳು ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಬೇಕು. ನೊಂದ ಕುಟುಂಬಕ್ಕೆ ಸರ್ಕಾರದಿಂದ ಕುಟುಂಬದ ಓರ್ವರಿಗೆ ಸರ್ಕಾರಿ ನೌಕರಿ ಸೇರಿದಂತೆ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೇ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಲ್ಲಿಕಾರ್ಜುನ ಬಟಗಿ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.