ಹನುಮಸಾಗರ: ಪಟ್ಟಣದಲ್ಲಿ ಏರ್ಪಡಿಸಿರುವ ಎರಡು ದಿನಗಳ ಕೊಪ್ಪಳ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೊದಲ ದಿನವಾದ ಭಾನುವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ನಂತರ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ರಾಷ್ಟ್ರ ಧ್ವಜಾರೋಹಣ, ಕಸಾಪ ಜಿಲ್ಲಾ ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್ ಪರಿಷತ್ ಹಾಗೂ ತಾಲೂಕಾಧ್ಯಕ್ಷ ವೀರೇಶ ಬಂಗಾರಶೆಟ್ಟರ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ವೇಳೆ ವಿದ್ಯಾರ್ಥಿಗಳಿಂದ ನಡೆದ ಪಥಸಂಚಲನ ಗಮನ ಸೆಳೆಯಿತು. ಸಮ್ಮೇಳನದ ಸರ್ವಾಧ್ಯಕ್ಷ ಡಾ.ಉದಯ ಶಂಕರ ಪುರಾಣಿಕ ಅವರನ್ನು ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಸಮ್ಮೇಳನ ನಡೆಯುವ ಸ್ಥಳಕ್ಕೆ ಕರೆತಂದರು.
ಶಾಸಕ ಅಮರೇಗೌಡ ಪಾಟೀಲ್ ಬಯ್ಯಪೂರ ಮಾತನಾಡಿ, ಕನ್ನಡ ನಾಡು ನುಡಿ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕಾಗಿದೆ. ಯುವಕರು ಮತ್ತು ವಿದ್ಯಾರ್ಥಿಗಳು ಕನ್ನಡ ನೆಲ, ಜಲ ರಕ್ಷಣೆಗೆ ಸದಾ ಸಿದ್ಧರಿರಬೇಕು. ಕನ್ನಡ ಸಂಸ್ಕೃತಿ ಉಳಿಸಿ, ಬೆಳೆಸಲು ಶ್ರಮಿಸಬೇಕು ಎಂದರು. ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ನಾಗಪ್ಪ ನಿರ್ವಾಣಿ, ಉಪಾಧ್ಯಕ್ಷ ಮಂಜುನಾಥ ಹುಲ್ಲೂರು, ಸ್ಥಳೀಯ ಘಟಕದ ಅಧ್ಯಕ್ಷ ಮಂಜುನಾಥ ಗುಳೇದಗುಡ್ಡ, ಪಿಡಿಒ ದೇವೇಂದ್ರಪ್ಪ ಕಮತರ ಇತರರಿದ್ದರು.