ಹನೂರು: ಕ್ಷೇತ್ರದಲ್ಲಿ ಅಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರ ಗಮನಕ್ಕೆ ತರಲಾಗಿದೆ. ಮುಂಬರುವ ದಿನಗಳಲ್ಲಿ ಕ್ಷೇತ್ರದ ಪ್ರಗತಿ ಸುಗಮವಾಗಲಿದೆ ಎಂದು ಮಾಜಿ ಶಾಸಕ ಆರ್. ನರೇಂದ್ರ ಹೇಳಿದರು. ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಚಾಮರಾಜನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವ ಹಿನ್ನ್ನೆಲೆಯಲ್ಲಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿರುವ ಪಕ್ಷದ ಸುನಿಲ್ ಬೋಸ್ ಅವರಿಗೆ ಕ್ಷೇತ್ರದಿಂದ 37,000 ಕ್ಕೂ ಹೆಚ್ಚು ಮತಗಳನ್ನು ನೀಡಿರುವುದು ಸಂತಸ ತಂದಿದೆ. ಹಾಗಾಗಿ ಜು.10 ರಂದು ಚಾ.ನಗರದಲ್ಲಿ ನಡೆಯುವ ಕೃತಜ್ಞತೆ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಡಾ. ಮಹದೇವಪ್ಪ, ಗೃಹ ಸಚಿವ ಪರಮೇಶ್ವರ್ ಇತರರು ಆಗಮಿಸಲಿದ್ದಾರೆ. ಈ ನಿಟ್ಟಿನಲ್ಲಿ ಕ್ಷೇತ್ರ ವ್ಯಾಪ್ತಿಯ 34 ಗ್ರಾಪಂ ಹಾಗೂ ಪಟ್ಟಣ ಪಂಚಾಯಿತಿಗಳಿಂದ 50 ಬಸ್ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಹನೂರು ಕ್ಷೇತ್ರದಿಂದ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದವರು ಮನವಿ ಮಾಡಿದರು.