ಹನೂರು : ಓದಿನ ಕಡೆ ಹೆಚ್ಚಿನ ಒತ್ತು ನೀಡುವ ಮೂಲಕ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ. ಇದರಿಂದ ಉತ್ತಮ ಅಂಕ ಗಳಿಸಲು ಸಾಧ್ಯ ಎಂದು ಬಿಇಒ ಗುರುಲಿಂಗಯ್ಯ ತಿಳಿಸಿದರು. ಪಟ್ಟಣದ ಜಿ.ವಿ ಗೌಡ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸುವ ಸಂಬಂಧ ವಿದ್ಯಾರ್ಥಿಗಳಿಗೆ ಆಯೋಜಿಸಿದ್ಧ ‘ಭರವಸೆಯ ಬೆಳಕು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಎಂಬುದು ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟ. ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಅಣಿ ಆಗುವ ಹಂತ. ಇನ್ನು ಕೆಲವೇ ದಿನಗಳಲ್ಲಿ ಪರೀಕ್ಷೆ ಸಮೀಪಿಸುತ್ತಿದೆ. ಆದ್ದರಿಂದ ಸಮಯವನ್ನು ವ್ಯರ್ಥ ಮಾಡದೇ ಓದಿನ ಕಡೆ ಹೆಚ್ಚು ಗಮನಹರಿಸಬೇಕು ಎಂದು ಅವರು ಸಲಹೆ ನೀಡಿದರು. ಕಠಿಣ ವಿಷಯ ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸಮಸ್ಯೆಗಳಿದ್ದಲ್ಲಿ ಆಯಾ ಭಾಷಾ ಶಿಕ್ಷಕರಿಂದ ಅಗತ್ಯ ಮಾರ್ಗದರ್ಶನ ಪಡೆದು ಪರಿಹರಿಸಿ ಕೊಳ್ಳಬೇಕು. ಹೆಚ್ಚು ಅಂಕ ಗಳಿಸಲು ತಯಾರಿ ನಡೆಸಬೇಕು. ನಿಯಮಿತ ಆಹಾರ ಸೇವಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಭಯ ಪಡದೇ ಪರೀಕ್ಷೆಯನ್ನು ಎದುರಿಸಬೇಕು ಎಂದು ಗುರುಲಿಂಗಯ್ಯ ಹೇಳಿದರು.
ಇತ್ತೀಚೆಗೆ ನಡೆದ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ (ಪ್ರಿಪರೇಟರಿ) ಕೆಲವರು ಅನುತ್ತೀರ್ಣರಾಗಿದ್ದಾರೆ. ಹಲವರು ಕಡಿಮೆ ಅಂಕವನ್ನು ಗಳಿಸಿದ್ದಾರೆ. ಹಾಗಾಗಿ ಈ ವಿದ್ಯಾರ್ಥಿಗಳು ಓದಿಗೆ ಹೆಚ್ಚಿನ ಆದ್ಯತೆ ಕೊಡಬೇಕು. ಶಿಕ್ಷಕರು ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಅವರು ಸಲಹೆ ನೀಡಿದರು.
ಶಿಕ್ಷಣ ಸಂಯೋಜಕರಾದ ಅಶೋಕ್, ಚಂದ್ರಶೇಖರ್, ಚಿನ್ನಪ್ಪಯ್ಯ, ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಶೇಖರ್, ಖಜಾಂಚಿ ಪ್ರದೀಪ್‌ಕುಮಾರ್, ಮುಖ್ಯ ಶೀಕ್ಷಕ ಮಹದೇವ ನಾಯಕ್, ಶಿಕ್ಷಕರಾದ ಲೋಕೇಶ್, ಮಹದೇವ ಇನ್ನಿತರರು ಇದ್ದರು.