ಜಿಲ್ಲೆ

16 ರಂದು ಮ.ಬೆಟ್ಟದಲ್ಲಿ ಆರೋಗ್ಯ ಶಿಬಿರ

ಕಿರಣ್ ಮಾದರಹಳ್ಳಿ

ಹನೂರು: ಕಾಡಂಚಿನ ಗ್ರಾಮದ ಜನರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಎಚ್.ಕೃಷ್ಣಸ್ವಾಮಿ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್, ಸಾಲೂರು ಬೃಹನ್ಮ್ಮಠ, ರೋಟರಿ ಮಿಡ್ ಟೌನ್ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ಜೂ.16 ರಂದು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಆರೋಗ್ಯ ಹಾಗೂ ಕಣ್ಣಿನ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಎಚ್.ಕೆ. ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ತಿಳಿಸಿದರು.

ಇಂಡಿಗನತ್ತ ಗ್ರಾಮದಲ್ಲಿ ನಡೆದ ಮತಗಟ್ಟೆ ಧ್ವಂಸ ಪ್ರಕರಣ ಹಿನ್ನೆಲೆಯಲ್ಲಿ ತಮ್ಮ ಪುತ್ರ ಡಿವೈಎಸ್ಪಿ ಮಹಾನಂದ ಅವರು ಮೆಂದಾರೆ ಹಾಗೂ ಇಂಡಿಗನತ್ತ ಗ್ರಾಮಕ್ಕೆ ಭೇಟಿ ನೀಡಿದ್ದು, ಗ್ರಾಮಸ್ಥರಿಗೆ ಧೈರ್ಯ ಹೇಳಿದ್ದರು. ಈ ವೇಳೆ ಆರೋಗ್ಯ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆಯೇ ಮಲೆ ಮಹದೇಶ್ವ ಬೆಟ್ಟದ ಮಹದೇಶ್ವರ ಕನ್ವೆನ್ಷನ್ ಹಾಲ್‌ನಲ್ಲಿ ಶಿಬಿರ ಆಯೋಜಿಸಲಾಗುತ್ತಿದೆ. ಇಲ್ಲಿ ಮಧುಮೇಹ, ರಕ್ತದೊತ್ತಡ, ಹೃದಯ, ಶ್ವಾಸಕೋಶ, ಸ್ನಾಯು ಸಂಬಂಧಿತ ಕಾಯಿಲೆಗಳು ಹಾಗೂ ಕಣ್ಣಿನ ದೋಷಕ್ಕೆ ಸಂಬಂಧಿಸಿದಂತೆ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಆದ್ದರಿಂದ ಈ ಭಾಗದ ಜನರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜೂ.16 ರಂದು ನಡೆಯುವ ಉದ್ಘಾಟನಾ ಕಾರ್ಯಕ್ರಮದ ಸಾನ್ನಿಧ್ಯವನ್ನು ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ವಹಿಸಲಿದ್ದಾರೆ. ಶಾಸಕ ಎಂ.ಆರ್.ಮಂಜುನಾಥ್ ಉದ್ಘಾಟಿಸಲಿದ್ದಾರೆ. ಪ್ರೇಮಲತಾ ಕೃಷ್ಣಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರು ಡಿವೈಎಸ್ಪಿ ಮಹಾನಂದ ಆಶಯ ನುಡಿಗಳನ್ನಾಡಲಿದ್ದಾರೆ. ಅತಿಥಿಗಳಾಗಿ ಬಿಜೆಪಿ ಮುಖಂಡ ಡಾ.ಪ್ರೀತನ್ ನಾಗಪ್ಪ, ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು, ರೋಟರಿ ಕ್ಲಬ್ ಅಧ್ಯಕ್ಷ ದಕ್ಷಿಣಮೂರ್ತಿ, ಪರಿಶಿಷ್ಟ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿ ನವೀನ್ ಮಠದ್, ಜನನಿ ಆಸ್ಪತ್ರೆ ವೈದ್ಯ ಡಾ. ಪ್ರವೀಣ್‌ಕುಮಾರ್ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ತಿಳಿಸಿದರು.