ಜಿಲ್ಲೆ

ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ

ಕಿರಣ್ ಮಾದರಹಳ್ಳಿ

ಹನೂರು: ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗಡುವು ನೀಡಿರುವ ಅವಧಿಯೊಳಗೆ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಎಚ್ಚರಿಸಿದರು.

ತಾಲೂಕಿನ ಮಲೆಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಬುಧವಾರ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 386 ವಸತಿ ಗೃಹಗಳ ಕಟ್ಟಡ, ಒಳಚರಂಡಿ, ಭಕ್ತರು ದೇವರ ದರ್ಶನ ಪಡೆಯಲು ತೆರಳುವ ಸರತಿ ಸಾಲಿನ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದ್ದು, ನಿಗದಿತ ಅವಧಿಯೂ ಮುಗಿದಿದೆ. ಆದರೆ, ಕಾಮಗಾರಿ ಪೂರ್ಣಗೊಳ್ಳದಿರುವುದು ಎಷ್ಟರ ಮಟ್ಟಿಗೆ ಸರಿ? ಆದ್ದರಿಂದ ಈ ಬಗ್ಗೆ ಅಗತ್ಯ ಕ್ರಮವಹಿಸಿ ಶೀಘ್ರ ಪೂರ್ಣಗೊಳಿಸಿ ಭಕ್ತರ ಸೇವೆಗೆ ಸಮರ್ಪಿಸಬೇಕು. ನಿರ್ಲಕ್ಷ್ಯ ವಹಿಸಿದ್ದಲ್ಲಿ ಶಿಸ್ತು ಕ್ರಮಗೊಳ್ಳುವುದಾಗಿ ಗುತ್ತಿಗೆದಾರರಿಗೆ ಎಚ್ಚರಿಸಿದರು. ಈ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ, ಪ್ರಗತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಗುತ್ತಿಗೆದಾರರು ಹೆಚ್ಚಿನ ಒತ್ತು ನೀಡಿ ಪೂರ್ಣಗೊಳಿಸಬೇಕು. ಇದರಿಂದ ಭಕ್ತರಿಗೆ ಅನುಕೂಲವಾಗುತ್ತದೆ. ಕಾಮಗಾರಿಗಳು ಕುಂಟುತ್ತಾ ಸಾಗುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಹಾಗಾಗಿ ಈ ಬಗ್ಗೆ ಮುತುರ್ವಜಿ ವಹಿಸಬೇಕು ಎಂದು ತಿಳಿಸಿದರು. ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಮಾತನಾಡಿ, ಮ.ಬೆಟ್ಟದಲ್ಲಿ ವಸತಿ ಗೃಹಗಳನ್ನು ನಿರ್ಮಿಸಿ ಹಲವು ವರ್ಷಗಳೆ ಕಳೆದಿವೆ. ಹಾಗಾಗಿ ದುರಸ್ತಿ ಕೆಲಸವಾಗಬೇಕಿದೆ ಎಂದು ಶಾಸಕರು ಹಾಗೂ ಜಿಲ್ಲಾಧಿಕಾರಿ ಗಮನಕ್ಕೆ ತಂದರು.

ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಉಪ ವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ವೈ.ಕೆ. ಗುರುಪ್ರಸಾದ್, ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಪಿಡಬ್ಲುೃಡಿ ಇಂಜಿನಿಯರ್‌ಗಳಾದ ಚಿನ್ನಣ್ಣ, ಮಹೇಶ್ ಇದ್ದರು.