ಹನೂರು: ಪ್ರತಿಯೊಬ್ಬರೂ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದರ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉದ್ಯೋಗ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಜಿ.ವಿ ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಎನ್‌ಸಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು. ಇದರಿಂದ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಹಾಗೆಯೇ ಉನ್ನತ ಶಿಕ್ಷಣ ಉತ್ತಮ ಜೀವನವನ್ನು ರೂಪಿಸಿಕೊಳ್ಳುವ ಹಂತ. ಆದ್ದರಿಂದ ಪ್ರತಿಯೊಬ್ಬರೂ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಜತೆಗೆ ಅಧ್ಯಯನ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ಸಲಹೆ ನೀಡಿದರು.
ಸಂವಹನ ಕೌಶಲದಲ್ಲಿ ಪ್ರೌಢಿಮೆ ಸಾಧಿಸುವುದರ ಜತೆಗೆ ಭಾಷಾ ಜ್ಞಾನ ಹೊಂದಬೇಕು. ಇದರೊಂದಿಗೆ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳುವ ಸಲುವಾಗಿ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲ ಎಂದು ತಿಳಿಸಿದರು.
ಸಾಂಸ್ಕೃತಿಕ ಸಮಿತಿ ಸಂಚಾಲಕ ಸಿ.ಎಸ್. ಸುರೇಂದ್ರ ಮಾತನಾಡಿ, ಸ್ಪರ್ಧೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದ್ದರಿಂದ ಕೀಳರಿಮೆಯನ್ನು ತ್ಯಜಿಸಿ ಪ್ರತಿಯೊಬ್ಬರೂ ಸ್ಪರ್ಧೆಗಳಲ್ಲಿ ಭಾಗವಹಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಇದರಿಂದ ಮಾನಸಿಕ ನೆಮ್ಮದಿ ಸಿಗುವುದರ ಜತೆಗೆ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದರು.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕುರಿತು ಬೆಂಗಳೂರು ಅಕ್ಕ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ್ ಸಲಹೆ ನೀಡಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಇದೇ ವೇಳೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಟಿ.ಎನ್ ಶಾಂತರಾಜು, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಎಂ. ರವಿಶಂಕರ್, ದೈಹಿಕ ಶಿಕ್ಷಣ ನಿರ್ದೇಶಕ ಪವನ್‌ಕುಮಾರ್, ಪ್ರಾಧ್ಯಾಪಕರಾದ ಮನೋಜ್‌ಕುಮಾರ್, ಗುಂಡೂರಾವ್ ಇತರರು ಇದ್ದರು.