ಜಿಲ್ಲೆ

ಹಾರಂಗಿಯಿ0ದ ನದಿಗೆ ನೀರು ಬಿಡುಗಡೆ

ಸುನಿಲ್ ಪೊನ್ನೇಟಿ

ಮಡಿಕೇರಿ:

ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ ಶನಿವಾರ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವ ಇದೆ. ಹಾಗಾಗಿ ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತಿದ್ದು, ಜಲಾಶಯ ಅಧಿಕಾರಿಗಳು ಪ್ರವಾಹದ ಎಚ್ಚರಿಕೆ ನೀಡಿದ್ದಾರೆ. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಅಧಿಕಾರಿಗಳು ಮನವಿ ಮಾಡಿದ್ದಾರೆ.

2859 ಅಡಿ ಎತ್ತರದ ಜಲಾಶಯದಲ್ಲಿ ಪ್ರಸ್ತುತ 2851.95 ಅಡಿಗಳಷ್ಟು ನೀರಿದ್ದು, 3,184 ಕ್ಯೂಸೆಕ್ ನೀರಿನ ಒಳಹರಿವು ಇದೆ. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿರುವುದರಿAದ ಒಳಹರಿವಿನ ಪ್ರಮಾಣ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ. ಮಡಿಕೇರಿ ಸೇರಿದಂತೆ ಹಾರಂಗಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮಡಿಕೇರಿಯಲ್ಲಿ ಶನಿವಾರ ದಿನ ಪೂರ್ತಿ ಮಳೆ ಮತ್ತು ಚಳಿಯ ವಾತಾವರಣ ಇತ್ತು.

ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆ ಆಗಿದೆ. ಸಿದ್ದಾಪುರ ಮತ್ತು ವಿರಾಜಪೇಟೆ ಭಾಗದಲ್ಲಿ ಮಧ್ಯಾಹ್ನ ನಂತರ ಉತ್ತಮ ಮಳೆಯಾಗಿದೆ. ನಾಪೋಕ್ಲು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಕುಶಾಲನಗರ ವ್ಯಾಪ್ತಿಯಲ್ಲಿ ಆಗಾಗ್ಗೆ ತುಂತುರು ಮಳೆ ಆಗುತ್ತಿತ್ತು.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ 15.1 ಮಿಮೀ ಮಳೆಯಾಗಿದೆ. ಮಡಿಕೇರಿ 21.55, ವಿರಾಜಪೇಟೆ 13, ಸೋಮವಾರಪೇಟೆ 22.4, ಪೊನ್ನಂಪೇಟೆ 15.75 ಹಾಗೂ ಕುಶಾಲನಗರ ತಾಲೂಕಿನಲ್ಲಿ 2.8 ಮಿಮೀ ಮಳೆಯಾಗಿದೆ. ಶಾಂತಳ್ಳಿ ಹೋಬಳಿಯಲ್ಲಿ ಅತಿ ಹೆಚ್ಚು ಅಂದರೆ 42 ಮಿಮೀ ಮಳೆ ದಾಖಲಾಗಿದೆ.