ಬೇಲೂರು ತಾಲೂಕು ಕಚೇರಿಯಲ್ಲಿ ಜಾಗೃತಿ ಸಭೆ ಆಯೋಜಿಸಲಾಗಿತ್ತು. ತಹಸೀಲ್ದಾರ್ ಶ್ರೀಧರ್ ಕಂಕನವಾಡಿ, ತಾಲೂಕು ವೈದ್ಯಾಧಿಕಾರಿ ಡಾ.ವಿಜಯ್ ಇದ್ದರು. 
ಹಾಸನ

ಆಹಾರದಲ್ಲಿ ಕೃತಕ ಬಣ್ಣ ಬಳಸಿದರೆ ಕ್ರಮ

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಎಚ್ಚರಿಕೆ
  • ಜಾಗೃತಿ ಸಭೆ
ಬೇಲೂರು: ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಹಾಗೂ ಕಬಾಬ್ ಸೇರಿದಂತೆ ವಿವಿಧ ಆಹಾರ ಪದಾರ್ಥಗಳಲ್ಲಿ ನಿಷೇಧಿತ ರಾಸಾಯನಿಕ ಬಣ್ಣಗಳ ಬಳಕೆ ತಡೆಯುವ ಹಾಗೂ ಸಾರ್ವಜನಿಕ ಆರೋಗ್ಯದ ಕುರಿತು ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ಶನಿವಾರ ವ್ಯಾಪಾರಿಗಳ ಜಾಗೃತಿ ಸಭೆ ನಡೆಯಿತು.
ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಮಾತನಾಡಿ, ಸಾರ್ವಜನಿಕರ ಆರೋಗ್ಯ ಗಮನದಲ್ಲಿ ಇಟ್ಟುಕೊಂಡು ವ್ಯಾಪಾರಿಗಳು ಸುರಕ್ಷಿತ ಗುಣಮಟ್ಟದ ಆಹಾರ ಮಾರಾಟ ಮಾಡಬೇಕು. ಇತ್ತೀಚೆಗೆ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಬಳಕೆ ಕುರಿತು ಆರೋಪ ಕೇಳಿ ಬರುತ್ತಿದ್ದು, ಸರ್ಕಾರದ ನಿರ್ದೇಶನದಂತೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವ್ಯಾಪಾರಿಗಳಿಗೆ ದಂಡಕ್ಕಿಂತ ಮೊದಲು ಜಾಗೃತಿ ಮೂಡಿಸುವುದು ನಮ್ಮ ಉದ್ದೇಶ. ರಾಸಾಯನಿಕ ಬಣ್ಣಗಳ ಬಳಕೆಯಿಂದ ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುವುದರಿಂದ ಅವುಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕು. ಅಡುಗೆಗೆ ಬಳಸುವ ಎಣ್ಣೆಯನ್ನು ಪದೇ ಪದೇ ಕುದಿಸಿ ಬಳಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು. ಮುಂದಿನ ದಿನಗಳಲ್ಲಿ ಆಹಾರ ಸುರಕ್ಷತಾ ಕಾಯ್ದೆಯಡಿ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ವಿಶ್ವ ಪಾರಂಪರಿಕ ತಾಣವಾಗಿರುವ ಬೇಲೂರಿನಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ದೇಗುಲದ ಹಿಂಭಾಗದಲ್ಲಿ 76 ಲಕ್ಷ ರೂ. ವೆಚ್ಚದಲ್ಲಿ ಫುಡ್ ಪಾರ್ಕ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಸ್ಥಳೀಯ ವ್ಯಾಪಾರಿಗಳಿಗೆ ಉತ್ತಮ ಅವಕಾಶಗಳು ದೊರೆಯಲಿದೆ ಎಂದರು.
ತಾಲೂಕು ವೈದ್ಯಾಧಿಕಾರಿ ಡಾ.ವಿಜಯ್ ಮಾತನಾಡಿ, ಆಹಾರ ತಯಾರಿಕೆ ಮತ್ತು ಮಾರಾಟದಲ್ಲಿ ಸ್ವಚ್ಛತಾ, ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಗೋಬಿ ಮಂಚೂರಿ ಸೇರಿದಂತೆ ವಿವಿಧ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣಗಳ ಬಳಕೆ ತಪ್ಪಿಸಬೇಕು. ಆಹಾರವು ಅದರ ಬಣ್ಣದಿಂದಲ್ಲ ಗುಣಮಟ್ಟ ಮತ್ತು ರುಚಿಯಿಂದ ಗ್ರಾಹಕರನ್ನು ಆಕರ್ಷಿಸಬೇಕು. ಒಂದೇ ಅಡುಗೆ ಎಣ್ಣೆಯನ್ನು ಮತ್ತೆ ಮತ್ತೆ ಕಾಯಿಸಿ ಬಳಸುವುದರಿಂದ ಟ್ರಾನ್ಸ್‌ಫ್ಯಾಟ್‌ಗಳು ಉತ್ಪತ್ತಿಯಾಗಿ ಹೃದಯ ಸಂಬಂಧಿ ಕಾಯಿಲೆಯ ಅಪಾಯ ಹೆಚ್ಚಾಗುತ್ತದೆ ಎಂದರು.
ಜಂಕ್‌ಫುಡ್ ಸೇವನೆಯಿಂದ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ಸೇರಿದಂತೆ ಜೀವನಶೈಲಿ ಸಂಬಂಧಿತ ಕಾಯಿಲೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ತಯಾರಕರು ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಆಹಾರ ತಯಾರಿಕೆ ಮತ್ತು ಮಾರಾಟ ಮಾಡುವವರು ಕಡ್ಡಾಯವಾಗಿ ಆಹಾರ ಸುರಕ್ಷತಾ ಪರವಾನಗಿ ಹೊಂದಿರಬೇಕು. ಅಡುಗೆ ಮಾಡುವವರು ಹಾಗೂ ಆಹಾರ ಪೂರೈಸುವ ಸಿಬ್ಬಂದಿ ಆರೋಗ್ಯ ತಪಾಸಣೆ ಮಾಡಿಸಿ ಆರೋಗ್ಯ ಪ್ರಮಾಣಪತ್ರ ಪಡೆಯಬೇಕು. ಅಡುಗೆ ವೇಳೆ ಕ್ಯಾಪ್, ಗ್ಲೌಸ್, ಮಾಸ್ಕ್ ಧರಿಸುವುದು ಅಗತ್ಯ. ಬಿಸಿ ಆಹಾರವನ್ನು ಪ್ಲಾಸ್ಟಿಕ್ ಕವರ್‌ಗಳಲ್ಲಿ ಅಥವಾ ಪತ್ರಿಕೆಗಳಲ್ಲಿ ನೀಡಬಾರದು ಎಂದರು.
ಪುರಸಭೆ ಆರೋಗ್ಯಾಧಿಕಾರಿ ಲೋಹಿತ್ ಮಾತನಾಡಿ, ಕೃತಕ ಬಣ್ಣಗಳು, ಟೇಸ್ಟಿಂಗ್ ಪೌಡರ್ ಸೇರಿದಂತೆ ಆರೋಗ್ಯಕ್ಕೆ ಹಾನಿಕಾರಕ ವಸ್ತುಗಳ ಬಳಕೆ ನಿಷೇಧಿಸಲಾಗಿದೆ. ಬಿಸಿ ಆಹಾರವನ್ನು ಪ್ಲಾಸ್ಟಿಕ್ ಪ್ಲೇಟ್, ಪ್ಲಾಸ್ಟಿಕ್ ಕವರ್ ಹಾಗೂ ಸುದ್ದಿ ಬರುವ ಪೇಪರ್‌ಗಳಲ್ಲಿ ನೀಡುವುದಕ್ಕೂ ನಿರ್ಬಂಧವಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮೊದಲ ಬಾರಿ ತಪ್ಪು ಕಂಡುಬಂದರೆ 1,000 ರಿಂದ 5,000ವರೆಗೆ ದಂಡ ವಿಧಿಸಲಾಗುವುದು. ಗಂಭೀರ ಪ್ರಕರಣಗಳಲ್ಲಿ 25,000ವರೆಗೆ ದಂಡ ಹಾಗೂ ಮರುಕಳಿಸಿದರೆ ಜೈಲು ಶಿಕ್ಷೆ ಎದುರಿಸಬೇಕಾಗಬಹುದು ಎಂದರು.
ತಾಲೂಕು ಹಿರಿಯ ಆರೋಗ್ಯ ನಿರೀಕ್ಷಕಿ ಉಷಾ, ಹೋಟೆಲ್ ಹಾಗೂ ತಿಂಡಿಗಾಡಿ ವ್ಯಾಪಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರಿದ್ದರು.