ಹಾಸನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಹಸೀಲ್ದಾರ್ ಗೀತಾ, ಇಒ ಎಚ್.ಡಿ.ಗಿರೀಶ್ ಇತರರಿದ್ದರು.
- ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ
- ಅಧಿಕಾರಿಗಳಿಗೆ ಶಾಸಕ ಸ್ವರೂಪ್ ಪ್ರಕಾಶ್ ಸೂಚನೆ
- ತ್ರೈಮಾಸಿಕ ಕೆಡಿಪಿ ಸಭೆ
ಹಾಸನ: ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರಿನಲ್ಲಿ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಸ್ವರೂಪ್ ಪ್ರಕಾಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾಸನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಾಸನ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಿಸಿಲಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ಆರೋಗ್ಯ ಇಲಾಖೆ ವತಿಯಿಂದ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು ಯಾವ ರೀತಿಯ ಆಹಾರ ಸೇವಿಸಬೇಕು, ಆರೋಗ್ಯದ ಬಗ್ಗೆ ಯಾವ ರೀತಿ ಕಾಳಜಿ ವಹಿಸಬೇಕು ಎಂಬುದರ ಬಗ್ಗೆ ಪ್ರಚಾರ ಮಾಡಿ ಹಾಗೂ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸುವಂತೆ ತಿಳಿಸಿದರು.
ತಾಲೂಕಿನ ಎಲ್ಲ ಆಸ್ಪತ್ರೆಗಳಿಗೆ ಭೇಟಿ ನೀಡಿ ಯಾವ ಚಿಕಿತ್ಸೆಗೆ ಎಷ್ಟು ಹಣ ಎಂಬುದನ್ನು ನಾಮಫಲಕಗಳಲ್ಲಿ ಅಳವಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈತರಲ್ಲಿ ಆಲೂಗೆಡ್ಡೆ, ತರಕಾರಿ ಸೇರಿದಂತೆ ಇನ್ನಿತರ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಿ ಎಂದರಲ್ಲದೆ ವಿವಿಧ ಬೆಳೆಗಳನ್ನು ಬೆಳೆಯುವ ಬಗ್ಗೆ ಆಕಾಶವಾಣಿ ಮುಖಾಂತರ ಪ್ರಚಾರ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಪುರದಮ್ಮ ರಸ್ತೆ ಕಿರಿದಾಗಿದ್ದು ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಅದಷ್ಟು ಬೇಗ ಕ್ಲಿಯರ್ ಮಾಡಿಸಿ ರಸ್ತೆ ಕಾಮಗಾರಿಗೆ ಅವಕಾಶ ಮಾಡಿಕೊಡುವಂತೆ ಶಾಸಕರು ಹೇಳಿದರು.
ವಸತಿ ಶಾಲೆಗಳಲ್ಲಿ ಕುಡಿಯುವ ನೀರಿನಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಿ ಹಾಗೂ ರ‌್ಯಾಗಿಂಗ್ ನಂತಹ ಅಸಭ್ಯ ವರ್ತನೆಗಳಿಗೆ ನಡೆಯದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಓಡಾಡಲು ಭಯ ಪಡುವಂತಾಗಿದೆ. ಆದ್ದರಿಂದ ನಾಯಿಗಳ ಹಾವಳಿ ತಡೆಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25 ಸಾಲಿನ ಸಹಾಯಧನ ಯೋಜನೆಯಡಿಯಲ್ಲಿ ಆಯ್ಕೆಯಾದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಮಾಡಿದರು.
ಸಭೆಯಲ್ಲಿ ತಹಸೀಲ್ದಾರ್ ಗೀತಾ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇತರರಿದ್ದರು.