ಬೇಲೂರು ಸಮೀಪದ ಭರತ್ ಕನ್ವೆನ್ಷನ್ ಹಾಲ್‌ನಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಕಾಂಗ್ರೆಸ್ ‘ನಡೆ ನಿಮ್ಮ ಮತ ರಕ್ಷಣೆಯ ಕಡೆ’ ಎಂಬ ಜಾಗೃತಿ ಕಾರ್ಯಾಗಾರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ ಮಾತನಾಡಿದರು. ಇ.ಎಚ್.ಲಕ್ಷ್ಮಣ್, ಪಟೇಲ್ ಶಿವಪ್ಪ, ಬಸವರಾಜು, ಶಶಿಧರ್, ಎಂ.ಜೆ.ನಿಶಾಂತ್, ಅಕ್ರಂ ಶರೀಫ್ ಇತರರು ಇದ್ದರು.
ಬೇಲೂರು: ಮತದಾರರ ಪಟ್ಟಿ ಪರಿಷ್ಕರಣೆಯೂ ಚುನಾವಣಾ ಆಯೋಗದ ನಿಯಮಾವಳಿ ಪ್ರಕಾರ ನಡೆಯುವ ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಅಲ್ಪಸಂಖ್ಯಾತರ ಓಲೈಕೆಗಾಗಿ ಅಕ್ರಮ ನಡೆಯುತ್ತಿದೆ ಎಂಬ ಬಿಜೆಪಿ ಆರೋಪಗಳು ಆಧಾರರಹಿತವಾಗಿವೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.
ಮತದಾರರ ಹಕ್ಕುಗಳ ಸಂರಕ್ಷಣೆ, ಪಟ್ಟಿಯ ನಿಖರತೆ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಗೆ ಒತ್ತು ನೀಡುವ ಉದ್ದೇಶದಿಂದ ಪಟ್ಟಣ ಸಮೀಪದ ಭರತ್ ಕನ್ವೆನ್ಷನ್ ಹಾಲ್‌ನಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಕಾಂಗ್ರೆಸ್ ನಡೆ ನಿಮ್ಮ ಮತ ರಕ್ಷಣೆಯ ಕಡೆ’ ಎಂಬ ಜಾಗೃತಿ ಕಾರ್ಯಾಗಾರದಲ್ಲಿ ಬಿಎಲ್‌ಎ-2 ಕಾರ್ಯಕರ್ತರಿಗೆ ತರಬೇತಿ ನೀಡಿ ಮಾತನಾಡಿದರು.
ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ನೋಡಿಕೊಳ್ಳುವುದು ಕಾಂಗ್ರೆಸ್‌ನ ಉದ್ದೇಶವಾಗಿದ್ದು, ಯಾರ ಹೆಸರನ್ನೂ ಅನ್ಯಾಯವಾಗಿ ತೆಗೆದು ಹಾಕುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ನಾಯಕರು ಸತ್ಯಾಂಶಗಳಿಗಿಂತ ಸುಳ್ಳು ಆರೋಪಗಳ ಮೂಲಕ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ. ಈ ಯೋಜನೆಗಳ ಅನುಷ್ಠಾನಕ್ಕಾಗಿ ಬಜೆಟ್‌ನಲ್ಲಿ 52 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, ಎಲ್ಲ ಫಲಾನುಭವಿಗಳಿಗೆ ಯಶಸ್ವಿಯಾಗಿ ತಲುಪಿಸಲಾಗುತ್ತಿದೆ. ಯೋಜನೆಗಳ ಪಾರದರ್ಶಕ ಅನುಷ್ಠಾನಕ್ಕಾಗಿ ಪರಿಶೀಲನೆ ನಡೆಯುತ್ತಿದ್ದು, 1.42 ಲಕ್ಷ ಮರಣ ಹೊಂದಿದವರ ಖಾತೆಗಳಿಗೆ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದೆ. ಇಂತಹ ಪ್ರಕರಣ ತಡೆಗಟ್ಟುವ ಉದ್ದೇಶದಿಂದ ಮಾತ್ರ ತಪಾಸಣೆ ನಡೆಸಲಾಗುತ್ತಿದೆ. ಆದರೆ, ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದ ಬಿಜೆಪಿ ನಾಯಕರು ಈಗ ತಮ್ಮ ಆಡಳಿತದ ರಾಜ್ಯಗಳಲ್ಲೇ ಇದೇ ಮಾದರಿಯ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದಾದರೂ ಏಕೆ ಎಂದು ವ್ಯಂಗ್ಯವಾಡಿದರು.
ನಮ್ಮ ಕಾರ್ಯಕರ್ತರು ಮತ್ತು ಬಿಎಲ್‌ಎಗಳು ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭಅರ್ಹ ಮತದಾರರು ಕೈಬಿಟ್ಟು ಹೋಗದಂತೆ ಎಚ್ಚರ ವಹಿಸಬೇಕು ಎಂದರು.
ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಮತದಾರರ ಪಟ್ಟಿ ರಕ್ಷಣೆ ಮತ್ತು ಪರಿಷ್ಕರಣೆ ಕಾರ್ಯ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನ ಪ್ರಮುಖ ಜವಾಬ್ದಾರಿಯಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ 280ಕ್ಕೂ ಹೆಚ್ಚು ಬೂತ್‌ಗಳ ಪೈಕಿ 258 ಬೂತ್‌ಗಳಿಗೆ ಬಿಎಲ್‌ಎ-2 ಕಾರ್ಯಕರ್ತರನ್ನು ನೇಮಕ ಮಾಡಲಾಗಿದ್ದು, ಈ ಪ್ರಕ್ರಿಯೆಯಲ್ಲಿ ಬೇಲೂರು ಕ್ಷೇತ್ರ ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದೆ. ಮುಂದಿನ ಒಂದು ತಿಂಗಳ ಕಾಲ ಕಾರ್ಯಕರ್ತರು ಪ್ರತಿದಿನ ಕನಿಷ್ಠ ಎರಡು ಗಂಟೆಗಳ ಕಾಲ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಮೀಸಲಿಟ್ಟು, ಹೊಸ ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಮರಣ ಹೊಂದಿದ ಅಥವಾ ವಲಸೆ ಹೋದ ಮತದಾರರ ಹೆಸರುಗಳ ತೆರವು ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
18 ವರ್ಷ ಪೂರೈಸಿದ ಪ್ರತಿಯೊಬ್ಬ ಯುವಕ-ಯುವತಿಯ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸುವಂತೆ ತಿಳಿಸಿದರು.
ಬಿಎಲ್‌ಒ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮನೆ ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸುವಂತೆ ಸಲಹೆ ನೀಡಿದರು.
ಮಾಜಿ ಸಚಿವ ಬಿ.ಶಿವರಾಂ ಮಾತನಾಡಿ, ಕ್ಷೇತ್ರದಲ್ಲಿ ಶೇ.95ಕ್ಕೂ ಹೆಚ್ಚು ಬಿಎಲ್‌ಎಗಳನ್ನು ನೇಮಕ ಮಾಡಲಾಗಿದ್ದು, ಎಲ್ಲರಿಗೂ ಮತದಾರರ ಪಟ್ಟಿಗಳನ್ನು ವಿತರಿಸಲಾಗಿದೆ. ಶೀಘ್ರದಲ್ಲೇ ಬಿಎಲ್‌ಎಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗುವುದು. ಸಭೆಯಲ್ಲಿ ಭಾಗವಹಿಸಿರುವ ಮುಖಂಡರು ಮತ್ತು ಕಾರ್ಯಕರ್ತರು, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಿ ಪ್ರತಿಯೊಂದು ಬೂತ್ ಮಟ್ಟದಲ್ಲೂ ಕಾರ್ಯ ನಿರ್ವಹಿಸುವ ಸಂಕಲ್ಪ ಮಾಡಬೇಕಿದೆ. ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಗೆ ಈ ಕಾರ್ಯಕ್ರಮ ಮಹತ್ವದ ಕೊಡುಗೆ ನೀಡಲಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಗೊಳಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕೆಂದು ಸಲಹೆ ನೀಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇ.ಎಚ್.ಲಕ್ಷ್ಮಣ್, ಪಟೇಲ್ ಶಿವಪ್ಪ, ಬಸವರಾಜು, ಶಶಿಧರ್, ತಾಲೂಕು ಅಧ್ಯಕ್ಷ ಎಂ.ಜೆ.ನಿಶಾಂತ್, ಪುರಸಭೆ ಅಧ್ಯಕ್ಷ ಅಕ್ರಂ ಶರೀಫ್, ಬೇಲೂರು-ಹಳೇಬೀಡು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೈಯದ್ ತೌಫಿಕ್, ಮುಖಂಡ ಗ್ರಾನೈಟ್ ರಾಜಶೇಖರ್, ಬಿ.ಎಂ.ಸಂತೋಷ್ ಸೇರಿದಂತೆ ಮುಖಂಡರು, ಕಾರ್ಯಕರ್ತರಿದ್ದರು.