ಅರಕಲಗೂಡು ತಾಲೂಕಿನ ಅಗ್ರಹಾರ ಗ್ರಾಮದಲ್ಲಿ ಆಯೋಜಿಸಿದ್ದ ಕೃಷಿ ತರಬೇತಿ ಕಾರ್ಯಕ್ರಮವನ್ನು ಗ್ರಾಪಂ ಮಾಜಿ ಅಧ್ಯಕ್ಷ ಪ್ರಸನ್ನ ಉದ್ಘಾಟಿಸಿದರು. ಬಾಬು, ಯೋಗೆಶ್, ವೀರಪ್ಪ, ಸುನಿಲ್ ಕುಮಾರ್ ಇತರರಿದ್ದರು.
ರೈತರು ಕೃಷಿ ಮಾಡುವ ಮುನ್ನ ಮಣ್ಣಿನ ಪರೀಕ್ಷೆ ಮಾಡಿಸಿ, ಸಾವಯವ ಗೊಬ್ಬರ ಬಳಕೆಗೆ ಆದ್ಯತೆ ನೀಡುವುದರ ಜತೆಗೆ ಏಕ ಬೆಳೆಗೆ ಸೀಮಿತವಾಗದೆ ಮಿಶ್ರ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸ್ಥಂಸ್ಥೆಯ ತಾಲೂಕು ಯೋಜನಾಧಿಕಾರಿ ಬಾಬು ಸಲಹೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ ರಾಮನಾಥಪುರ ವಲಯದ ಅಗ್ರಹಾರ ಗ್ರಾಮದಲ್ಲಿ ಆಯೋಜಿಸಿದ್ದ ಕೃಷಿ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು ಸೇರಿದಂತೆ ವಿವಿಧ ಬೆಳೆಗಳೊಂದಿಗೆ ಮೆಣಸು, ಕೆಸೆ, ಸುವರ್ಣಗೆಡ್ಡೆ, ಬಾಳೆ ಮತ್ತಿತರ ಮಿಶ್ರ ಬೆಳೆಗಳನ್ನು ಬೆಳೆಯುವುದರಿಂದ ರೈತರಿಗೆ ಹೆಚ್ಚಿನ ಆದಾಯ ದೊರೆಯಲಿದೆ. ಕೃಷಿಯ ಜತೆಗೆ ಮೀನು ಸಾಕಣೆ, ಜೇನು ಸಾಕಣೆ ಸೇರಿದಂತೆ ಉಪಕೃಷಿಗಳನ್ನು ಕೈಗೊಂಡು ಸಮಗ್ರ ಕೃಷಿ ಪದ್ಧತಿ ಅನುಸರಿಸಿದರೆ ಕೃಷಿಯನ್ನು ಮತ್ತಷ್ಟು ಲಾಭದಾಯಕವಾಗಿಸಬಹುದು ಎಂದು ತಿಳಿಸಿದರು.
ಪ್ರಗತಿಪರ ಕೃಷಿಕ ಯೋಗೇಶ್ ಮಾತನಾಡಿ, ಕೃಷಿ ಆರಂಭಿಸುವ ಮೊದಲು ಮಣ್ಣಿನ ಪರೀಕ್ಷೆ ಮಾಡಿಸುವುದು ಅಗತ್ಯ. ಮಣ್ಣಿನ ಗುಣಮಟ್ಟಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಹಾಗೂ ಅಗತ್ಯ ಪೋಷಕಾಂಶಗಳನ್ನು ಒದಗಿಸುವ ಕ್ರಮ ಕೈಗೊಳ್ಳಬೇಕು. ತೋಟಗಾರಿಕೆ ಬೆಳೆಗಳನ್ನು ವೈಜ್ಞಾನಿಕವಾಗಿ ಬೆಳೆಯುವ ಜತೆಗೆ ಸಾವಯವ ಗೊಬ್ಬರ ಬಳಸಿ ಆರೋಗ್ಯಕರ ಹಾಗೂ ಗುಣಮಟ್ಟದ ಉತ್ಪನ್ನಗಳನ್ನು ಬೆಳೆಸಬೇಕು. ಉತ್ತಮ ಗುಣಮಟ್ಟದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ದೊರೆಯುವಂತೆ ರೈತರು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಸಾದ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಾರ್ವಜನಿಕರ ಹಾಗೂ ರೈತರ ಅನುಕೂಲಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ರೈತರು ಇಂತಹ ತರಬೇತಿ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆಯಬೇಕು. ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಗೊಬ್ಬರದ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಮುಖಂಡರಾದ ವೀರಪ್ಪ, ಧರಣೀಶ್, ಒಕ್ಕೂಟದ ಅಧ್ಯಕ್ಷ ಶಿವಣ್ಣ, ವಲಯ ಮೇಲ್ವಿಚಾರಕ ರವೀಂದ್ರ, ಕೃಷಿ ಮೇಲ್ವಿಚಾರಕ ಎಂ. ಸುನೀಲ್ ಕುಮಾರ್, ಸೇವಾ ಪ್ರತಿನಿಧಿ ಲತಾ ಇತರರಿದ್ದರು.