ಪ್ರೀತಂಗೌಡ 
ಹಾಸನ

ಚುನಾವಣೆ ಎದುರಿಸಲು ಬಿಜೆಪಿಗಿದೆ ಸ್ವಂತ ಶಕ್ತಿ

ಪ್ರಮುಖ ಮುಖ್ಯಾಂಶಗಳು

  • ಚುನಾವಣೆ ಎದುರಿಸಲು ಬಿಜೆಪಿಗಿದೆ ಸ್ವಂತ ಶಕ್ತಿ
  • ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹೇಳಿಕೆ
ಹಾಸನಜಿಲ್ಲೆಯಲ್ಲಿ ಬಿಜೆಪಿ ಪ್ರಬಲ ರಾಜಕೀಯ ಪಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಸಭೆಗಳನ್ನು ನಡೆಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹೇಳಿದರು.
ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಮುಖಂಡರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಯಾವ ರೀತಿಯಲ್ಲಿ ಎದುರಿಸಬೇಕು ಎಂಬ ಕುರಿತು ಚರ್ಚೆ ನಡೆಸಲಾಗಿದ್ದು, ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ ಎಂದರು. 
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರೀತಂಗೌಡ, ಜಿಲ್ಲೆಯ ಬಿಜೆಪಿ ನಾಯಕರಲ್ಲಿ ಸ್ಪಷ್ಟತೆ ಇದ್ದರೂ, ರಾಷ್ಟ್ರೀಯ ನಾಯಕರ ತೀರ್ಮಾನದಂತೆ ಮೈತ್ರಿಯಲ್ಲಿ ಯಾವುದೇ ಒಡಕು ಬಾರದಂತೆ ನಡೆದುಕೊಳ್ಳಬೇಕಾಗಿದೆ ಎಂದು ಹೇಳಿದರು.
ಆದರೆ ಜಿಲ್ಲೆಯಲ್ಲಿ ಬಿಜೆಪಿ ಸ್ವಂತ ಶಕ್ತಿಯ ಮೇಲೆ ಚುನಾವಣೆಯನ್ನು ಎದುರಿಸಬೇಕು ಎಂಬುದು ಬಹುತೇಕ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಮೈತ್ರಿಯಿಂದ ಪಕ್ಷದ ಕಾರ್ಯಕರ್ತರು ಅವಕಾಶಗಳಿಂದ ವಂಚಿತರಾಗುವ ಆತಂಕವಿದ್ದು, ಇದು ಪ್ರತಿಪಕ್ಷಗಳಿಗೆ ಲಾಭವಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಜಿಲ್ಲೆಯ ಮೂರ‌್ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಸ್ವಂತ ಶಕ್ತಿಯ ಮೇಲೆ ಚುನಾವಣೆಯನ್ನು ಎದುರಿಸಿದರೆ ಅಧಿಕಾರ ಹಿಡಿಯಲು ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಕಾರ್ಯಕರ್ತರಲ್ಲಿ ವ್ಯಕ್ತವಾಗಿದೆ. ಈ ವಿಚಾರವನ್ನು ರಾಷ್ಟ್ರೀಯ ನಾಯಕರ ಗಮನಕ್ಕೆ ತರಲಾಗುವುದು ಎಂದರು.
ಜೆಡಿಎಸ್ ಪಕ್ಷದಲ್ಲಿ ಗೊಂದಲ ಇರಬಹುದಾದರೂ, ಮೈತ್ರಿ ಧರ್ಮದ ಹಿತದೃಷ್ಟಿಯಿಂದ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ. ತಾವು ಕಾರ್ಯಕರ್ತನಾಗಿ ಪ್ರತ್ಯೇಕವಾಗಿ ಚುನಾವಣೆಯನ್ನು ಎದುರಿಸಬೇಕು ಎಂಬ ಅಭಿಪ್ರಾಯ ಹೊಂದಿದ್ದರೂ ಅಗತ್ಯವಿರುವ ಸ್ಥಳಗಳಲ್ಲಿ ಹೊಂದಾಣಿಕೆ ಸಾಧ್ಯವಿದೆ ಎಂದು ಹೇಳಿದರು
ಜೆಡಿಎಸ್-ಬಿಜೆಪಿ ಹೊಂದಾಣಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುವ ಸಾಧ್ಯತೆ ಇದ್ದು, ಕಾರ್ಯಕರ್ತರನ್ನು ಬಲಿ ಕೊಡಬಾರದು ಎಂಬುದು ಪಕ್ಷದೊಳಗಿನ ಪ್ರಮುಖ ಅಭಿಪ್ರಾಯವಾಗಿದೆ. ಕಾರ್ಯಕರ್ತರ ಧ್ವನಿಗೆ ಮನ್ನಣೆ ನೀಡದಿದ್ದರೆ ಪಕ್ಷದ ಶಕ್ತಿ ಕುಂದುತ್ತದೆ ಎಂದು ಎಚ್ಚರಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಎರಡು ವರ್ಷ ಪೂರೈಸಿದ್ದು, ಮುಂದಿನ ಮೂರು ವರ್ಷಗಳ ಕಾಲವೂ ಅವರೇ ಮುಂದುವರಿಯಲಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ 2028ರ ವಿಧಾನಸಭೆ ಚುನಾವಣೆಯನ್ನು ವಿಜಯೇಂದ್ರ ನೇತೃತ್ವದಲ್ಲೇ ಎದುರಿಸಲಾಗುವುದು. ಈ ಕುರಿತು ಯಾವುದೇ ಗೊಂದಲವಿಲ್ಲ ಎಂದು ಪ್ರೀತಂಗೌಡ ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಈ ತಿಂಗಳ ಅಂತ್ಯದೊಳಗೆ ಎಸ್‌ಐಆರ್ ಜಾರಿಯಾಗುವ ಸಾಧ್ಯತೆ ಇದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು ಅಲ್ಪಸಂಖ್ಯಾತರ ಓಲೈಕೆಯಲ್ಲೇ ತೊಡಗಿದೆ ಎಂದು ಆರೋಪಿಸಿದರು.