ವಿಶ್ವ ಬಾಲಕಾರ್ಮಿಕ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿಯರ ಕಚೇರಿ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ.ದಾಕ್ಷಾಯಿಣಿ ಚಾಲನೆ ನೀಡಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣ, ಎಂ.ಎಸ್. ಮಧುಕುಮಾರಿ, ಎಚ್.ಎಲ್.ಗುರುಪ್ರಸಾದ್, ಕನಕಲಕ್ಷ್ಮೀ ಇತರರಿದ್ದರು.  
ಹಾಸನ

ಮಕ್ಕಳ ಸುರಕ್ಷತೆ ನಮ್ಮ ಹೊಣೆ’ ಈ ವರ್ಷದ ಧ್ಯೇಯ

ಹಾಸನ: ಶಿಕ್ಷಣ, ಆರೋಗ್ಯ ಮತ್ತು ಉತ್ತಮ ಭವಿಷ್ಯದಿಂದ ಮಕ್ಕಳನ್ನು ವಂಚಿಸುವ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ.ದಾಕ್ಷಾಯಿಣಿ ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ವಕೀಲರ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿಯರ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿ ಚಾಲನೆ ನೀಡಿ ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರವು 1986 ರಲ್ಲಿ ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದೆ. ಆರಂಭದಲ್ಲಿ 14 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಈ ಕಾಯ್ದೆ ಅನ್ವಯವಾಗುತ್ತಿತ್ತು. ಬಳಿಕ 2016 ರಲ್ಲಿ ಕಾನೂನಿಗೆ ಮಹತ್ವದ ತಿದ್ದುಪಡಿ ತಂದು, 18 ವರ್ಷದೊಳಗಿನ ಯಾವುದೇ ಮಗುವನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.
ಈ ವರ್ಷದ ವಿಶ್ವ ಬಾಲಕಾರ್ಮಿಕ ದಿನದ ಧ್ಯೇಯವಾಕ್ಯ ಮಕ್ಕಳ ಸುರಕ್ಷತೆ ನಮ್ಮ ಹೊಣೆ ಬಾಲಕಾರ್ಮಿಕ ನಿರ್ಮೂಲನೆ ನಮ್ಮ ಜವಾಬ್ದಾರಿ ಎಂಬುದಾಗಿದೆ ಎಂದು ಹೇಳಿದರು.
ಜಾಗೃತಿ ಜಾಥಾವು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಬಾಲಕಾರ್ಮಿಕ ಪದ್ಧತಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ವಿದ್ಯಾರ್ಥಿಗಳು, ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಮಕ್ಕಳು ಶಾಲೆಯಲ್ಲಿ ಕಲಿಯಬೇಕೆ ಹೊರತು ದುಡಿಮೆಯಲ್ಲಿ ತೊಡಗಬಾರದು ಎಂಬ ಸಂದೇಶವನ್ನು ಜಾಥಾದ ಮೂಲಕ ಸಾರಲಾಯಿತು.
ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಎಂ.ಎಸ್. ಮಧುಕುಮಾರಿ, ಉಪಕಾರ್ಮಿಕ ಆಯುಕ್ತರು ಎಚ್.ಎಲ್.ಗುರುಪ್ರಸಾದ್, ಯೋಜನಾ ನಿರ್ದೇಶಕಿ ಕನಕಲಕ್ಷ್ಮೀ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.