ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗಣ್ಯರು ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿ.ಕೆ.ದಾಕ್ಷಾಯಿಣಿ, ಅಪಾರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಪರಿಸರ ಅಧಿಕಾರಿ ಭಾಸ್ಕರ್ ಇತರರಿದ್ದರು.
- ಪರಿಸರ ಸಂರಕ್ಷಣೆಗೆ ಪಣತೊಡಿ
- ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಕರೆ
- ವಿಶ್ವ ಪರಿಸರ ದಿನಾಚರಣೆ
ಹಾಸನ: ಕಲುಷಿತವಾದ ಪರಿಸರವನ್ನು ಸಂರಕ್ಷಣೆ ಮಾಡಲು ನಾವೆಲ್ಲಾ ಪಣತೊಡೋಣ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಹೇಳಿದರು.
ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಮಹಾ ನಗರ ಪಾಲಿಕೆ, ಹಾಸನ ಮತ್ತು ಕೈಗಾರಿಕೆಗಳು ಇವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು. ವಾಯು ಮಾಲಿನ್ಯವನ್ನು ತಡೆಯಲು ಮತ್ತು ಪರಿಸರವನ್ನು ಉಳಿಸಿ ಬೆಳೆಸಲು ಎಲ್ಲ ರೀತಿಯಿಂದಲೂ ಪ್ರಯತ್ನ ಪಡಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ.ದಾಕ್ಷಾಯಿಣಿ ಮಾತನಾಡಿ, ಜೂನ್ ತಿಂಗಳಿನಿಂದ ಆಗಸ್ಟ್ ತಿಂಗಳವರೆಗೂ ಹಸಿರನ್ನು ಹೆಚ್ಚು ವೃದ್ಧಿಗೊಳಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಮತ್ತು ತಮ್ಮದೇ ಆದ ತಂಡಗಳ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಯಶಸ್ಸು ಕಾಣಲು ಎಲ್ಲರೂ ಕೈ ಜೋಡಿಸಬೇಕು ಎಂದರು.
ಅಪಾರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಪರಿಸರ ಅಧಿಕಾರಿ ಭಾಸ್ಕರ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಬಿ.ಟಿ. ಮಾನವ ಇತರರಿದ್ದರು.