ಹಾಸನದ ಎನ್.ಆರ್.ವೃತ್ತದ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ಕಾಂಗ್ರೆಸ್ ಮುಖಂಡರಾದ ತಾರಾಚಂದನ್, ರಘು ದಾಸರಕೊಪ್ಪಲು, ಇಸ್ಮಾಯಿಲ್, ರಾಮಚಂದ್ರ, ವೆಂಕಟೇಗೌಡ ಇತರರಿದ್ದರು. 
ಹಾಸನ

ನಿಗದಿತ ಅವಧಿಯೊಳಗೆ ಕೆಲಸ ಮುಗಿಸಿ

ಪ್ರಸಿನ್ ಕೆ.ಆರ್

ಪ್ರಮುಖ ಮುಖ್ಯಾಂಶಗಳು

  • ನಿಗದಿತ ಅವಧಿಯೊಳಗೆ ಕೆಲಸ ಮುಗಿಸಿ
  • ಸಂಸದ ಶ್ರೇಯಸ್ ಪಟೇಲ್ ಸೂಚನೆ
  • ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ
  • ನವೆಂಬರ್ ಅಂತ್ಯದೊಳಗೆ ಸಂಚಾರಕ್ಕೆ ಮುಕ್ತ
ಹಾಸನ: ನಗರದ ಹೃದಯಭಾಗದಲ್ಲಿ ಹೈಟೆಕ್ ಬಸ್ ನಿಲ್ದಾಣದ ಎದುರು ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ನವೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.
ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅಗತ್ಯ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು, ಕಾಮಗಾರಿ ವೇಗವಾಗಿ ಸಾಗುತ್ತಿದೆ. ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಯನ್ನೂ ನಿಗದಿತ ಅವಧಿಯೊಳಗೆ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದರು.
ಮತದಾರರ ಪಟ್ಟಿ ಪರಿಷ್ಕರಣೆ ನಡೆಯುವಂತೆ ಸರ್ಕಾರದ ಯೋಜನೆಗಳಿಗೂ ಕಾಲಕಾಲಕ್ಕೆ ಪರಿಷ್ಕರಣೆ ಅಗತ್ಯವಾಗುತ್ತದೆ. ಮುಖ್ಯಮಂತ್ರಿ ಮತ್ತೊಮ್ಮೆ ನೋಂದಣಿ ಮಾಡಿಸಿಕೊಳ್ಳುವಂತೆ ಸೂಚಿಸಿದ್ದು, ಅದನ್ನು ಎಲ್ಲರೂ ಪಾಲಿಸಬೇಕು. ದಾಖಲೆಗಳನ್ನು ಸಲ್ಲಿಸಿದ ಪ್ರತಿಯೊಬ್ಬ ಅರ್ಹ ಫಲಾನುಭವಿಯ ಖಾತೆಗೆ ಹಣ ಜಮೆಯಾಗಲಿದೆ ಎಂದು ಸ್ಪಷ್ಟಪಡಿಸಿದರು.
ಮಹಿಳೆಯರು ಕಚೇರಿಗಳಿಗೆ ಅಲೆದಾಡುವ ಅವಶ್ಯಕತೆ ಇಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅವರಿರುವ ಸ್ಥಳದಲ್ಲಿಯೇ ನೋಂದಣಿ ಪ್ರಕ್ರಿಯೆ ನಡೆಸಲಿದೆ ಎಂದು ತಿಳಿಸಿದರು.
ಗೃಹಲಕ್ಷ್ಮಿ ಹಣ ಸ್ಥಗಿತಗೊಳ್ಳಲಿದೆ ಎಂಬ ವದಂತಿ ಹರಡುತ್ತಿರುವ ವಿರೋಧ ಪಕ್ಷದವರು ಇಂಥ ಸುಳ್ಳು ಸುದ್ದಿ ಹಬ್ಬಿಸುವುದನ್ನು ನಿಲ್ಲಿಸಬೇಕು. ಇಲ್ಲ ಸಲ್ಲದ ಟೀಕೆ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಸರ್ಕಾರ ಬಡವರು, ದೀನ ದಲಿತರು ಮತ್ತು ಸಾಮಾನ್ಯ ವರ್ಗದ ಜನರ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ವರ್ಷಕ್ಕೆ 56 ಸಾವಿರ ಕೋಟಿ ರೂ.ನಂತೆ ಕಳೆದ 3 ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ವೆಚ್ಚ ಮಾಡಿದೆ. 2028ರಲ್ಲಿಯೂ ಜನಪರ ಕಾರ್ಯಕ್ರಮ ಮುಂದುವರಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಲವರಿಗೆ ಪಿಂಚಣಿ ಹಣ ಸ್ಥಗಿತಗೊಂಡಿರುವ ಕುರಿತು ಮಾತನಾಡಿದ ಅವರು, ಆಧಾರ್ ಹಾಗೂ ಇತರ ದಾಖಲೆಗಳಲ್ಲಿ ವಯಸ್ಸು ಸೇರಿದಂತೆ ಮಾಹಿತಿ ಹೊಂದಾಣಿಕೆಯಾಗದ ಕಾರಣ ಪಾವತಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಅಗತ್ಯ ದಾಖಲೆ ಸಲ್ಲಿಸಿದ ತಕ್ಷಣ ಪಿಂಚಣಿ ಹಣ ಬಿಡುಗಡೆಯಾಗಲಿದೆ. ಈ ಪರಿಶೀಲನಾ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಪ್ರತಿಕ್ರಿಯಿಸಿದ ಶ್ರೇಯಸ್ ಪಟೇಲ್, ಈ ಬಾರಿ ಹಾಸನ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗುವ ವಿಶ್ವಾಸವಿದೆ. ಶಿವಲಿಂಗೇಗೌಡ ಅವರು ಸಚಿವರಾಗುವ ಸಾಧ್ಯತೆ ಹೆಚ್ಚಿದೆ ಎಂದರು.
ಬಳಿಕ ಹೊಳೆನರಸೀಪುರ ತಾಲೂಕು ಹಂಗರಹಳ್ಳಿ ಬಳಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದರು ವೀಕ್ಷಣೆ ಮಾಡಿದರು. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಜತೆಗೆ ಕಾಮಗಾರಿಯನ್ನು ಗುಣಮಟ್ಟ ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು.
ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ಕಾಂಗ್ರೆಸ್ ಮುಖಂಡರಾದ ತಾರಾಚಂದನ್, ರಘು ದಾಸರಕೊಪ್ಪಲು, ಇಸ್ಮಾಯಿಲ್, ರಾಮಚಂದ್ರ, ವೆಂಕಟೇಗೌಡ ಇತರರಿದ್ದರು.