ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಜಾತಾ ಹಂಡಿ ಅವರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಉಮಾ ರವಿ ಪ್ರಕಾಶ್, ಜಿಲ್ಲಾಧ್ಯಕ್ಷೆ ಬಿ.ಎಂ. ನೇತ್ರಾವತಿ ಮಂಜುನಾಥ್, ಶೋಭಾ ಗಣೇಶ್ ಇತರರು ಇದ್ದರು. 
ಹಾಸನ

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಕ್ಕೆ ಖಂಡನೆ

ಪ್ರಮುಖ ಮುಖ್ಯಾಂಶಗಳು

  • ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಕ್ಕೆ ಖಂಡನೆ
  • ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ
  • ಅಪರ ಜಿಲ್ಲಾಧಿಕಾರಿಗೆ ಮನವಿ
ಹಾಸನ: ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಜಾತಾ ಹಂಡಿ ಅವರನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾದ ಘಟನೆ ಖಂಡಿಸಿ ಇತ್ತೀಚೆಗೆ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಆಲೂರು ಮಂಡಲ ಅಧ್ಯಕ್ಷೆ ಉಮಾ ರವಿ ಪ್ರಕಾಶ್ ಮಾತನಾಡಿ, ಜ.5 ರಂದು ಹುಬ್ಬಳ್ಳಿಯಲ್ಲಿ ನಡೆದ ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆಯರಿಗೆ ಗೌರವ ನೀಡುವ ಸಮಾಜದಲ್ಲಿ, ರಾಜಕೀಯ ದ್ವೇಷಕ್ಕಾಗಿ ಒಬ್ಬ ಮಹಿಳೆಯ ಮೇಲೆ ಸಾರ್ವಜನಿಕವಾಗಿ ದೌರ್ಜನ್ಯ ಎಸಗಿರುವುದು ಅಕ್ಷಮ್ಯ ಅಪರಾಧ. ಕಾಂಗ್ರೆಸ್ ಕಾರ್ಪೊರೇಟರ್ ಸುವರ್ಣ ನೀಡಿದ ದೂರಿನ ನೆಪದಲ್ಲಿ ಪೊಲೀಸರು ತಮ್ಮ ದರ್ಪ ತೋರಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರಾಗಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಪೊಲೀಸ್ ಇಲಾಖೆಯ ಮೇಲೆ ಸರ್ಕಾರದ ಹಿಡಿತ ಇಲ್ಲದಿರುವುದಕ್ಕೆ ಇದೇ ಸಾಕ್ಷಿ ಎಂದು ಟೀಕಿಸಿದರು.
ಇದಲ್ಲದೆ, ಜೀವಂತ ಜನಪ್ರತಿನಿಧಿಗೆ ಶ್ರದ್ಧಾಂಜಲಿ ಪೋಸ್ಟ್ ಹಾಕಿರುವ ಬಿಲ್ಲವ ಸಂದೇಶ್ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಅವಮಾನಕಾರಕ ಪೋಸ್ಟ್ ಹಾಕಿರುವುದು ತೀವ್ರ ಖಂಡನೀಯ. ಇದು ದಲಿತ ಮಹಿಳಾ ಶಾಸಕರಿಗೆ ಮಾಡಿದ ಅಪಮಾನವಾಗಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಪೊಲೀಸ್ ವ್ಯವಸ್ಥೆ ಕಾನೂನು ಸುವ್ಯವಸ್ಥೆ ಕಾಪಾಡಲು ಇರಬೇಕೆ ಹೊರತು, ಗೂಂಡಾಗಿರಿಗೆ ಅಲ್ಲ. ಮಹಿಳೆಯರ ಮೇಲೆ ದರ್ಪ ತೋರಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ, ಗೃಹ ಸಚಿವರು ಪ್ರಕರಣ ಕುರಿತು ಕೂಲಂಕಷ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಬಿ.ಎಂ. ನೇತ್ರಾವತಿ ಮಂಜುನಾಥ್, ಜಿಲ್ಲಾ ಕಮಿಟಿ ಶೋಭಾ ಗಣೇಶ್, ವೇದಾವತಿ, ಕಾರ್ಯದರ್ಶಿ ಅಂಬಿಕಾ, ವೀಣಾ ಲೋಕೇಶ್, ರೇಖಾ ವಿರುಪಾಕ್ಷ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ನಗರಾಧ್ಯಕ್ಷ ಯೋಗೀಶ್, ಚನ್ನಕೇಶವ, ಶೋಭನ್ ಬಾಬು ಇದ್ದರು.