ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2026-27 ನೇ ಸಾಲಿನ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆ ಕುರಿತು ಸಭೆ ನಡೆಸಿ ಡಿಸಿ ಲತಾಕುಮಾರಿ ಮಾತನಾಡಿದರು. ಜಂಟಿ ಕೃಷಿ ನಿರ್ದೇಶಕ ರಮೇಶ್, ಉಪ ನಿರ್ದೇಶಕಿ ಕೋಕಿಲಾ, ರಸಗೊಬ್ಬರ, ಬಿತ್ತನೆ ಬೀಜ ವಿತರಕರು ಇದ್ದರು. 
ಹಾಸನ

ರಸಗೊಬ್ಬರ ಬಳಕೆ ಕಡಿಮೆ ಮಾಡಲು ರೈತರಿಗೆ ಜಾಗೃತಿ ಮೂಡಿಸಿ

ಪ್ರಮುಖ ಮುಖ್ಯಾಂಶಗಳು

  • ರಸಗೊಬ್ಬರ ಬಳಕೆ ಕಡಿಮೆ ಮಾಡಲು ರೈತರಿಗೆ ಜಾಗೃತಿ ಮೂಡಿಸಿ
  • ಡಿಸಿ ಸೂಚನೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ
ಹಾಸನ: ರೈತರು ರಾಸಾಯನಿಕ ರಸಗೊಬ್ಬರಗಳ ಬಳಕೆ ಕಡಿಮೆ ಮಾಡುವುದರ ಮೂಲಕ ಕೃಷಿ ಚಟುವಟಿಕೆಗಳ ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರತಿ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆ ಕುರಿತು ಸಭೆ ನಡೆಸಿ ಮಾತನಾಡಿದ ಅವರು ರಸಗೊಬ್ಬರಗಳಿಗೆ ಪರ್ಯಾಯವಾಗಿ ಸಾವಯವ ಗೊಬ್ಬರವನ್ನು ಯಾವುದನ್ನು ಎಷ್ಟು ಪ್ರಮಾಣದಲ್ಲಿ ಬಳಸಬೇಕು ಎಂಬುದರ ಬಗ್ಗೆ ರೈತರಿಗೆ ಮಾಹಿತಿ ನೀಡಿ ಉತ್ತೇಜನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಭೂಮಿ ಹಾಳಾಗುವುದನ್ನು ತಪ್ಪಿಸಲು ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸಿ ಗುಣಮಟ್ಟವನ್ನು ಸುಧಾರಿಸಲು ಕಾರ್ಯೋನ್ಮುಖರಾಗಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಿ ರೈತರಿಗೆ ಸ್ಪಷ್ಟ ಮಾಹಿತಿ ನೀಡುವುದರ ಮೂಲಕ ಮನಃಪರಿವರ್ತನೆ ಯಾಗಿ ಸಾವಯವ ಕೃಷಿಗೆ ಬದಲಾಗುವಂತೆ ಉತ್ತೇಜನ ನೀಡಿ ಎಂದು ತಿಳಿಸಿದರು.
ಕೃಷಿ ಇಲಾಖೆ ಜತೆಗೆ ಇತರೆ ಇಲಾಖೆಗಳ ಸಮನ್ವಯತೆಯೊಂದಿಗೆ ಸಾವಯವ ಗೊಬ್ಬರವಾಗಿ ಕೋಳಿ, ಕುರಿ ಗೊಬ್ಬರ ಮತ್ತಿತರ ಬಳಸಬಹುದು ಎಂಬುದರ ಬಗ್ಗೆ ಪರಿಶೀಲನೆ ಮಾಡಿ ವರದಿ ಸಿದ್ಧಪಡಿಸಿ ಎಂದು ತಿಳಿಸಿದರು.
ಧರ್ತಿ ಮಾತಾ ಬಚಾವೋ ನಿಗ್ರಾಣಿ ಸಮಿತಿಗಳ ಕಾರ್ಯವನ್ನು ಚುರುಕುಗೊಳಿಸಿ ರೈತರಲ್ಲಿ ಜಾಗೃತಿ ಮೂಡಿಸಿ ಮಣ್ಣಿನ ಆರೋಗ್ಯದಲ್ಲಿ ಸುಸ್ಥಿರ ಸುಧಾರಣೆಯನ್ನು ತರುವಲ್ಲಿ ಯಶಸ್ವಿಯಾಗಿ ಎಂದು ತಿಳಿಸಿದರು.
ಕಾಡು ಕೃಷಿಗೆ ಹೆಚ್ಚಿನ ಉತ್ತೇಜನ ನೀಡಿ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಅರಿವು ಮೂಡಿಸಿ ಎಂದರಲ್ಲದೆ, ಗುಣಮಟ್ಟದ ಬಿತ್ತನೆ ಬೀಜವನ್ನು ಸಮರ್ಪಕವಾಗಿ ವಿಸರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಂಟಿ ಕೃಷಿ ನಿರ್ದೇಶಕ ರಮೇಶ್, ಉಪ ನಿರ್ದೇಶಕಿ ಕೋಕಿಲಾ, ರಸಗೊಬ್ಬರ, ಬಿತ್ತನೆ ಬೀಜ ವಿತರಕರು ಸಭೆಯಲ್ಲಿ ಹಾಜರಿದ್ದರು.