ಅರಕಲಗೂಡಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆ ಸಹಯೋಗದಲ್ಲಿ ಏರ್ಪಡಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಜನರ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
- ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆ ಜಿಲ್ಲಾ ನಿರ್ದೇಶಕಿ ಲೀಲಾವತಿ ಅಭಿಪ್ರಾಯ
ಅರಕಲಗೂಡು: ಪಟ್ಟಣದ ದೇವರಾಜು ಅರಸು ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆ ಸಹಯೋಗದಲ್ಲಿ ಇತ್ತೀಚೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆ ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಒಂದಲ್ಲೊಂದು ಕಾರ್ಯಗಳ ಮೂಲಕ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿದೆ. ಇದೀಗ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬದ ಪ್ರಯುಕ್ತ ಶಿಬಿರ ಆಯೋಜಿಸಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಶಾಂತಮಲ್ಲಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಮೇಲ್ವಿಚಾರಕ ಪ್ರಕಾಶ್ ಆರೋಗ್ಯ ತಪಾಸಣಾ ಶಿಬಿರದ ಕುರಿತು ಮಾಹಿತಿ ನೀಡಿದರು. ಸರ್ಕಾರಿ ಆಸ್ಪತ್ರೆಯ ಅಸಾಂಕ್ರಾಮಿಕ ರೋಗಗಳ ಘಟಕದ ಉಮೇಶ್, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ವಾಟಾಳ್ ರಮೇಶ್, ಡಾ.ಪ್ರೀತಮ್, ಡಾ.ಚೇತನ, ಆಪ್ತ ಸಮಾಲೋಚಕ ಯಶೋದಾ, ಗೌರಮ್ಮ, ಸಂಘದ ಸದಸ್ಯರು, ನವಜೀವನ ಸಮಿತಿ ಸದಸ್ಯರು ಇದ್ದರು.
ಶಿಬಿರದಲ್ಲಿ ದಂತ ಚಿಕಿತ್ಸೆ ತಂಡ, ಸಕ್ಕರೆ ಕಾಯಿಲೆ ಪರೀಕ್ಷೆ, ಅತಿಯಾದ ಕೆಮ್ಮು ಜ್ವರ ಪರೀಕ್ಷೆ ಹಾಗೂ ಮಹಿಳೆಯರಿಗೆ ಗುಪ್ತ ಸಮಾಲೋಚನೆ ಸಭೆ ನಡೆಯಿತು. ಇದಕ್ಕೂ ಮುನ್ನ ಗ್ರಾಮದೇವತೆ ಶ್ರೀ ದೊಡ್ಡಮ್ಮ ದೇವಸ್ಥಾನದಲ್ಲಿ ಕುಂಕುಮ ಅರ್ಚನೆ, ವಿಶೇಷ ಪೂಜೆ ಸಲ್ಲಿಸಲಾಯಿತು.