ಹಾಸನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್ ಮಾತನಾಡಿದರು. ರಾಘವೇಂದ್ರ ಕುಮಾರ್, ಆರ್.ಬಿ.ಪುಟ್ಟೇಗೌಡ, ರತಿ, ತಾರಾನಾಥ್ ಇದ್ದರು. 
ಹಾಸನ

ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನಕ್ಕೆ ಒತ್ತು ನೀಡಿ

ಪ್ರಮುಖ ಮುಖ್ಯಾಂಶಗಳು

  • ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನಕ್ಕೆ ಒತ್ತು ನೀಡಿ
  • ಎಡಿಸಿ ಜಗದೀಶ್ ಗಂಗಣ್ಣನವರ್ ನಿರ್ದೇಶನ
  • ಜಾಗೃತಿ ಸಮಿತಿ ಸಭೆ
ಹಾಸನ: ಜಿಲ್ಲೆಯಲ್ಲಿ ಮಾರ್ಗಸೂಚಿ ಅನ್ವಯ ಶೇ.60 ಮತ್ತು 40 ಪ್ರಮಾಣದಲ್ಲಿ ಕನ್ನಡ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಲು ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂಗಡಿ-ಮುಂಗಟ್ಟುಗಳಿಗೆ ಪರವಾನಗಿ ನೀಡುವ ಸಂದರ್ಭದಲ್ಲಿ ನಾಮಫಲಕದಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಬಳಕೆ ಮಾಡಿರಬೇಕು ಎಂದು ತಿಳಿಸಬೇಕು ಎಂದರು.
ಮಹಾನಗರ ಪಾಲಿಕೆ, ನಗರ, ಪಟ್ಟಣ ಪ್ರದೇಶಗಳಲ್ಲಿ ಅಂಗಡಿಗಳ ನಾಮಫಲಕಗಳ ನಿರ್ವಹಣೆಯನ್ನು ಸ್ಥಳೀಯ ಸಂಸ್ಥೆಗಳು ಮಾಡುತ್ತವೆ. ಅದೇ ರೀತಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳು ನಿರ್ವಹಣೆ ಮಾಡುತ್ತವೆ. ಕೈಗಾರಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಕೈಗಾರಿಕಾ ಇಲಾಖೆ, ಖಾಸಗಿ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬ್ಯಾಂಕ್‌ಗಳು, ರಾಷ್ಟೀಯ ಹೆದ್ದಾರಿ ಹಾಗೂ ರೈಲ್ವೆ ನಿಲ್ದಾಣಗಳು, ಪೆಟ್ರೋಲ್ ಬಂಕ್‌ಗಳಲ್ಲಿಯೂ ಕೂಡ ನಾಮಫಲಕಗಳು ಕಡ್ಡಾಯವಾಗಿ ನಿಯಮನುಸಾರ ಅಳವಡಿಸಿರಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಲ್ಲೇಶ್‌ಗೌಡ ಮಾತನಾಡಿ, ಕೇಂದ್ರಿಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುವ ಮಕ್ಕಳು ಕನ್ನಡ ಭಾಷೆಯನ್ನು ಕಲಿಯಲು ಕನ್ನಡ ಸಾಹಿತ್ಯ ಪರಿಷತ್ ನಡೆಸುವ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೆ ಮುಂದೆ ವೃತ್ತಿ ಜೀವನದಲ್ಲಿ ಮಕ್ಕಳಿಗೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ರಾಘವೇಂದ್ರ ಕುಮಾರ್, ಆರ್.ಬಿ.ಪುಟ್ಟೇಗೌಡ, ರತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ತಾರಾನಾಥ್ ಇತರರು ಇದ್ದರು.