ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ 12 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ನಗರದ ಶ್ರೀ ಹಾಸನಾಂಬ ಮತ್ತು ಶ್ರೀ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಅಮಿತ್ ಶೆಟ್ಟಿ, ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಮುಖಂಡರಾದ ಎಸ್.ಡಿ. ಚಂದ್ರು, ಆರ್. ಮೋಹನ್, ಬಿ.ಎಚ್. ನಾರಾಯಣಗೌಡ ಇತರರು ಇದ್ದರು. 
ಹಾಸನ

ಮೋದಿ ನಾಯಕತ್ವದಲ್ಲಿ ದೇಶದ ಅಭಿವೃದ್ಧಿ

ಪ್ರಮುಖ ಮುಖ್ಯಾಂಶಗಳು

  • ಮೋದಿ ನಾಯಕತ್ವದಲ್ಲಿ ದೇಶದ ಅಭಿವೃದ್ಧಿ
  • ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಅಭಿಪ್ರಾಯ
  • ಸುದೀರ್ಘ ಆಡಳಿತಕ್ಕೆ ಮೆಚ್ಚಿ ವಿಶೇಷ ಪೂಜೆ
ಹಾಸನ: ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ 12 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಘಟಕ, ಹಾಸನ ವಿಧಾನಸಭಾ ಕ್ಷೇತ್ರ ಹಾಗೂ ನಗರ ಮಂಡಳಿಯಿಂದ ನಗರದ ಶ್ರೀ ಹಾಸನಾಂಬಾ ಮತ್ತು ಶ್ರೀ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಸಿದ್ದೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಹಾಸನಾಂಬೆ ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಸುದೀರ್ಘ 12 ವರ್ಷಗಳ ಕಾಲ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತಂದ ನಾಯಕನಾಗಿದ್ದಾರೆ ಎಂದರು.
ಬಾಲ್ಯದಿಂದಲೇ ಸ್ವಯಂ ಸೇವಕರಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಗುಜರಾತ್‌ನಿಂದ ಆರಂಭವಾದ ಅವರ ಸಾರ್ವಜನಿಕ ಜೀವನ ಇಂದು ದೇಶದ ಅತ್ಯುನ್ನತ ಹುದ್ದೆಯಾದ ಪ್ರಧಾನಮಂತ್ರಿ ಸ್ಥಾನಕ್ಕೆ ತಲುಪಿರುವುದು ಅವರ ಸಮರ್ಪಣೆ ಮತ್ತು ನಾಯಕತ್ವಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಸೀಮಿತವಾಗದೆ ದೇಶದ ಪ್ರತಿಯೊಬ್ಬ ನಾಗರಿಕರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.
ಕರೊನಾ ಸಂಕಷ್ಟದ ಸಂದರ್ಭದಲ್ಲಿ ಜಾತಿ, ಧರ್ಮ, ಭಾಷೆ ಎಂಬ ಬೇಧವಿಲ್ಲದೆ ದೇಶದ ಜನತೆಗೆ ಲಸಿಕೆ ಒದಗಿಸುವುದರ ಜತೆಗೆ ವಿಶ್ವದ ಹಲವು ರಾಷ್ಟ್ರಗಳಿಗೂ ಲಸಿಕೆ ಪೂರೈಸುವ ಮೂಲಕ ಭಾರತ ಮಾನವೀಯತೆಯ ಸಂದೇಶವನ್ನು ಸಾರಿದೆ. ಇದು ಪ್ರಧಾನಿ ಮೋದಿ ಅವರ ದೂರದೃಷ್ಟಿ ಮತ್ತು ಬದ್ಧತೆಯ ಪ್ರತೀಕವಾಗಿದೆ ಎಂದು ಹೇಳಿದರು.
ಪೂಜೆಯ ನಂತರ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಮುಖಂಡರಾದ ಎಸ್.ಡಿ. ಚಂದ್ರು, ನಗರಸಭೆ ಮಾಜಿ ಅಧ್ಯಕ್ಷ ಆರ್. ಮೋಹನ್, ಬಿ.ಎಚ್. ನಾರಾಯಣಗೌಡ ಹಾಗೂ ಕಾರ್ಯಕರ್ತರು ಹಾಗೂ ಪಕ್ಷದ ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದರು.