ಹರಳಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಶಾಸಕ ಸ್ವರೂಪ ಪ್ರಕಾಶ್, ಜಿಲ್ಲಾಧಿಕಾರಿ ಲತಾ ಕುಮಾರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಲರಾಂ, ಸಿಇಒ ಶುಭಂ ಶುಕ್ಲ, ಎಸ್‌ಡಿಎಂಸಿ ಅಧ್ಯಕ್ಷೆ ಸುಮಿತ್ರಾ, ಡಯಟ್ ಪ್ರಾಂಶುಪಾಲ ರುದ್ರೇಶ್ ಇತರರಿದ್ದರು.
- ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಹೆಚ್ಚಿನ ಒತ್ತು ನೀಡಿ
- ಶಾಸಕ ಸ್ವರೂಪ್ ಪ್ರಕಾಶ್ ಸೂಚನೆ
- ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
ಹಾಸನ: ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಹೆಚ್ಚಿನ ಒತ್ತು ನೀಡುವುದರ ಜತೆಗೆ ಉತ್ತಮ ಶಿಕ್ಷಣ ಒದಗಿಸಲು ಶಾಸಕ ಸ್ವರೂಪ್ ಪ್ರಕಾಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹರಳಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ 2026-27 ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.
ದಾಸರ ಕೊಪ್ಪಲು ಮತ್ತು ಹರಳಹಳ್ಳಿ ಶಾಲೆಯ ಶಿಕ್ಷಕರು ಬದ್ಧತೆಯಿಂದ ಕೆಲಸ ನಿರ್ವಹಿಸುತ್ತಿದ್ದು, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗೂ ಒತ್ತು ನೀಡಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು. ಸದರಿ ಶಾಲೆಯನ್ನು ಕೆಪಿಎಸ್ ಶಾಲೆಗೆ ಆಯ್ಕೆ ಮಾಡಿದ್ದು, ಮಕ್ಕಳಿಗೆ ಮುಂದಿನ ದಿನಗಳಲ್ಲಿ ಪಿಯುಸಿವರೆಗೆ ಶಿಕ್ಷಣ ದೊರೆಯಲಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲೆ ಹಾಗೂ ರಾಜ್ಯಾದ್ಯಂತ ಇಂದು ಅತ್ಯಂತ ಸಂತೋಷ, ಸಂಭ್ರಮ ಮತ್ತು ಸಡಗರದಿಂದ ಶಾಲಾ ಪ್ರಾರಂಭೋತ್ಸವ ನಡೆಯತ್ತಿದೆ. ಮಕ್ಕಳ ಸಂಪೂರ್ಣ ಬೆಳವಣಿಗೆಗೆ ಪೂರಕವಾಗಿ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರಿ ಶಾಲೆಗಳ ಗುರಿಯಾಗಿದೆ ಎಂದರು.
ಮಕ್ಕಳು ಪ್ರತಿದಿನ ಕಠಿಣ ಪರಿಶ್ರಮ ಹಾಕಿ ಏಕಾಗ್ರತೆಯಿಂದ ಕಲಿಯುವಂತೆ ತಿಳಿಸಿದರು. ಸರ್ಕಾರಿ ಶಾಲೆಗಳ ಮಕ್ಕಳ ಭವಿಷ್ಯ ಉಜ್ವಲವಾಗಲು ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಎಲ್ಲ ಮಕ್ಕಳು ಉತ್ತೀರ್ಣರಾಗಿದ್ದು, ಶೇ.100ರಷ್ಟು ಫಲಿತಾಂಶ ಬಂದಿದೆ ಎಂದು ತಿಳಿಸಿದರು. ಹಾಸನ ಜಿಲ್ಲೆಯನ್ನು ಹಸಿರು ಹಾಸನವಾಗಿ ನಿರ್ಮಾಣ ಮಾಡುವ ನಿಟ್ಟಿನಲ್ಲಿ 5 ಲಕ್ಷ ಸಸಿಗಳನ್ನು ನೆಟ್ಟು ಪೋಷಣೆ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ತಿಳಿಸಿದರು.
ಹರಳಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಹಚ್ಚಹಸುರಿನಿಂಗ ಕಂಗೊಳಿಸುವ ರೀತಿಯಲ್ಲಿ ನಿರ್ವಹಣೆ ಮಾಡಿರುವುದಕ್ಕಾಗಿ ಅಭಿನಂದನೆಗಳನ್ನು ತಿಳಿಸಿದರಲ್ಲದೆ, ಇದೇರೀತಿ ಎಲ್ಲಾ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಲು ಮುಂದಾಗಬೇಕು ಎಂದರು.
ಉತ್ತಮ ಪರಿಸರಕ್ಕಾಗಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಿ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಬೇರ್ಪಡಿಸಿ ನೀಡುವುದು, ಪ್ಲಾಸ್ಟಿಕ್ ಬಳಕೆ ಮಾಡದಂತೆ ಹಾಗೂ ಕಸವನ್ನು ಎಲ್ಲೆಂದರಲ್ಲಿ ಹಾಕದಂತೆ ಮನವರಿಕೆ ಮಾಡಿಕೊಡುವಂತೆ ಶಿಕ್ಷಕರಿಗೆ ಸೂಚನೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಲರಾಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಉತ್ತಮ ಕಲಿಕೆ ಉತ್ತಮ ಭವಿಷ್ಯ ಎಂಬ ಘೋಷ ವಾಕ್ಯದೊಂದಿಗೆ ಈ ಬಾರಿಯ ಶೈಕ್ಷಣಿಕ ವರ್ಷವನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು. ಸಮವಸ್ತ್ರ, ಪಠ್ಯಪುಸ್ತಕಗಳನ್ನು ಕೂಡ ಇಂದು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಕ್ಕಳಿಗೆ ಸಾಂಕೇತಿಕವಾಗಿ ಸಮವಸ್ತ್ರ, ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಂ ಶುಕ್ಲ, ಎಸ್‌ಡಿಎಂಸಿ ಅಧ್ಯಕ್ಷೆ ಸುಮಿತ್ರಾ, ಡಯಟ್ ಪ್ರಾಂಶುಪಾಲ ರುದ್ರೇಶ್ ಇತರರಿದ್ದರು.