ಅರಕಲಗೂಡಿನಲ್ಲಿ ಆಯೋಜಿಸಿದ್ದ ಶಾಸಕ ಎ. ಮಂಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೆ.ಸಿ. ಸೌಮ್ಯಾ, ನಾಗರಾಜು ಇದ್ದರು.
ಅರಕಲಗೂಡು: ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮಹತ್ವದ ರೂಪುರೇಷೆ ಸಿದ್ಧಪಡಿಸಿದೆ ಎಂದು ಶಾಸಕ ಎ. ಮಂಜು ಹೇಳಿದರು.
ಈ ಬಾರಿ ಅರಕಲಗೂಡು ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆಯಬೇಕು ಎಂಬ ಗುರಿಯನ್ನು ಹೊಂದಲಾಗಿದೆ. ಕಳೆದ ಬಾರಿ ಜಿಲ್ಲೆಯಲ್ಲಿ 8ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಏರಿಕೆಯಾಗಿ ಉತ್ತಮ ಸಾಧನೆ ಮಾಡಲಾಗಿದೆ. ಈ ಸಾಧನೆಯನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಸಂಕಲ್ಪ ನಮ್ಮದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ಉದ್ದೇಶದಿಂದ ಕಳೆದ ವರ್ಷದಂತೆ ಈ ಬಾರಿಯೂ ನಾನು ಸೇರಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ವಿದ್ಯಾರ್ಥಿಗಳ ಮನೆಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ, ಪ್ರೋತ್ಸಾಹ ನೀಡಬೇಕು ಎಂದು ಸೂಚಿಸಿದರು. ಈ ಸಂಬಂಧ ತಹಸೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ಅಗತ್ಯ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ ಎಂದರು.
ಪರೀಕ್ಷಾ ತಯಾರಿಯ ಈ ಸಮಗ್ರ ಪ್ರಕ್ರಿಯೆಯಲ್ಲಿ ಶಿಕ್ಷಕರು ಸಹ ಸಕ್ರಿಯವಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ನಿರಂತರ ಮಾರ್ಗದರ್ಶನ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ತಹಸೀಲ್ದಾರ್ ಕೆ.ಸಿ. ಸೌಮ್ಯಾ, ಇಸಿಒ ನಾಗರಾಜ್ ಗೋಷ್ಠಿಯಲಿದ್ದರು.