ದಿಡಗ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದಡಿ 21 ಲಕ್ಷ ರೂ. ವೆಚ್ಚದಲ್ಲಿ ಬಸ್ ನಿಲ್ದಾಣಕ್ಕೆ ಕಾಂಕ್ರೀಟ್ ನೆಲಹಾಸು ನಿರ್ಮಾಣ ಕಾಮಗಾರಿಗೆಶಾಸಕ ಸಿ.ಎನ್.ಬಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು. 
ಹಾಸನ

ಆರೋಗ್ಯ ಕೇಂದ್ರಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ

ಹಿರೀಸಾವೆ: ಕೃಷಿ ಹಾಗೂ ಇನ್ನಿತರ ಚಟುವಟಿಕೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಪರಿಣಾಮ ಪರಿಶ್ರಮವಿಲ್ಲದ ಜೀವನವು ಮನುಷ್ಯನನ್ನು ಅನಾರೋಗ್ಯದ ಕೂಪಕ್ಕೆ ತಳ್ಳುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಹೋಬಳಿಯ ದಿಡಗ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದಡಿ 21 ಲಕ್ಷ ರೂ. ವೆಚ್ಚದಲ್ಲಿ ಬಸ್ ನಿಲ್ದಾಣಕ್ಕೆ ಕಾಂಕ್ರೀಟ್ ನೆಲಹಾಸು ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿನ ಎಲ್ಲ ಆರೋಗ್ಯ ಕೇಂದ್ರಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.
ಹೋಬಳಿ ಕೇಂದ್ರ ಹಿರೀಸಾವೆ ಸಮುದಾಯ ಆರೋಗ್ಯ ಕೇಂದ್ರದ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ಅಗತ್ಯವಿದ್ದು, ಸರ್ಕಾರದ ಗಮನ ಸೆಳೆಯಲಾಗಿದೆ. ಶ್ರವಣಬೆಳಗೊಳ ಆರೋಗ್ಯ ಕೇಂದ್ರದ ಶವಾಗಾರ ಕೊಠಡಿ ನಿರ್ಮಾಣ ಕಾರ್ಯಕ್ಕೆ ಅಗತ್ಯ ಅನುದಾನ ಕಲ್ಪಿಸುವಂತೆ ಮನವಿ ಮಾಡಲಾಗಿದೆ. ದಿಡಗ ಆರೋಗ್ಯ ಕೇಂದ್ರಕ್ಕೆ ಅಗತ್ಯದ ಮೇರೆಗೆ ತೋಟಿ ಆರೋಗ್ಯ ಕೇಂದ್ರದ ವೈದ್ಯರನ್ನು ವಾರದಲ್ಲಿ ಎರಡು ದಿನ ಭೇಟಿ ನೀಡುವ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತೊಬ್ಬ ಕಾಯಂ ವೈದ್ಯರ ನೇಮಕಾತಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
ದಿಡಗ ಗ್ರಾಮವು ತಾಲೂಕಿನ ಗಡಿ ಭಾಗದಲ್ಲಿದ್ದು ತಿಪಟೂರು, ತುರುವೇಕೆರೆ ಹಾಗೂ ನಾಗಮಂಗಲ ತಾಲೂಕು ಕೇಂದ್ರಗಳಿಗೆ ಸಂಪರ್ಕ ಕಲ್ಪಿಸಲಿದೆ. ಊಟಿ, ಬೆಂಗಳೂರು ಹಾಗೂ ಮೈಸೂರು ನಗರಗಳಿಗೂ ಪ್ರತಿದಿನ ಇಲ್ಲಿಂದ ಸಾರಿಗೆ ಬಸ್ಸುಗಳ ಸಂಚಾರದ ವ್ಯವಸ್ಥೆ ಇರುವುದರಿಂದ ಇಲ್ಲಿನ ಬಸ್ ನಿಲ್ದಾಣದಲ್ಲಿ ಪ್ರತಿ ರಾತ್ರಿ 10 ಸಾರಿಗೆ ಬಸ್ ನಿಲುಗಡೆಯಾಗಲಿವೆ. ಆದ್ದರಿಂದ ಹೆಚ್ಚಿನ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಇಲ್ಲಿನ ಬಸ್ ನಿಲ್ದಾಣಕ್ಕೆ ಕಾಂಕ್ರೀಟ್ ನೆಲಹಾಸಿನ ಜತೆಗೆ ಶೆಲ್ಟರ್ ನಿರ್ಮಾಣ ಮಾಡಲಾಗುವುದು. ಸರ್ಕಾರದಿಂದ ನಿರೀಕ್ಷಿತ ಅನುದಾನ ಸಿಗುತ್ತಿಲ್ಲ. ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬೇಕಿದೆ. ಇಲ್ಲಿನ ಪಶು ಆಸ್ಪತ್ರೆಯ ವೈದ್ಯರ ನೇಮಕಾತಿಗೆ ಗಮನಹರಿಸಲಾಗುವುದು ಎಂದರು.
ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಕೆ.ಯೋಗೇಶ್ ಮಾತನಾಡಿ, ಶಾಸಕ ಸಿ.ಎನ್.ಬಾಲಕೃಷ್ಣ ಅವರ ಸಹಕಾರ ಹಾಗೂ ಮಾರ್ಗದರ್ಶನದಲ್ಲಿ ಕಳೆದ ನಮ್ಮ ಅವಧಿಯಲ್ಲಿ ಸಂಘಕ್ಕೆ ಹೈಟೆಕ್ ಮಾದರಿಯ ಹೊಸ ಕಟ್ಟಡ ನಿರ್ಮಿಸಲಾಗಿದೆ. ಕೇವಲ 10 ಗುಂಟೆ ಜಮೀನು ಹೊಂದಿರುವ ರೈತರಿಗೂ ಸೇರಿದಂತೆ 15 ಕೋಟಿ ರೂ. ಗೂ ಹೆಚ್ಚು ಸಾಲದ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಸ್ಥಳೀಯ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕರು ಕಳೆದ ವರ್ಷ ಎಟಿಎಂ ಕೇಂದ್ರ ಕಲ್ಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಡಿಸಿಸಿ ಬ್ಯಾಂಕ್ ತರಲು ಯೋಜನೆ ರೂಪಿಸುವಂತೆ ಈಗಾಗಲೇ ಮನವಿ ಮಾಡಲಾಗಿದೆ. ಗಮನಹರಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಂ.ಆರ್. ವಾಸು, ಎಪಿಎಂಸಿ ಮಾಜಿ ಅಧ್ಯಕ್ಷ ಉಗೇನಹಳ್ಳಿ ರಘುರಾಂ, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಸ್.ಕುಮಾರ್, ಸಂಪತ್ ಕುಮಾರ್, ತಾತೇಗೌಡ, ಉಪಾಧ್ಯಕ್ಷ ಮಹೇಶ್, ಮಾಜಿ ಉಪಾಧ್ಯಕ್ಷ ಕುಮಾರ್, ನಿರ್ದೇಶಕರಾದ ಬಾಲು, ಟಿ.ಎಸ್. ಮಧು, ಪ್ರಮುಖರಾದ ಗವೀಶ್, ಆನಂದ್, ನಿಂಗೇಗೌಡ ಹಾಗೂ ಇತರರು ಇದ್ದರು.