ಆಲೂರು ತಾಲೂಕಿನ ಸಮುದ್ರವಳ್ಳಿ ಗ್ರಾಮದ ದೇವನಕಟ್ಟೆ ಹಳ್ಳಕ್ಕೆ ಅಡ್ಡಲಾಗಿ ನಿರ್ಮಾಣವಾಗಲಿರುವ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ಸಿಮೆಂಟ್ ಮಂಜು ಭೂಮಿ ಪೂಜೆ ನೆರವೇರಿಸಿದರು. ಮೋಹನ್ ಮಾವನೂರು, ಮಹೇಂದರ್ ಇತರರಿದ್ದರು.
ಆಲೂರು : ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನತೆಗೆ ನೀಡಿದ ಭರವಸೆಯಂತೆ ಮಾದರಿ ವಿಧಾನ ಸಭಾ ಕ್ಷೇತ್ರವನ್ನಾಗಿ ಮಾಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದ್ರವಳ್ಳಿ ಗ್ರಾಮದ ದೇವನಕಟ್ಟೆ ಹಳ್ಳಕ್ಕೆ ಅಡ್ಡಲಾಗಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಬೇಸಿಗೆ ಕಾಲದಲ್ಲಿಯೂ ಸಹ ರೈತರಿಗೆ ನೀರು ಒದಗಿಸುವ ಉದ್ದೇಶದಿಂದ ಈ ಮಹತ್ವಾಕಾಂಕ್ಷಿಯ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆಯಿಂದ ಸುಮಾರು 45 ಎಕರೆ ಭೂ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿದೆ. ಸಾವಿರಾರು ರೈತರಿಗೆ ಅನುಕೂಲವಾಗಲಿದೆ. ಇದನ್ನು ಸದುಪಯೋಗಪಡಿಸಿಕೊಂಡು ರೈತರು ಕೃಷಿ ಮಾಡಬೇಕೆಂದು ತಿಳಿಸಿದರು.
ಹುಣಸವಳ್ಳಿ ಗ್ರಾಮ ಪಂಚಾಯಿತಿಯ ಸದಸ್ಯ ಮೋಹನ್ ಮಾವನೂರು, ತಾಳೂರು ಗ್ರಾಮ ಪಂಚಾಯಿತಿಯ ಸದಸ್ಯ ಮಹೇಂದರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಬ್ಬನ ಕೃಷ್ಣಮೂರ್ತಿ, ತಾಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಹರೀಶ್, ಬಿಜೆಪಿ ಮುಖಂಡರಾದ ವೆಂಕಟೇಶ್ ವೀರಪ್ಪ. ಕೃಷ್ಣಮೂರ್ತಿ. ಚೇತನ್. ಅಧಿಕಾರಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.