. ಹೊಳೆನರಸೀಪುರ ಪಟ್ಟಣದಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಚ್ ಡಿ ರೇವಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೊಳೆನರಸೀಪುರ: ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಶಾಲಾ-ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಶಾಸಕ ಎಚ್ ಡಿ ರೇವಣ್ಣ ದೂರಿದ್ದಾರೆ.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ತಾಲೂಕು ಆಡಳಿತ ಪಟ್ಟಣದ ಬಯಲು ರಂಗ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದಲ್ಲಿ ಮೂಲಭೂತ ಸೌಕರ್ಯಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಸರ್ಕಾರ ಶಿಕ್ಷಕರನ್ನು ನೇಮಿಸಿಕೊಳ್ಳುವಲ್ಲಿ ಮೀನಾ ಮೇಷ ಎಣಿಸುತ್ತಿದ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಬಹುತೇಕ ಶಾಲೆಗಳು ಮುಚ್ಚುತ್ತಿವೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಬ್ಲಿಕ್ ಶಾಲೆಯನ್ನು ತೆರೆದು ಶಿಕ್ಷಕರನ್ನು ನೇಮಿಸಿ ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ಪ್ರಬಲರಾಗುವಂತೆ ಕ್ರಮ ವಹಿಸಬೇಕು. ಸರ್ಕಾರ ಖಾಸಗಿ ಶಾಲೆಗಳಿಗೆ ಒತ್ತು ಕೊಡುವ ಬದಲು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸಿದರು.
ಕೃಷಿ, ರೇಷ್ಮೆ, ತೋಟಗಾರಿಕೆ ಸೇರಿದಂತೆ ಬಹುತೇಕ ಸರ್ಕಾರಿ ಇಲಾಖೆಗಳಲ್ಲಿ ಶೇಕಡ 60ರಷ್ಟು ಅಧಿಕಾರಿಗಳೇ ಇಲ್ಲ . ಖಾಲಿ ಹುದ್ದೆಯನ್ನು ಭರ್ತಿ ಮಾಡಿ ಸಾರ್ವಜನಿಕರ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು. ಇಲಾಖೆಗಳಿಗೆ ಸಲಕರಣೆಗಳನ್ನು ಒದಗಿಸಿ ರೈತರು ನೆಮ್ಮದಿಯಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಸಹಕರಿಸಬೇಕು . ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಓ ಗಳಿಲ್ಲದೆ ಕೆಲಸಗಳಾಗುತ್ತಿಲ್ಲ. ಒಬ್ಬೊಬ್ಬ ಪಿಡಿಒ 3 ರಿಂದ 4 ಗ್ರಾಮ ಪಂಚಾಯಿತಿಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ ಹೀಗಾದರೆ ರೈತರ ಪರಿಸ್ಥಿತಿ ಹದಗೆಡುತ್ತದೆ. ಸರ್ಕಾರ ಕೂಡಲೇ ಇತ್ತ ಗಮನ ಹರಿಸಿ ಅಭಿವೃದ್ಧಿ ಅಧಿಕಾರಿಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.
ಡ್ಯಾನಿಪೆರೇರಾ ಅವರು ಮುಖ್ಯ ಭಾಷಣಕಾರರಾಗಿ ಗಣರಾಜ್ಯೋತ್ಸವವನ್ನು ಕುರಿತು ಸಮಗ್ರವಾಗಿ ಮಾತನಾಡಿದರು. ಎಸ್ ಎಸ್ ಎಲ್ ಸಿ ಮೂರು ಜನ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಬದಲು ಐವತ್ತು ಸಾವಿರ ಚೆಕ್ ವಿತರಿಸಲಾಯಿತು. ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಸೋಮ ಲಿಂಗೇಗೌಡ, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜ್, ಪುರಸಭೆ ಮುಖ್ಯ ಅಧಿಕಾರಿ ಶಿವಶಂಕರ್, ಸಿ ಪಿ ಐ ಸಂತೋಷ್ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪೃಥ್ವಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಆರ್ ಬಿ ಪುಟ್ಟೇಗೌಡ,ಸೇರಿದಂತೆ ತಾಲೂಕಿನ ಎಲ್ಲಾ ಸರ್ಕಾರಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.