ಹೆಣ್ಣು ಮಕ್ಕಳಲ್ಲಿ ಗರ್ಭ ಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಎಚ್‌ಪಿವಿ ಲಸಿಕಾ ಅಭಿಯಾನದ ಅಂಗವಾಗಿ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಕ್ಕಳಿಗೆ ಲಸಿಕೆ ಹಾಕಲಾಯಿತು. 
ಹಾಸನ

ಹೆಣ್ಣು ಮಕ್ಕಳಿಗೆ ಎಚ್‌ಪಿವಿ ಲಸಿಕೆ ಹಾಕಿಸಿ

ಬೇಲೂರು: ಗರ್ಭ ಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ 2026ರ ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್)ಲಸಿಕಾ ಅಭಿಯಾನದ ಅಂಗವಾಗಿ ಪಟ್ಟಣದ ಸರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಆಯೋಜಿಸಿದ್ದ ಲಸಿಕಾ ಕಾರ್ಯಕ್ರಮದಲ್ಲಿ 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಜಾಗೃತಿ ಮೂಡಿಸಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ ಮಾತನಾಡಿ, ಗರ್ಭ ಕಂಠದ ಕ್ಯಾನ್ಸರ್ ತಡೆಗಟ್ಟಲು ಉಚಿತವಾಗಿ ಎಚ್‌ಪಿವಿ ಲಸಿಕೆ ಅತ್ಯಂತ ಸುರಕ್ಷಿತ ಹಾಗೂ ಪರಿಣಾಮಕಾರಿಯಾಗಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಸರ್ಕಾರಿ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆದವರಿಗೆ ಪ್ರಮಾಣ ಪತ್ರ ಸಹ ವಿತರಿಸಲಾಗುತ್ತಿದೆ. ಆದ್ದರಿಂದ ಸರ್ವಜನಿಕರು, ಪಾಲಕರು ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಸ್ತ್ರೀ ಮತ್ತು ಪ್ರಸೂತಿ ತಜ್ಞ ಡಾ.ಸತೀಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಉಷಾ, ಆರೋಗ್ಯ ನಿರೀಕ್ಷಣಾಧಿಕಾರಿ ದಯಾನಂದ್, ವ್ಯವಸ್ಥಾಪಕ ಅಂಕಿತ್, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಮಂಗಳಮ್ಮ, ಆಶಾ ಮೇಲ್ವಿಚಾರಕಿ ವಂದನ, ಹಿರಿಯ ಶುಶ್ರೂಷಣಾಧಿಕಾರಿ ಶಶಿಕಲಾ ವನಿತಾ, ಮಣಿ, ಪ್ರತಿಕ್ಷಾ ಸೇರಿದಂತೆ ಇತರರಿದ್ದರು.