ಅರಕಲಗೂಡು ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
- ಜಿಪಂ ಉಪ ಕಾರ್ಯದರ್ಶಿ ಹಾಗೂ ತಾಪಂ ಆಡಳಿತಾಧಿಕಾರಿ ಎಂ.ಬಾಬು ಎಚ್ಚರಿಕೆ
ಅರಕಲಗೂಡು : 15ನೇ ಹಣಕಾಸು ಯೋಜನೆಯ ಬಾಕಿ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸದಿದ್ದರೆ 16 ನೇ ಹಣಕಾಸು ಯೋಜನೆಯ ಹಣ ಬಿಡುಗಡೆಯಾಗುವುದಿಲ್ಲ, ಗ್ರಾಪಂ ಆಡಳಿತಾಧಿಕಾರಿಗಳು ವೈಯಕ್ತಿಕ ಗಮನ ಹರಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಪಂ ಉಪ ಕಾರ್ಯದರ್ಶಿ ಹಾಗೂ ತಾಪಂ ಆಡಳಿತಾಧಿಕಾರಿ ಎಂ.ಬಾಬು ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ವಿಶೇಷ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 15 ನೇ ಹಣಕಾಸು ಯೋಜನೆಯಲ್ಲಿ 21ಕೋಟಿ ರೂ.ಹಣ ಬಾಕಿ ಉಳಿದಿದೆ. ನಿಯಮಾನುಸಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ರಸ್ತೆ, ಕಟ್ಟಡ ಮುಂತಾದ ಶಾಶ್ವತ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು ಎಂದರು. ಮಾ 10 ರೊಳಗೆ ಉಳಿಕೆ ಕಾಮಗಾರಿಗಳನ್ನು ಶೇ.100 ರಷ್ಟು ಪೂರ್ಣಗೊಳಿಸಬೇಕು. ಮಾ. 20 ಕ್ಕೆ ಖಜಾನೆ ಲಾಕ್ ಆಗಲಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಬಹಳಷ್ಟು 3 ರಿಂದ 5 ಲಕ್ಷ ರೂ. ಮೊತ್ತದ ಕಾಮಗಾರಿಗಳಿದ್ದು ಇವುಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
ಬೇಸಿಗೆ ದಿನಗಳಲ್ಲಿ ಬಿಸಿಲು ತೀವ್ರವಾಗಲಿದೆ ಎಂದು ತಜ್ಞರ ವರದಿಗಳು ಮಾಧ್ಯಮದಲ್ಲಿ ಪ್ರಕಟವಾಗಿವೆ. ಜನರ ಆರೋಗ್ಯದ ಮೇಲೆ ಬೀರುವ ಪರಿಣಾಮಗಳ ಕುರಿತು ಆರೋಗ್ಯ ಇಲಾಖೆ ಜನರಲ್ಲಿ ಅರಿವು ಮೂಡಿಸಬೇಕು. ಜಾತ್ರೆ, ಹಬ್ಬಗಳಲ್ಲಿ ಹೆಚ್ಚಿನ ಜನಸಂದಣಿ ಸೇರುತ್ತಿದ್ದು, ಕುಡಿಯುವ ನೀರಿಬ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು. ನೀರಿನ ಶುದ್ಧತೆ ಕುರಿತು ಕಡ್ಡಾಯವಾಗಿ ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಲೆ, ವಸತಿಶಾಲೆ, ಹಾಸ್ಟೆಲ್‌ಗಳಲ್ಲಿ ಆಹಾರ ಮತ್ತು ನೀರಿನ ಶುದ್ಧತೆ ಕುರಿತು ಹೆಚ್ಚಿನ ನಿಗಾ ವಹಿಸಬೇಕು. ಪರೀಕ್ಷಾ ಸಮಯವಾಗಿದ್ದು ವಿದ್ಯಾರ್ಥಿಗಳ ಓದಿಗೆ ಅನುಕೂಲವಾಗುವಂತೆ ಹಾಸ್ಟೆಲ್‌ಗಳಲ್ಲಿ ಪಾಠ ಪ್ರವಚನಗಳನ್ನು ನಿಗದಿತವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಎಸ್ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಕಳೆದ ಸಾಲಿನಲ್ಲಿ ಕಡಿಮೆ ಫಲಿತಾಂಶ ದಾಖಲಿಸಿರುವ ಶಾಲೆಗಳ ಬಗ್ಗೆ ಹೆಚ್ಚಿನ ನಿಗಾವಹಿಸುವಂತೆ ಸೂಚಿಸಿದರು.
20 ಗ್ರಾಪಂ ವ್ಯಾಪ್ತಿಯ 70 ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಿದ್ದರೂ ಮೋಟಾರ್ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ, ಈ ಕುರಿತು ತುರ್ತು ಗಮನ ಹರಸಿ ಕ್ರಮ ಕೈಗೊಳ್ಳುವಂತೆ ಜೆಜೆಎಂ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಲ್ಯಾಬ್ ನಿರ್ಮಿಸಿದ್ದರೂ ತಂತ್ರಜ್ಞರು ಇಲ್ಲದೆ ಅದರ ಉಪಯೋಗ ರೋಗಿಗಳಿಗೆ ದೊರೆಯುತ್ತಿಲ್ಲ. ಕಾಯಂ ತಂತ್ರಜ್ಞರ ನೇಮಕಕ್ಕೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದರು.
ತಾಪಂ ಇಒ ಶ್ರೀನಿವಾಸ್ ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.