ಚನ್ನರಾಯಪಟ್ಟಣದಲ್ಲಿನ ತಾಲ್ಲೂಕು ಕಛೇರಿಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಕುರಿತಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಸಭೆಯನ್ನುದ್ದೇಶಿ ಮಾತನಾಡಿದರು.
ಚನ್ನರಾಯಪಟ್ಟಣ: ಜೂ.27ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲು ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಜೂ.27ರಂದು ತಾಲೂಕು ಕಚೇರಿ ಆವರಣದಲ್ಲಿ ಈ ಬಾರಿ ಸರಳವಾಗಿ ಕೆಂಪೇಗೌಡರ ಜಯಂತಿಯ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೂರಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 10 ಜನರನ್ನು ಸನ್ಮಾನಿಸಲಾಗುವುದು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ಇಲಾಖೆಯ ಅಧಿಕಾರಿಗಳು ಕೆಂಪೇಗೌಡ ಜಯಂತಿ ಆಚರಣೆಯಲ್ಲಿ ಹಾಜರಿರಬೇಕು. ಎಲ್ಲರೂ ಒಟ್ಟಾಗಿ ಮಹನಿಯರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು.
ತಹಸೀಲ್ದಾರ್ ಜಿ.ಎಸ್.ಶಂಕರಪ್ಪ, ತಾಪಂ ಇಒ ಜಿ.ಆರ್. ಹರೀಶ್, ಪುರಸಭೆ ಮುಖ್ಯಾಧಿಕಾರಿ ಆರ್.ಯತೀಶ್‌ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಕೆಂಪೇಗೌಡ ವೇದಿಕೆ ಸ್ಥಾಪಕ ಅಧ್ಯಕ್ಷ ಆನಂದ್‌ಕಾಳೇನಹಳ್ಳಿ, ಒಕ್ಕಲಿಗರ ಸಂಘದ ಅಧ್ಯಕ್ಷ ಜಯಪಾಲ್, ಮಕ್ಕಳ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸಿ.ಎನ್.ಅಶೋಕ್, ಮನೋಹರ್, ಮಹದೇವ್ ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.