ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆ ಮತ್ತು ಕಾನೂನುಗಳ ಕುರಿತು ಬೃಹತ್ ಜಾಗೃತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಚ್.ಪಿ ಸಂದೇಶ್, ಡಾ.ಸಿ.ವಿ ಸ್ನೇಹಾ, ಕೆ.ಎಸ್. ಲತಾಕುಮಾರಿ ಇತರರಿದ್ದರು.
- ಪೋಕ್ಸೋ ಕಾಯ್ದೆಯ ಅರಿವು ಅಗತ್ಯ
- ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಸಲಹೆ
- ಬೃಹತ್ ಜಾಗೃತಿ ಕಾರ್ಯಕ್ರಮ
ಹಾಸನ: ಹರೆಯದ ವಯಸ್ಸಿನಲ್ಲಿ ಮಾಡುವ ತಪ್ಪಿಗಾಗಿ ಜೀವನದಾದ್ಯಂತ ಕಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಬಾಲ್ಯದಲ್ಲಿಯೇ ಪೋಕ್ಸೋ ಕಾಯ್ದೆ ಬಗ್ಗೆ ಎಲ್ಲರಲ್ಲೂ ಹೆಚ್ಚಿನ ಜಾಗೃತಿ ಅಗತ್ಯವಾಗಿದೆ ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಹೇಳಿದರು.
ಹಾಸನಾಂಬ ಕಲಾಕ್ಷೇತ್ರದಲ್ಲಿ ಇತ್ತೀಚೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಏರ್ಪಡಿಸಿದ್ದ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆ ಮತ್ತು ಕಾನೂನುಗಳ ಕುರಿತು ಬೃಹತ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪೋಕ್ಸೋ ಕಾಯ್ದೆ ಮಕ್ಕಳಿಗೆ ಪರಿಣಾಮಕಾರಿ ರಕ್ಷಕ, ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳನ್ನು ತಡೆಯುವುದು ಪ್ರತಿಯೊಬ್ಬರ ಕರ್ತವ್ಯ. ಈ ನಿಟ್ಟಿನಲ್ಲಿ ಕುಟುಂಬದ ಹಂತದಲ್ಲಿಯೇ ಮಕ್ಕಳಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯ, 18 ವರ್ಷದ ಒಳಗಿನ ಮಕ್ಕಳಲ್ಲಿ ಸರಿ-ತಪ್ಪುಗಳ ಬಗ್ಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಇರುವುದಿಲ್ಲ. ಆದ್ದರಿಂದ ಚಂಚಲತೆ ಬಿಟ್ಟಿರೆ ಭವಿಷ್ಯ ಉತ್ತಮವಾಗಲಿದೆ ಎಂದರು.
ಬೇರೆಯವರ ಮಕ್ಕಳನ್ನು ತಮ್ಮ ಮಕ್ಕಳಂತೆ ಭಾವಿಸಿದಾಗ ಅವರ ಮೇಲೆ ನಡೆಯುವ ದೌರ್ಜನ್ಯಗಳನ್ನು ಪಡೆಯಲು ಸಾಧ್ಯ. ಪೋಕ್ಸೋ ಅಪರಾಧ ಹಾಗೂ ಅದರ ಪರಿಣಾಮಗಳ ಬಗ್ಗೆ ಕುಟುಂಬ, ಶಾಲಾ ಹಂತದಲ್ಲಿ ಜಾಗೃತಿ ಮೂಡಿದಲ್ಲಿ ಮಕ್ಕಳ ರಕ್ಷಣೆ ಸಾಧ್ಯ, ಮಕ್ಕಳ ರಕ್ಷಣೆಗೆ ಜಾತಿಮ ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಸಲಹೆೆ ನೀಡಿದರು.
ದೇಶದ ಇತಿಹಾಸವನ್ನು ತಿಳಿದುಕೊಳ್ಳಲಿಲ್ಲವೆಂದರೆ ಸದೃಢ ನಾಗರಿಕ ಸಮಾಜ ಕಟ್ಟಲು ಸಾಧ್ಯವಾಗುವುದಿಲ್ಲ. ಸದೃಢ ನಾಗರಿಕ ಸಮಾಜವನ್ನು ಕಟ್ಟುವ ಜವಾಬ್ದಾರಿ ನಮ್ಮೆಲ್ಲರದಾಗಿದೆ. ಸ್ವಾಮಿ ವಿವೇಕಾನಂದರ ಪಂಚಮಂತ್ರಗಳಾದ ಶಿಸ್ತು, ಶ್ರಮ, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ಧೈರ್ಯ ಈ ಮಂತ್ರಗಳನ್ನು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಶಿಸ್ತು ಇಲ್ಲದ ಜೀವನ ಜೀವನವೇ ಅಲ್ಲ ಆತ್ಮವಿಶ್ವಾಸವನ್ನು ಹೆಜ್ಜೆಯನ್ನು ಇಟ್ಟಾಗ ಮಾತ್ರ ಯಶಸ್ಸು ಸಾಧಿಸಬಹುದು, ಶಿಸ್ತು, ಶ್ರಮ ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸ ವಿದ್ದರೆ ಏನಾದರೂ ಸಾಧನೆ ಮಾಡುತ್ತೇನೆ ಎಂಬ ಧೈರ್ಯ ಬರುತ್ತದೆ. ಶಿಕ್ಷಣದಿಂದ ಪ್ರೀತಿ, ತ್ಯಾಗ, ವಿನಯ, ಕರುಣೆ ಹಾಗೂ ಪ್ರಾಮಾಣಿಕತೆ ಬರುತ್ತದೆ. ಶಿಕ್ಷಣ ಎಂದರೆ ಪದವಿಯಲ್ಲ. ಪಡೆದುಕೊಂಡ ಜ್ಞಾನವನ್ನು ಸಮಾಜಕ್ಕೆ ಧಾರೆ ಎರೆದರೆ ಮಾತ್ರ ಜೀವನಕ್ಕೆ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ ಡಾ.ಸಿ.ವಿ ಸ್ನೇಹಾ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಹಿರಿಯ ಸಿವಿಲ್ ನ್ಯಾಯಾಧೀಶೆ ದಾಕ್ಷಾಯಿಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಧರಣಿ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲೀಪ್ ಇತರರಿದ್ದರು.
ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಾಗಿರುವ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣ ಗಮನಿಸಿದರೆ ಮಕ್ಕಳ ಸುರಕ್ಷತೆಗೆ ಪಾಲಕರು, ಶಿಕ್ಷಕರರು ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯ ಇದೆ. ಮಕ್ಕಳಿಗೆ ಯಾವುದೇ ಸಮಯ ಸಂದರ್ಭದಲ್ಲಿ ತಮ್ಮ ಸಮಸ್ಯೆಯಾದರೆ ಮಕ್ಕಳ ಸಹಾಯವಾಣಿ ಸಂಪರ್ಕಿಸಬಹುದು. ಮಕ್ಕಳ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ಪ್ರತಿ ಮಕ್ಕಳನ್ನು ನಮ್ಮ ಮಕ್ಕಳಂತೆ ಸಂರಕ್ಷಣೆ ಮಾಡಬೇಕು ಎಂದು ಹೇಳಿದರು.