ಪಟ್ಟಣ ಸಮೀಪದ ಬಿ.ಜಿ.ಎಸ್. ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಆವರಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಆದಿಚುಂಚನಗಿರಿ ಹಾಸನಕೊಡಗು ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಉದ್ಘಾಟಿಸಿದರು. ಎಂ.ಎ. ನಾಗರಾಜು, ಭಾಗ್ಯಮ್ಮ ಇತರರಿದ್ದರು.  
ಹಾಸನ

ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲಿ

ಪ್ರಮುಖ ಮುಖ್ಯಾಂಶಗಳು

  • ಶ್ರೀ ಶಂಭುನಾಥ ಸ್ವಾಮೀಜಿ ಸಲಹೆ
ಬೇಲೂರು: ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಗೆದ್ದಾಗ ಹಿಗ್ಗದೆ ಸೋತಾಗ ಕುಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಹಾಸನ-ಕೊಡಗು ಶಾಖಾ ಮಠದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು.
ಪಟ್ಟಣ ಸಮೀಪದ ಬಿ.ಜಿ.ಎಸ್. ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಆವರಣ ಕಾಲೇಜು ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಿ.ಜಿ.ಎಸ್. ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ 2026 27ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಮಾತನಾಡಿದರು.
ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಸ್ಥಿರತೆಗೂ ಕ್ರೀಡೆ ಅತ್ಯಂತ ಮುಖ್ಯವಾಗಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಶ್ರಮಪಟ್ಟು ಸಾಧನೆ ಮಾಡಬೇಕು. ತಾಲೂಕು ಮಟ್ಟದಿಂದ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದವರೆಗೆ ಆಯ್ಕೆಯಾಗುವ ಗುರಿ ಹೊಂದಬೇಕು. ಕ್ರೀಡಾ ಕ್ಷೇತ್ರದಲ್ಲಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಂದೆ-ತಾಯಿಗೆ, ಶಿಕ್ಷಣ ಸಂಸ್ಥೆಗೆ ಹಾಗೂ ತಾಲೂಕಿಗೆ ಕೀರ್ತಿ ತರಬೇಕು. ಅಲ್ಲದೆ ಗೆದ್ದಾಗ ಗೆಲುವನ್ನು ತಲೆಗೆ ಏರಿಸಿ ಕೊಳ್ಳಬಾರದು, ಸೋತಾಗ ಆ ಸೋಲನ್ನು ಹೃದಯಕ್ಕಿಳಿಸಿಕೊಳ್ಳ ಬಾರದು ಎಂಬ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಸಂದೇಶವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಕ್ಷೇತ್ರವಾಗಿದೆ. ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಪ್ರತಿಯೊಬ್ಬ ಕ್ರೀಡಾಪಟುವೂ ಗೆಲುವಿನ ಗುರಿಯತ್ತ ಸಾಗಬೇಕು. ಸೋಲು ಎದುರಾದರೂ ಧೈರ್ಯ ಗೆಡದೆ ಮುಂದಿನ ಅವಕಾಶಕ್ಕಾಗಿ ಮತ್ತಷ್ಟು ಶ್ರಮಿಸಬೇಕು. ವಿದ್ಯಾರ್ಥಿಗಳು ತಾಲೂಕು ಸಾಧನೆಯೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ರಾಷ್ಟ್ರ ಮಟ್ಟದಲ್ಲಿ ಕೀರ್ತಿ ತರುವಂತಹ ಸಾಧನೆ ಮಾಡಬೇಕು. ಕ್ರೀಡೆಯಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ. ಆದ್ದರಿಂದ ಪೋಷಕರು, ಶಿಕ್ಷಕರು ಮಕ್ಕಳ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.
ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಮಾತನಾಡಿ, ಕ್ರೀಡೆ ಕೇವಲ ಗೆಲುವು ಸೋಲಿನ ಸ್ಪರ್ಧೆಯಲ್ಲ. ಅದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಧೈರ್ಯ, ಶಿಸ್ತು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉತ್ತಮ ವೇದಿಕೆಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮಲ್ಲಿರುವ ಪ್ರತಿಭೆಯನ್ನು ಯಾವುದೇ ಭಯವಿಲ್ಲದೆ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದರು.
ಎಚ್.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಂ.ಎ. ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ರೋಟರಿ ಕ್ಲಬ್ ಅಧ್ಯಕ್ಷ ಬಿ.ಬಿ.ಶಿವರಾಜು, ಉಪನ್ಯಾಸಕರ ಸಂಘದ ಅಧ್ಯಕ್ಷ ಪ್ರಕಾಶ್, ಜಿ.ಪಂ.ಮಾಜಿ ಸದಸ್ಯ ಸಿ.ಎಸ್.ಪ್ರಕಾಶ್ ಸೇರಿದಂತೆ ಇತರರಿದ್ದರು.