ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಾಸನ ನಗರದ ಮಹಾರಾಜ ಪಾರ್ಕ್‌ನಲ್ಲಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿ.ಕೆ.ದಾಕ್ಷಾಯಿಣಿ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಪರಿಸರ ಅಧಿಕಾರಿ ಭಾಸ್ಕರ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಬಿ.ಟಿ ಮಾನವ ಇತರರಿದ್ದರು.
- ಪ್ಲಾಸ್ಟಿಕ್ ಬಳಕೆಗೆ ಬೀಳಲಿ ಕಡಿವಾಣ
- ಹಿರಿಯ ಸಿವಿಲ್ ನ್ಯಾಯಾಧೀಶೆ ಜಿ.ಕೆ.ದಾಕ್ಷಾಯಿಣಿ ಸಲಹೆ
- ಚಿತ್ರಕಲಾ ಸ್ಪರ್ಧೆಗೆ ಚಾಲನೆ
ಹಾಸನ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಜಿ.ಕೆ.ದಾಕ್ಷಾಯಿಣಿ ಹೇಳಿದರು.
ಜಿಲ್ಲಾಡಳಿತ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಮತ್ತಿತರ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ-2026ರ ಅಂಗವಾಗಿ ನಗರದ ಮಹಾರಾಜ ಪಾರ್ಕ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಕೈಗಾರಿಕೆ, ನಗರಗಳ ಅಭಿವೃದ್ಧಿ ಹಾಗೂ ಕಾಡುಗಳನ್ನು ನಾಶ ಮಾಡುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ನಮ್ಮ ಸುತ್ತಮುತ್ತಲಿನ ಪರಿಸರವು ಮಾಲಿನ್ಯದಿಂದ ಕೂಡಿದೆ. ಆದ್ದರಿಂದ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾತನಾಡಿ, ಪರಿಸರ ಸಂರಕ್ಷಣೆ ಮನೆಯಿಂದಲೇ ಪ್ರಾರಂಭವಾಗಬೇಕು ಈ ನಿಟ್ಟಿನಲ್ಲಿ ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹಸಿ ಕಸ ಹಾಗೂ ಒಣ ಕಸವನ್ನು ವಿಂಗಡಿಸಿ ನೀಡಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ನಿಲ್ಲಿಸಿ ಸುಂದರ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಸಲಹೆ ನೀಡಿದರು. ಪರಿಸರ ಅಧಿಕಾರಿ ಭಾಸ್ಕರ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಬಿ.ಟಿ ಮಾನವ ಇತರರು ಇದ್ದರು.