ಸಕಲೇಶಪುರ ಪಟ್ಟಣದ ತೇಜಸ್ವಿ ವೃತ್ತ ವಿಸ್ತರಣೆ ಹಿನ್ನೆಲೆಯಲ್ಲಿ ಅಳತೆ ಕಾರ್ಯ ಆರಂಭಿಸಿರುವುದು.
ಪಟ್ಟಣದ ತೇಜಸ್ವಿ ವೃತ್ತದಲ್ಲಿ ಹೆಚ್ಚುತ್ತಿರುವ ಅಪಘಾತ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ವೃತ್ತದ ವಿಸ್ತರಣೆಗೆ ಅಳತೆ ಕಾರ್ಯ ಆರಂಭಿಸಲಾಗಿದೆ ಎಂದು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಮುಫೀಜ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೇಜಸ್ವಿ ವೃತ್ತದ ಬಳಿ ಪದೇಪದೆ ಅಪಘಾತಗಳು ಸಂಭವಿಸುತ್ತಿದ್ದು, ಸಂಚಾರ ಸಮಸ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ವೃತ್ತ ವಿಸ್ತರಣೆ ಮಾಡುವುದರ ಜತೆಗೆ ವೃತ್ತದಿಂದ 200 ಮೀಟರ್ ವ್ಯಾಪ್ತಿಯಲ್ಲಿ ಹಾಗೂ ಅರೇಹಳ್ಳಿ ರಸ್ತೆ ಭಾಗದಲ್ಲಿಯೂ ಅಗತ್ಯವಿರುವಷ್ಟು ರಸ್ತೆ ವಿಸ್ತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯಂತೆ ಗುರುವಾರ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಳತೆ ಕಾರ್ಯ ಕೈಗೊಂಡಿದ್ದಾರೆ ಎಂದು ತಿಳಿಸಿದರು.
ವೃತ್ತದ ವಿಸ್ತರಣೆ ಹಾಗೂ ತೆರವು ಕಾರ್ಯಕ್ಕೆ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು. ಈ ಕುರಿತು ಜಿಲ್ಲಾಧಿಕಾರಿಗಳನ್ನೂ ಸ್ಥಳಕ್ಕೆ ಕರೆಸಿ, ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಪುರಸಭೆ ಮುಖ್ಯಾಧಿಕಾರಿ ಮಹೇಶ್ವರಪ್ಪ ಮಾತನಾಡಿ, ಜಿಲ್ಲಾಧಿಕಾರಿ ಇತ್ತೀಚೆಗೆ ಸಕಲೇಶಪುರ ಪಟ್ಟಣಕ್ಕೆ ಭೇಟಿ ನೀಡಿ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದ್ದರು. ಈ ವೇಳೆ ತೇಜಸ್ವಿ ವೃತ್ತ ಕಿರಿದಾಗಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿರುವುದನ್ನು ಗಮನಿಸಿ, ವೃತ್ತವನ್ನು ತುರ್ತಾಗಿ ವಿಸ್ತರಣೆ ಮಾಡುವಂತೆ ಸೂಚಿಸಿದ್ದರು ಎಂದರು.
ಯೋಜನಾ ಪ್ರಾಧಿಕಾರದ ಸದಸ್ಯರಾದ ಚರಣ್, ಬೈಕೆರೆ ದೇವರಾಜ್, ಸಹಾಯಕ ನಿರ್ದೇಶಕ ರಮೇಶ್, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ರಜಾಕ್ ಉಪಸ್ಥಿತರಿದ್ದರು.