ಬೇಲೂರು ಪಟ್ಟಣದ 22ನೇ ವಾರ್ಡ್‌ನಲ್ಲಿ ರಸ್ತೆ ಕಾಮಗಾರಿ ನಿಲ್ಲಿಸಿರುವ ಸ್ಥಳಕ್ಕೆ ಪುರಸಭೆ ಅಧ್ಯಕ್ಷ ಅಕ್ರಂ ಷರೀಫ್ ಮತ್ತು ಸಿಬ್ಬಂದಿ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಬಸವರಾಜ ಸಿಗ್ಗಾವಿ, ಜಗದೀಶ್, ಪ್ರಭಾಕರ್, ಮೋಹನ್ ಇದ್ದರು. 
ಹಾಸನ

ಕಾಮಗಾರಿ ಸ್ಥಗಿತಗೊಂಡಿದ್ದ ಸ್ಥಳಕ್ಕೆ ಪುರಸಭೆ ಅಧ್ಯಕ್ಷ ಭೇಟಿ

ಬೇಲೂರು: ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ರಸ್ತೆ ಕಾಮಗಾರಿ ಪ್ರಾರಂಭವಾಗಿ ಅರ್ಧಂಬರ್ಧ ಕೆಲಸವಾಗಿದ್ದು, ಸಾರ್ವಜನಿಕರು ಓಡಾಡಲು ಸಮಸ್ಯೆಯಾಗಿದೆ ಎಂದು ತಿಳಿಸಿದ್ದರಿಂದ ಪುರಸಭೆ ಅಧ್ಯಕ್ಷ ಅಕ್ರಂ ಷರೀಫ್ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ನಿಂರಂತರವಾಗಿ ಬರುತ್ತಿರುವ ಮಳೆಯಿಂದ ರಸ್ತೆ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಮಳೆ ಕಡಿಮೆಯಾದ ಕೂಡಲೇ 22ನೇ ವಾರ್ಡ್ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ ನಿಂತಿರುವ ಕೆಲಸ ಮಾಡಿಸಲಾಗುವುದು. ಈಗ ತಾತ್ಕಾಲಿಕವಾಗಿ ಜನರು ಓಡಾಡಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದೇ ಸಂದರ್ಭ ಸ್ಥಳೀಯ ನಿವಾಸಿಗಳು ರಸ್ತೆ ದುಸ್ಥಿತಿಯಿಂದ ಶಾಲಾ ಮಕ್ಕಳು, ವೃದ್ಧರು, ದ್ವಿಚಕ್ರ ವಾಹನ ಸವಾರರ ಪ್ರತಿದಿನದ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಮಳೆಗಾಲದಲ್ಲಿ ರಸ್ತೆ ಕೆಸರುಮಯವಾಗಿ ಅಪಘಾತದ ಭೀತಿ ಹೆಚ್ಚಾಗಿದೆ ಎಂದು ಪುರಸಭೆ ಅಧ್ಯಕ್ಷ ಅಕ್ರಂ ಷರೀಫ್ ಹಾಗೂ ಮುಖ್ಯಾಧಿಕಾರಿ ಗಮನಕ್ಕೆ ತಂದು, ಆದಷ್ಟು ಬೇಗ ಕೆಲಸ ಮುಗಿಸುವಂತೆ ಒತ್ತಾಯಿಸಿದರು.
ಪುರಸಭೆ ಮುಖ್ಯಾಧಿಕಾರಿ ಬಸವರಾಜ ಸಿಗ್ಗಾವಿ, ಸದಸ್ಯರಾದ ಜಗದೀಶ್, ಪ್ರಭಾಕರ್, ಇಂಜಿನಿಯರ್ ಮೋಹನ್, ಆರೋಗ್ಯಾಧಿಕಾರಿ ಲೋಹಿತ್ ಸೇರಿದಂತೆ ಇತರರಿದ್ದರು.