ಅರಕಲಗೂಡಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು. ಜಿ.ಎನ್.ಅನಸೂಯಾ, ವಿಠಲ್ ಸಾಲಿಯಾನ್, ಕೆ.ಸಿ.ಸೌಮ್ಯಾ, ಸತೀಶ್ ಇತರರಿದ್ದರು. 
ಹಾಸನ

ಮಕ್ಕಳ ಆನ್‌ಲೈನ್ ಚಟುವಟಿಕೆ ಮೇಲೆ ಪಾಲಕರು ನಿಗಾ ವಹಿಸಲಿ

ಅರಕಲಗೂಡು: ಸಾಮಾಜಿಕ ಜಾಲತಾಣಗಳನ್ನು ಉಪಯುಕ್ತ ವಿಚಾರಗಳಿಗೆ ಮಾತ್ರ ಸದ್ಬಳಕೆ ಮಾಡಿಕೊಳ್ಳುವುದು ಅತ್ಯವಶ್ಯಕ ಎಂದು ಗೊರೂರು ಯೋಗಾ ನರಸಿಂಹ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಜಿ.ಎನ್.ಅನಸೂಯಾ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ಸಹಯೋಗದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಂಗವಾಗಿ ಇತ್ತೀಚೆಗೆ ಸಂಸ್ಥೆಯ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಸಾಮಾಜಿಕ ಜಾಲತಾಣಗಳಿಂದ ಮಕ್ಕಳ ರಕ್ಷಣೆಯಲ್ಲಿ ಪಾಲಕರ ಪಾತ್ರ ಕುರಿತು ಉಪನ್ಯಾಸ ನೀಡಿದ ಅವರು, ಇಂದಿನ ದಿನಗಳಲ್ಲಿ ಬಹುತೇಕ ಮನೆಗಳ ಮಕ್ಕಳು ಡಿಜಿಟಲ್ ಸಾಧನಗಳು ಹಾಗೂ ಸಾಮಾಜಿಕ ಜಾಲತಾಣಗಳಿಗೆ ಅತಿಯಾಗಿ ಆಕರ್ಷಿತರಾಗುತ್ತಿದ್ದಾರೆ. ಮಕ್ಕಳ ಆನ್‌ಲೈನ್ ಚಟುವಟಿಕೆ ಮೇಲೆ ಪಾಲಕರು ನಿಗಾ ವಹಿಸಿ, ಸೂಕ್ತ ಮಾರ್ಗದರ್ಶನ ನೀಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ವಿಠಲ್ ಸಾಲಿಯಾನ್ ಮಾತನಾಡಿ, ಜ್ಞಾನ ವಿಕಾಸ ಕಾರ್ಯಕ್ರಮವು ಕಳೆದ 12 ವರ್ಷಗಳಿಂದ ಲಕ್ಷಾಂತರ ಮಹಿಳೆಯರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ನೈರ್ಮಲ್ಯ, ಪೌಷ್ಟಿಕ ಆಹಾರ, ಸ್ವಚ್ಛತೆ ಹಾಗೂ ಸಾಕ್ಷರತೆ ಕುರಿತು ಅರಿವು ಮೂಡಿಸುವ ಮೂಲಕ ಮಹಿಳೆಯರನ್ನು ಸ್ವಾವಲಂಬಿ ಜೀವನದತ್ತ ಕೊಂಡೊಯ್ಯಲಾಗುತ್ತಿದೆ. ಮದ್ಯವರ್ಜನ ಹಾಗೂ ಮಧ್ಯನಿಷೇಧ ಚಳವಳಿಗಳ ಮೂಲಕ ಸಾವಿರಾರು ಕುಟುಂಬಗಳಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದರು.
ತಹಸೀಲ್ದಾರ್ ಕೆ.ಸಿ.ಸೌಮ್ಯಾ ಕಾರ್ಯಕ್ರಮ ಉದ್ಘಾಟಿಸಿದರು. ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಕೆ.ಸತೀಶ್ ಹಾಗೂ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಶಿವಕುಮಾರ್ ಮಾತನಾಡಿದರು.
ಸಮಾಜ ಸೇವಕಿ ಸಂಧ್ಯಾ ಶಶಿಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ರಂಗೋಲಿ ಸ್ಪರ್ಧೆ, ಹೂಗುಚ್ಛ ತಯಾರಿಕೆ ಸ್ಪರ್ಧೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬಾಬು, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಎ. ನಂಜುಂಡಸ್ವಾಮಿ, ಶಾಂತಮಲ್ಲಪ್ಪ, ಶಶಿಕುಮಾರ್ ಸೇರಿದಂತೆ ಅನೇಕ ಗಣ್ಯರು ಹಾಗೂ ಮಹಿಳೆಯರು ಇದ್ದರು.