ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೆರೆ ಕೋಡಿಯಮ್ಮ ದೇವಸ್ಥಾನದ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಶ್ರೀ ಸಿದ್ದೇಶ್ವರ ಸ್ವಾಮೀಜಿ, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಸದಾಶಿವ ಸ್ವಾಮೀಜಿ, ಶ್ರೀ ವಿಜಯಕುಮಾರ ಸ್ವಾಮೀಜಿ, ಎಚ್.ಕೆ. ಕುಮಾರಸ್ವಾಮಿ ಇತರರಿದ್ದರು.
- ಧಾರ್ಮಿಕ ಚಿಂತನೆಗಳಿಂದ ಮನಸ್ಸಿಗೆ ನೆಮ್ಮದಿ
- ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಭಿಮತ
- ಕೆರೆ ಕೋಡಿಯಮ್ಮ ದೇವಸ್ಥಾನ ಪ್ರಾರಂಭೋತ್ಸವ
ಹಾಸನ: ದೇಶದ ಸನಾತನ ಸಂಸ್ಕೃತಿ, ಪರಂಪರೆ ಮತ್ತು ಧಾರ್ಮಿಕ ಮೌಲ್ಯಗಳು ಇಂದಿಗೂ ಗ್ರಾಮೀಣ ಪ್ರದೇಶಗಳ ದೇವಾಲಯಗಳ ಮೂಲಕ ಜೀವಂತವಾಗಿದ್ದು, ಇಂತಹ ಧಾರ್ಮಿಕ ಚಿಂತನೆಗಳು ಸಮಾಜದಲ್ಲಿ ಶಾಂತಿ ಹಾಗೂ ವ್ಯಕ್ತಿಯ ಮನಸ್ಸಿಗೆ ನೆಮ್ಮದಿ ನೀಡುತ್ತವೆ ಎಂದು ಸಿದ್ಧಗಂಗಾ ಮಠದ ಕಿರಿಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ತಾಲೂಕಿನ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೆರೆ ಕೋಡಿಯಮ್ಮ ದೇವಸ್ಥಾನದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಧರ್ಮ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ಉಳಿವು ಮತ್ತು ಬೆಳವಣಿಗೆಗೆ ಸಮಾಜ ಸದಾ ಬದ್ಧವಾಗಿರಬೇಕು. ಮಠ-ಮಂದಿರಗಳು ಕೇವಲ ಪೂಜಾ ಸ್ಥಳಗಳಲ್ಲ. ಅವು ಸಮಾಜದಲ್ಲಿ ಶಾಂತಿ, ಸೌಹಾರ್ದ, ನೈತಿಕ ಮೌಲ್ಯಗಳು ಹಾಗೂ ಮಾನವೀಯತೆಯನ್ನು ಬಲಪಡಿಸುವ ಕೇಂದ್ರಗಳಾಗಿವೆ. ಇಂತಹ ಆಧ್ಯಾತ್ಮಿಕ ಕಾರ್ಯಕ್ರಮಗಳು ಸಮಾಜವನ್ನು ಒಗ್ಗೂಡಿಸುವ ಶಕ್ತಿ ಹೊಂದಿವೆ ಎಂದರು.
ಭಗವಂತನು ಪ್ರಾಣಿ-ಪಕ್ಷಿಗಳಿಗೆ ಸಾಮಾನ್ಯ ಜ್ಞಾನವನ್ನು ನೀಡಿದ್ದರೆ, ಮನುಷ್ಯನಿಗೆ ಮಾತ್ರ ವಿಶಿಷ್ಟವಾದ ಬುದ್ಧಿಶಕ್ತಿ ಮತ್ತು ಉನ್ನತ ಜ್ಞಾನಾರ್ಜನೆ ಮಾಡುವ ಸಾಮರ್ಥ್ಯವನ್ನು ಕರುಣಿಸಿದ್ದಾನೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಬುದ್ಧಿಶಕ್ತಿಯನ್ನು ಸತ್ಕಾರ್ಯಗಳಿಗೆ ಬಳಸಿಕೊಳ್ಳಬೇಕು. ಉನ್ನತ ಚಿಂತನೆಗಳನ್ನು ಬೆಳೆಸಿಕೊಂಡು ಸಮಾಜಮುಖಿ ಜೀವನ ನಡೆಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.
ಗ್ರಾಮೀಣ ಭಾಗಗಳಲ್ಲಿ ದೇವಾಲಯಗಳು ಧಾರ್ಮಿಕ ಕೇಂದ್ರಗಳಾಗಿರುವ ಜತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತಿವೆ. ಇಂತಹ ದೇವಾಲಯಗಳ ಅಭಿವೃದ್ಧಿಗೆ ಸಾರ್ವಜನಿಕರು ಸಹಕಾರ ನೀಡುವುದು ಸಮಾಜದ ಏಳಿಗೆಗೆ ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ, ಎಚ್.ಕೆ. ಕುಮಾರಸ್ವಾಮಿ, ಕಟ್ಟಾಯ ಶಿವಕುಮಾರ್, ಎಂ.ಎನ್. ಕುಮಾರಸ್ವಾಮಿ, ಶೋಭಾ ಮಂಜುನಾಥ್, ಉಪಾಧ್ಯಕ್ಷ ಮಧುಸೂದನ್, ಸದಸ್ಯ ಕಿರಣ್ ಕುಮಾರ್ ಇತರರಿದ್ದರು.