ಜಿಲ್ಲಾಧಿಕಾರಿ ಲತಾಕುಮಾರಿ  
ಹಾಸನ

ಸಂಭವನೀಯ ಪ್ರಕೃತಿ ವಿಕೋಪ ಎದುರಿಸಲು ಸಿದ್ಧತೆ

ಅಭಿನಯ್ ಎಚ್.ಎಂ
ಸಕಲೇಶಪುರ : ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಭೂಕುಸಿತ ಉಂಟಾಗುವುದು ಮತ್ತು ರಸ್ತೆ ಹಾನಿ ಸಮಸ್ಯೆಗಳನ್ನು ತಡೆಗಟ್ಟಲು ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಜಿಲ್ಲಾಡಳಿತ ನಿರಂತರವಾಗಿ ಪರಿಶೀಲಿಸುತ್ತಿದ್ದು, ಸಂಭವನೀಯ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಹೇಳಿದರು.
ರಾಷ್ಟ್ರೀಯ ಹೆದ್ದಾರಿ-75ರ ವಿವಿಧ ಭಾಗಗಳಲ್ಲಿ ಭೂಕುಸಿತ ತಡೆಗೆ ಸುಮಾರು 64 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ವರ್ಷಕ್ಕೆ ಹೋಲಿಸಿದರೆ ಮಂಜರಾಬಾದ್ ಕೋಟೆ ಸಮೀಪದ ರಸ್ತೆ ಕಾಮಗಾರಿ ಉತ್ತಮವಾಗಿ ಪೂರ್ಣಗೊಂಡಿದ್ದು, ಈ ಭಾಗದಲ್ಲಿ ರಸ್ತೆ ಸಂಚಾರ ವ್ಯವಸ್ಥೆ ಸುಧಾರಿಸಿದೆ. ತಡೆಗೋಡೆಗಳು ಹಾಗೂ ಗ್ಯಾಬಿಯನ್ ವಾಲ್ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿದ್ದು, ಮಳೆಗಾಲದಲ್ಲಿ ಅಪಾಯ ಸಂಭವಿಸುವ ಪ್ರದೇಶಗಳಲ್ಲಿ ವಿಶೇಷ ಗಮನ ಹರಿಸಲಾಗಿದೆ ಎಂದು ಹೇಳಿದರು.
ಆನೆಮಹಲ್ ಪ್ರದೇಶದಲ್ಲಿ ಕಳೆದ ವರ್ಷ ಭೂಕುಸಿತದಿಂದ ಹೆಚ್ಚಿನ ಸಮಸ್ಯೆಗಳು ಎದುರಾಗಿದ್ದವು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅಗತ್ಯ ಕಾಮಗಾರಿಗಳನ್ನು ಈಗಾಗಲೇ ಕೈಗೆತ್ತಿಕೊಂಡಿದ್ದು, ಮಳೆಗಾಲ ಆರಂಭವಾಗಿರುವುದರಿಂದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಆನೆಮಹಲ್ನಿಂದ ಮಾರನಹಳ್ಳಿವರೆಗಿನ ವಿವಿಧ ತಡೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮಳೆಗಾಲದಲ್ಲಿ ವಾಹನ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಎತ್ತಿನಹೊಳೆ ಯೋಜನೆ ವ್ಯಾಪ್ತಿಯ ವಿವಿಧ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಜೂ.15ರಿಂದ ಅ.30ರವರೆಗೆ ನೀರು ಎತ್ತುವ ಕಾರ್ಯ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೋಟಾರ್‌ಗಳು ಹಾಗೂ ಪಂಪ್‌ಗಳ ಕಾರ್ಯಾರಂಭಕ್ಕೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಯೋಜನೆಯ ವಿವಿಧ ಘಟಕಗಳ ಕಾರ್ಯಕ್ಷಮತೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ನೀರು ಎತ್ತುವ ಪ್ರಕ್ರಿಯೆ ಸುಗಮವಾಗಿ ನಡೆಯಲು ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.
ಉಪ ವಿಭಾಗಾಧಿಕಾರಿ ಹುಲಿಮನೆ ತಿಮ್ಮಣ್ಣ, ತಹಸೀಲ್ದಾರ್ ಸುಪ್ರೀತಾ, ಎತ್ತಿನಹೊಳೆ ಯೋಜನೆಯ ಕಾರ್ಯಪಾಲಕ ಇಂಜಿನಿಯರ್ ವೆಂಕಟೇಶ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮೊಹಮ್ಮದ್ ಇಕ್ಬಾಲ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಮೋದ್, ರಾಷ್ಟ್ರೀಯ ಹೆದ್ದಾರಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಲ್ಮಾ, ಪಿಡಬ್ಲೂೃಡಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಸನ್ನ ಇತರರಿದ್ದರು.