ನಗರದ ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲಾಧಿಕಾರಿ ಲತಾ ಕುಮಾರಿ, ಸಿಇಒ ಶುಭಂ ಶುಕ್ಲ, ಎಎಸ್ಪಿ ಶ್ರಿನಿಧಿ, ರಘು ಇತರರಿದ್ದರು. 
ಹಾಸನ

ಪೌರಕಾರ್ಮಿಕರಿಗೆ ನಿವೇಶನ ಒದಗಿಸಿರಿ

ಪ್ರಮುಖ ಮುಖ್ಯಾಂಶಗಳು

  • ಪೌರಕಾರ್ಮಿಕರಿಗೆ ನಿವೇಶನ ಒದಗಿಸಿರಿ
  • ಅಧಿಕಾರಿಗಳಿಗೆ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಸೂಚನೆ

ಹಾಸನ:

ಪೌರಕಾರ್ಮಿಕರಿಗೆ ಆದ್ಯತೆ ಮೇರೆಗೆ ನಿವೇಶನ ಒದಗಿಸುವುದರ ಜತೆಗೆ ಮೂಲ ಸೌಕರ್ಯ ಕಲ್ಪಸುವ ಮೂಲಕ ಅವರ ಸಮಸ್ಯೆಗಳನ್ನು ಪರಿಹರಿಸಲು ಮುತುವರ್ಜಿ ವಹಿಸಿ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಅಧಿಕಾರಿಗಳಿಗೆ ಸೂಚಿಸಿದರು.

ಹಾಸನ ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳು ಮತ್ತು ಇತರ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು, ಪೌರಕಾರ್ಮಿಕರಿಗಾಗಿ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಪೌರ ಕಾರ್ಮಿಕರಿಗೆ ಸಮವಸ್ತ್ರ, ಸುರಕ್ಷತಾ ಪರಿಕರ, ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸುವುದು, ಇ.ಎಸ್.ಐ, ಪಿ.ಎಫ್ ಪಾವತಿ ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡುವುದರ ಜತೆಗೆ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಅಗತ್ಯವಿರುವಷ್ಟು ಸಿಬ್ಬಂದಿ ನೇಮಕವಾಗಿಲ್ಲ. ಕಾರ್ಮಿಕರಿಗೆ ಇಎಸ್‌ಐ, ಪಿಎಫ್ ಪಾವತಿ ಮಾಡುತ್ತಿಲ್ಲದಿರುವುದು ಕಂಡುಬಂದಿದೆ. ಅಲ್ಲದೆ ಕೇವಲ 6 ಸಾವಿರ ರೂ.ಗಳನ್ನು ನಗದು ರೂಪದಲ್ಲಿ ನೀಡಲಾಗುತ್ತಿದೆ. ಏಜೆನ್ಸಿಯೊಂದಿಗೆ ಶಾಮೀಲಾಗದೆ ಈ ಬಗ್ಗೆ ಅಧಿಕಾರಿಗಳು ಗಮನಹರಿಸಿ, ಅಂತಹ ಏಜೆನ್ಸಿಯನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದರು.
ನೇರ ಪಾವತಿಯಡಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಮರಣ ಹೊಂದಿದರೆ ಅವರ ಅವಲಂಬಿತರಿಗೆ ಉದ್ಯೋಗ ಕಲ್ಪಸಬೇಕು. ಹಾಸನ ಜಿಲ್ಲೆಯಲ್ಲಿ 39 ಜನರಿದ್ದು, ಇದರ ಬಗ್ಗೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಚ್ಚತಾ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸಲು ಅವಕಾಶವಿದ್ದು, ಇದರ ಬಗ್ಗೆ ಮಾಹಿತಿ ನೀಡುವುದರ ಜತೆಗೆ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡುವತ್ತ ಹೆಚ್ಚಿನ ಗಮನಹರಿಸಬೇಕು. ಇದರೊಂದಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಲು ಜಿಲ್ಲಾ ಸಮಿತಿಯಿಂದ ಕಾರ್ಪೊರೇಷನ್‌ಗೆ ಪ್ರಸ್ತಾವನೆ ಸಲ್ಲಿಸಿ ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಲತಾ ಕುಮಾರಿ ಮಾತನಾಡಿ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವವರಿಗೆ ಕೇವಲ 6 ಸಾವಿರ ರೂ.ಗಳನ್ನು ನಗದು ರೂಪದಲ್ಲಿ ಹಣ ಪಾವತಿ ಮಾಡಲಾಗುತ್ತಿದೆ ಎಂದು ಮಾಹಿತಿ ಬಂದಿದೆ. ಹೀಗಾಗಿ ಕಾರ್ಮಿಕ ಇಲಾಖೆ ಹಾಗೂ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಬ್ಯಾಂಕ್ ಖಾತೆ ಪರಿಶೀಲನೆ ನಡೆಸಿ ಇ.ಎಸ್.ಐ.ಮತ್ತು ಪಿ.ಎಫ್ ಪಾವತಿಯಾಗಿದೆಯಾ ಎಂಬುದರ ಕುರಿತು ಪರಿಶೀಲನೆ ಮಾಡಿ ಐದು ದಿನದೊಳಗೆ ವರದಿ ನೀಡಬೇಕು. ಅಲ್ಲದೆ ಏಜೆನ್ಸಿ ವಿರುದ್ಧ ಪ್ರಕರಣ ದಾಖಲು ಮಾಡುವುದರ ಜತೆಗೆ ಸದರಿ ಏಜೆನ್ಸಿಯನ್ನು ಕಪ್ಪು ಪಟ್ಟಿಗೆ ಸೇರಿಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸ್ವಚ್ಚತಾ ಕಾರ್ಮಿಕರ ಬ್ಯಾಂಕ್ ಖಾತೆಗೆ ವೇತನ ಜಮಾ ಆಗುತ್ತಿದೆಯೇ ಎಂದು ಪರಿಶೀಲಿಸಿ ವರದಿ ನೀಡಬೇಕೆಂದು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಕಾರ್ಮಿಕರ ಆರೋಗ್ಯ ತಪಾಸಣೆ ಕಾಲಕಾಲಕ್ಕೆ ಆಗುತ್ತಿದೆಯೇ ಎಂಬುದರ ಕುರಿತು ಪರಿಶೀಲನೆ ಮಾಡುವಂತೆ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.
ಕೊಣನೂರಿನಲ್ಲಿ ಸರ್ವೇ ನಂಬರ್ 163 ರಲ್ಲಿ ಮನೆ ಕಟ್ಟಿಕೊಂಡು 60 ವರ್ಷದಿಂದ ವಾಸ ಮಾಡುತ್ತಿರುವ 131 ಕುಟುಂಬಗಳು ಅಕ್ರಮ ಸಕ್ರಮದಡಿ 94 ಸಿ,94 ಸಿಸಿ ಯಲ್ಲಿ ಅರ್ಜಿ ಸಲ್ಲಿಸಿದ್ದಾರೆಯೇ ಎಂಬುದರ ಕುರಿತು ಪರಿಶೀಲಿಸಿ ಎಂದು ಉಪ ವಿಭಾಗಾಧಿಕಾರಿಗೆ ನಿರ್ದೇಶನ ನೀಡಿದರು.
ಆಸ್ಪತ್ರೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ಅವರಿಗೆ ಈ ಬಗ್ಗೆ ಮಾಹಿತಿ ನೀಡಿಲ್ಲ. ಹೀಗಾಗಿ ಏಜೆನ್ಸಿ ಅವರಿಗೆ ಶೋಕಾಸ್ ನೋಟಿಸ್ ನೀಡುವಂತೆ ಸೂಚಿಸಿದರಲ್ಲದೆ, ಕೌಶಲಾಭಿವೃದ್ಧಿ ತರಬೇತಿ ನೀಡುವ ಮೂಲಕ ಸಬಲರಾಗುವಂತೆ ಮಾಡಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು
ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಸುನಾಯ ಮಾತನಾಡಿ ಹಾಸನ, ಸಕಲೇಶಪುರ, ಚನ್ನರಾಯಪಟ್ಟಣ ಪೌರಕಾರ್ಮಿಕರ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ದೂರುಗಳು ಬಂದಿವೆ. ಆಯೋಗದಿಂದ ಈಗಾಗಲೇ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಲು ಸಂಬಂಧಿಸಿದವರಿಗೆ ಪತ್ರದ ಮೂಲಕ ತಿಳಿಸಲಾಗಿದೆ ಎಂದರು.
ಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಬೇಕು. ವರ್ಷಕ್ಕೊಮ್ಮೆ ಮಾಸ್ಟರ್ ಚೆಕ್ ಅಪ್ ಮಾಡಿಸಬೇಕು. ಇಎಸ್‌ಐ, ಪಿಎಫ್ ಪಾವತಿ, ಸಂಕಷ್ಟ ಭತ್ಯೆ, ಸರ್ಕಾರದಿಂದ ದೊರಕುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಶುಭಂ ಶುಕ್ಲ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ, ಆಪ್ತ ಕಾರ್ಯದರ್ಶಿ ರಘು ಉಪಸ್ಥಿತರಿದ್ದರು.