ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿಂದಾಗುತ್ತಿರುವ ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರವೇ ನಿವಾರಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಅವರಿಗೆ ಮನವಿ ಸಲ್ಲಿಸಿದರು. ಕರವೇ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್, ಪ್ರಸನ್ನ ಇತರರು ಇದ್ದರು.
ಬೇಲೂರು: ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು, ರೈತರು ತೊಂದರೆ ಅನುಭವಿಸುವಂತಾಗಿದ್ದು, ತಕ್ಷಣವೇ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಕರವೇ ನಾರಾಯಣಗೌಡ ಬಣದ ಪದಾಧಿಕಾರಿಗಳು ತಹಸೀಲ್ದಾರ್ ಶ್ರೀಧರ್ ಕಂಕನವಾಡಿಗೆ ಸೋಮವಾರ ಮನವಿ ಸಲ್ಲಿಸಿದರು.
ಕರವೇ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಈಗಾಗಲೇ ಶಾಲಾ ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಜಾತಿ-ಆದಾಯ ಪ್ರಮಾಣ ಪತ್ರಗಳ ಅಗತ್ಯವಿದೆ. ಜತೆಗೆ ಪೊಲೀಸ್ ಕಾನ್ಸ್‌ಟೇಬಲ್ ಸೇರಿದಂತೆ ಸರ್ಕಾರ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಾಖಲಾತಿಗಳ ಅವಶ್ಯಕತೆ ಇದೆ. ಆದ್ದರಿಂದ ಪ್ರಮಾಣ ಪತ್ರಗಳ ವಿತರಣೆಯಲ್ಲಿ ವಿಳಂಬವಾಗದಂತೆ ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು. ತಾಲೂಕು ಕಚೇರಿಯಲ್ಲಿ ಬಗರ್ ಹುಕುಂ ಕಮಿಟಿ ಸಂಬಂಧಿತ ಕಾರ್ಯಗಳಿಗೆ ಸಂಬಂಧಿಸಿದಂತೆ ಆರ್‌ಐ, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ಸಾಕಷ್ಟು ಸಿಬ್ಬಂದಿ ರಜೆಯಲ್ಲಿರುವುದರಿಂದ ಕಚೇರಿ ಕೆಲಸಗಳ ಮೇಲೆ ಪರಿಣಾಮ ಬೀರಿದ್ದು ಇದರಿಂದ ಸಾರ್ವಜನಿಕ ಕೆಲಸಗಳಲ್ಲಿ ವಿಳಂಬದ ಕಾರಣ ವಿದ್ಯಾರ್ಥಿಗಳು, ರೈತರು ಸಮಸ್ಯೆ ಎದುರಿಸುವಂತಾಗಿದೆ. ಈ ಬಗ್ಗೆ ಪರಿಶೀಲಿಸಿ ತಕ್ಷಣವೇ ಹಿರಿಯ ಅಧಿಕಾರಿಗಳು ಗಮನ ಹರಿಸಿ ಸಿಬ್ಬಂದಿ ಕೊರತೆ ಪರಿಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿ ಕೊಡಲು ಮುಂದಾಗಬೇಕು ಎಂದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ, ಸಿಬ್ಬಂದಿ ಕೊರತೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸಲು ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಶಿರಸ್ತೇದಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಜಾತಿ, ಆದಾಯ ಪ್ರಮಾಣ ಪತ್ರ ಸೇರಿದಂತೆ ಸಾರ್ವಜನಿಕರ ಅಗತ್ಯ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗುವುದು. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಜೂ. 25ರೊಳಗೆ ಸಮಸ್ಯೆ ಬಗೆಹರಿಯುವ ನಿರೀಕ್ಷೆ ಇದೆ. ಸಾಧ್ಯವಾಗದಿದ್ದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಪರ್ಯಾಯ ಸಿಬ್ಬಂದಿ ವ್ಯವಸ್ಥೆ ಮಾಡಲಾಗುವುದು ಎಂದರು.
ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್, ಕರವೇ ಹೋಬಳಿ ಅಧ್ಯಕ್ಷರಾದ ಪ್ರಸನ್ನ, ಚಿಂತನ್ ಗೌಡ, ಈಶ್ವರ್, ನಗರಾಧ್ಯಕ್ಷ ಮುನವರ್ ಪಾಷಾ, ಉಪಾಧ್ಯಕ್ಷರಾದ ಹನೀಫ್, ಗಂಗರಾಜು ಸೇರಿದಂತೆ ಇತರರಿದ್ದರು.