ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಫೆ. 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ ಕುರಿತು ರಾಜ್ಯ ಉಪಾಧ್ಯಕ್ಷ ವಿ.ಜಿ.ದ್ಯಾವೇಗೌಡ ಮಾಹಿತಿ ನೀಡಿದರು. 
ಹಾಸನ

28 ರಂದು ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ

ಶಿವಶಂಕರ್ ಎಂ. ಹೆಬ್ಬಳ್ಳ

ಪ್ರಮುಖ ಮುಖ್ಯಾಂಶಗಳು

  • ಚೈತ್ರಾ ನಾಯಕರಹಳ್ಳಿ ಮಾಹಿತಿ
ಚನ್ನರಾಯಪಟ್ಟಣ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು 55 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆ.28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ, ಧನ್ಯತಾ ಸಮಾರಂಭ, ಸಂಘದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಚೈತ್ರಾ ನಾಯಕರಹಳ್ಳಿ ತಿಳಿಸಿದರು.
ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಇಲಾಖೆಯ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಜಿಲ್ಲೆಯ ಒಬ್ಬ ಸಾಧಕ ಶಿಕ್ಷಕನಿಗೆ ಮಹಾತ್ಮ ಜ್ಯೋತಿಬಾ ಫುಲೆ ಪ್ರಶಸ್ತಿ ಹಾಗೂ ಒಬ್ಬ ಸಾಧಕಿ ಶಿಕ್ಷಕಿಗೆ ಮಾತೆ ಸಾವಿತ್ರಿಬಾ ಫುಲೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಗಣ್ಯರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಅನ್ಯ ಕಾರ್ಯನಿಮಿತ್ತ ರಜೆ ಸೌಲಭ್ಯವಿದೆ. ಹಾಗಾಗಿ, ಜಿಲ್ಲೆಯ ಎಲ್ಲಾ ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ವಿ.ಜಿ.ದ್ಯಾವೇಗೌಡ ಮಾತನಾಡಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ನಮ್ಮ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವದೊಂದಿಗೆ ಸಾಗುತ್ತಿರುವ ಈ ಸಂಘಟನೆ ದೇಶದ ಮಾದರಿ ಶಿಕ್ಷಕರ ಸಂಘಟನೆಗಳಲ್ಲೊಂದು. ಶಿಕ್ಷಕರ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಸಂಘ ನಿರಂತರ ಪ್ರಯತ್ನ ನಡೆಸಿದ್ದು, ಕಳೆದ ಆರು ತಿಂಗಳಲ್ಲಿ ಸಂಘ ಸಾಧಿಸಿದ ಪ್ರಮುಖ ಸಾಧನೆಗಳು ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಶಿಕ್ಷಕರ ಪರ ತಿದ್ದುಪಡಿ, ಸಹಶಿಕ್ಷಕರಿಂದ ಮುಖ್ಯ ಶಿಕ್ಷಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ ನಿಯಮಾವಳಿ, ಹಿರಿಯ ಮುಖ್ಯ ಶಿಕ್ಷಕರಿಗೆ ಕೌನ್ಸೆಲಿಂಗ್ ಮೂಲಕ ಬಡ್ತಿ, ದೈಹಿಕ ಶಿಕ್ಷಣ ಶಿಕ್ಷಕರಿಗೆ ಗ್ರೇಡ್1 ಬಡ್ತಿ, ರಾಜ್ಯದ 1.5 ಲಕ್ಷ ಶಿಕ್ಷಕರಿಗೆ ಉಚಿತ ಐಟಿ ಹಾಗೂ ಇ- ಫೈಲಿಂಗ್ ಸೌಲಭ್ಯ, ಶಾಲೆಗಳಿಗೆ ಕುಡಿಯುವ ನೀರು ಮತ್ತು ಶೌಚಗೃಹ ನಿರ್ವಹಣೆಗೆ ಅನುದಾನ, ಮಹಿಳಾ ಶಿಕ್ಷಕರಿಗೆ ವೇತನ ಸಹಿತ ಋತುಚಕ್ರ ರಜೆ, ಆಕಸ್ಮಿಕ ನಿಧನರಾದ ಶಿಕ್ಷಕರ ಕುಟುಂಬಗಳಿಗೆ ಪರಿಹಾರ, 45 ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ವರ್ಗಾವಣೆ ಭಾಗ್ಯ, ವಿದ್ಯುತ್ ಬಿಲ್ ಉಚಿತ, ಕ್ರೀಡಾ ಚಟುವಟಿಕೆಗಳಿಗೆ ಪ್ರತ್ಯೇಕ ಅನುದಾನ ಸೇರಿದಂತೆ ಹಲವು ಶಿಕ್ಷಕಪರ ನಿರ್ಣಯಗಳನ್ನು ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಗಮನ ಸೆಳೆದು ಅನೇಕ ಬೇಡಿಕೆಗಳನ್ನು ಈಡೇರಿಸಿಕೊಳ್ಳಲಾಗಿದೆ.
ಶಿಕ್ಷಕರ ಖಾಲಿ ಹುದ್ದೆ ಭರ್ತಿ, ಇತ್ತೀಚಿನ ವರ್ಷಗಳಲ್ಲಿ ರಚನೆಯಾಗಿರುವ ತಾಲೂಕು ಕೇಂದ್ರಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆರಂಭಿಸುವುದು, ಪ್ರತಿಭಾ ಕಾರಂಜಿಗೆ ಹೆಚ್ಚಿನ ಅನುದಾನ ಬಿಡುಗಡೆ, ಬಡ್ತಿ ಗೊಂದಲ ನಿವಾರಣೆ, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವುದು ಸೇರಿದಂತೆ ಸುಮಾರು 27 ಹಕ್ಕೋತ್ತಾಯಗಳನ್ನು ಇದೇ ಸಂದರ್ಭದಲ್ಲಿ ಮಂಡಿಸಲಾಗುವುದು ತಾಲೂಕಿನಲ್ಲಿರುವ ಶಿಕ್ಷಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಡಿ.ಎನ್.ರವಿ, ಗೌರವಾಧ್ಯಕ್ಷ ಕೆ ಮಂಜೇಗೌಡ ಪ್ರಧಾನ ಕಾರ್ಯದರ್ಶಿ ಗಾಯತ್ರಮ್ಮ ಸಹ ಕಾರ್ಯದರ್ಶಿ ಗಳಾದ ಎ.ಜೆ.ಲೋಕೇಶ್, ಬಿ.ಎನ್.ಜಯಂತಿ ನಿರ್ದೇಶಕ ಮಂಜಪ್ಪ, ಜಿಲ್ಲಾ ನಿರ್ದೇಶಕ ಡಿ.ಕೆ.ಅಶೋಕ್ ಕುಮಾರ್ ಇದ್ದರು.