ಡಿಸಿ ಲತಾ ಕುಮಾರಿ. 
ಹಾಸನ

ಅಪಘಾತ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳಿ

ಪ್ರಸಿನ್ ಕೆ.ಆರ್

ಪ್ರಮುಖ ಮುಖ್ಯಾಂಶಗಳು

  • ಅಪಘಾತ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳಿ
  • ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲತಾ ಕುಮಾರಿ ಸೂಚನೆ

ಹಾಸನ:

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು, ಅಪಘಾತದಿಂದ ಮರಣ ಹೊಂದುವುದನ್ನು ತಡೆಗಟ್ಟಲು ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಅಪಘಾತಗಳ ತಡೆಗೆ ಕ್ರಿಯಾ ಯೋಜನೆ ತಯಾರಿಸಿ ಎಂದು ಸೂಚಿಸಿದರಲ್ಲದೆ, ಸಾವಿನ ಪ್ರಮಾಣ ಕಡಿಮೆ ಮಾಡಲು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಅಪಘಾತಗಳು ಸಂಭವಿಸುತ್ತಿರುವ ಬ್ಲ್ಯಾಕ್ ಸ್ಪಾಟ್ ಗುರುತಿಸಿ ಯಾವ ಕಾರಣಕ್ಕೆ ಅಪಘಾತ ಸಂಭವಿಸುತ್ತಿವೆ ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕು. ಅಪಘಾತ ತಡೆಗಟ್ಟಲು ಏನು ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಹಾಗೂ ಅಪಘಾತಗಳಿಂದ ಸಂಭವಿಸಿರುವ ಮರಣಗಳ ಆಡಿಟ್ ಆಗಬೇಕು. ಈ ನಿಟ್ಟಿನಲ್ಲಿ ಒಂದು ತಿಂಗಳೊಳಗೆ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ರಸ್ತೆ ಸುರಕ್ಷತೆಗೆ ಸಹಾಯವಾಣಿ ತೆರೆಯಬೇಕು. ಮೋಟಾರು ವಾಹನಕ್ಕೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆದ್ಯತೆ ನೀಡಬೇಕು. ರಸ್ತೆ ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿ 15 ನಿಮಿಷದಲ್ಲಿ ಸ್ಥಳಕ್ಕೆ ಆಂಬುಲೆನ್ಸ್ ಹೋಗುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ತಿಳಿಸಿದರು.

ವಾಹನ ಚಾಲನೆ ಮಾಡುವಾಗ ಸುರಕ್ಷತೆಗಾಗಿ ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಗೂ ಹೆಲ್ಮೆಟ್ ಧರಿಸಬೇಕು. ತಾಲೂಕು ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಪ್ರತಿವಾರ ಸಭೆ ನಡೆಸಿ ರಸ್ತೆ ಸುರಕ್ಷತೆಗೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಮಾತನಾಡಿ, ರಸ್ತೆ ಗುಂಡಿಗಳನ್ನು ಮುಚ್ಚಲು ಮುಂಜಾಗ್ರತೆ ವಹಿಸಿ ಕ್ರಮ ಕೈಗೊಳ್ಳಬೇಕು. ಕೆಎಸ್‌ಆರ್‌ಟಿಸಿ ಬಸ್ ಚಾಲಕರು ವಾಹನವನ್ನು ಶಿಸ್ತು ಬದ್ಧವಾಗಿ ಚಾಲನೆ ಮಾಡುವಂತೆ ತಿಳಿ ಹೇಳಿಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿ ಕೆಲಸವನ್ನು ಶೀಘ್ರವಾಗಿ ಪೂರ್ಣಗೊಳಿಸುವುದರ ಜತೆಗೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.