ಜಿಲ್ಲಾಧಿಕಾರಿ ಕಚೇರಿಯಲ್ಲಿ ತಹಸೀಲ್ದಾರ್‌ಗಳೊಂದಿಗೆ ಏರ್ಪಡಿಸಿದ್ದ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಸಕಲೇಶಪುರದ ಉಪವಿಭಾಗಾಧಿಕಾರಿ ಮಂಜುನಾಥ್ ಇತರರು ಇದ್ದರು. 
ಹಾಸನ

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ

ಪ್ರಸಿನ್ ಕೆ.ಆರ್

ಪ್ರಮುಖ ಮುಖ್ಯಾಂಶಗಳು

  • ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ
  • ತಹಸೀಲ್ದಾರರಿಗೆ ಡಿಸಿ ಲತಾಕುಮಾರಿ ಸೂಚನೆ
  • ಆನ್‌ಲೈನ್ ಸಂವಾದದಲ್ಲಿ ಹಲವು ವಿಷಯಗಳ ಚರ್ಚೆ
ಹಾಸನ: ಬೇಸಿಗೆ ಆರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸಂಜೆ ತಹಸೀಲ್ದಾರ್‌ಗಳೊಂದಿಗೆ ಏರ್ಪಡಿಸಿದ್ದ ವಿಡಿಯೋ ಸಂವಾದದಲ್ಲಿ ಕುಡಿಯುವ ನೀರು ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚಿಸಿದರು.
ತಹಸೀಲ್ದಾರ್‌ಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳನ್ನು ಮೊದಲೇ ಗುರುತಿಸಿರಬೇಕು. ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಾನುವಾರುಗಳಿಗೆ ಮೇವು, ನೀರಿನ ಕೊರತೆಯಾಗಬಾರದು. ಮೇವಿನ ಅಗತ್ಯತೆಯನ್ನು ಈಗಲೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಹಿಂದಿನ ವರ್ಷ ಬೇಸಿಗೆಯಲ್ಲಿ ಆದಂತಹ ಸಮಸ್ಯೆಗಳು ಮತ್ತೆ ಮರುಕಳಿಸಬಾರದು. ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ ಪ್ರಾರಂಭ ಮಾಡಬೇಕು. ಈ ಬಗ್ಗೆ ಹೆಚ್ಚಿನ ಪ್ರಚಾರವನ್ನೂ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಬಗೆಹರಿಸಲು ಮಾಡಿಕೊಂಡಿರುವ ಸಿದ್ಧತೆಯ ವರದಿಯನ್ನು ಕೂಡಲೇ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಭೂ ಸುರಕ್ಷಾ ಯೋಜನೆಯಡಿ ದಾಖಲೆಗಳ ಡಿಜಿಟಲೀಕರಣ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಹಕ್ಕುಪತ್ರ ವಿತರಣೆ ಅಗತ್ಯ ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಬಾಕಿ ಇರುವ ಜಮೀನು ದುರಸ್ತಿ ಮಾಡಬೇಕು. ಪೌತಿ ಖಾತೆ ಆಂದೋಲನ ನಡೆಯುತ್ತಿದ್ದು ನಿಗದಿತ ಗುರಿ ಸಾಧಿಸಬೇಕು ಹಾಗೂ ಸರ್ಕಾರಿ ಕೆರೆ ಒತ್ತುವರಿ ತೆರವು ಕಾರ್ಯ ಶೇ.100 ರಷ್ಟು ಆಗಬೇಕು, ತಹಸೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ವಿಲೇವಾರಿಯಾಗಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಸಕಲೇಶಪುರದ ಉಪವಿಭಾಗಾಧಿಕಾರಿ ಮಂಜುನಾಥ್ ಹಾಗೂ ತಹಸೀಲ್ದಾರ್‌ಗಳು ಇದ್ದರು.