ಒಕ್ಕಲಿಗರ ಸಮುದಾಯ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಶ್ರೀಕೆಂಪೇಗೌಡರ 517ನೇ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಕಲೇಶಪುರ: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಆಡಳಿತ, ಜನಪರ ಚಿಂತನೆ ಹಾಗೂ ಅಭಿವೃದ್ಧಿ ಕಾರ್ಯಗಳು ಇಂದಿನ ಪೀಳಿಗೆಗೆ ದಾರಿದೀಪವಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಶ್ರೀಕೆಂಪೇಗೌಡರ 517ನೇ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂದು ಬೆಂಗಳೂರು ವಿಶ್ವದಾದ್ಯಂತ ಸಾಫ್ಟ್‌ವೇರ್ ನಗರವಾಗಿ ಗುರುತಿಸಿಕೊಂಡಿದೆ. ಇದಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟವರು ಕೆಂಪೇಗೌಡರು. ಅವರ ದಾರಿಯಲ್ಲಿ ನಾವೆಲ್ಲಾ ಸಾಗಬೇಕಿದೆ. ಜನಪರವಾಗಿ ಮಾಡಿದ ಉತ್ತಮ ಕೆಲಸಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ. ಶಾಸಕನಾಗಿ ನಾನು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದರು.
ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಎಂ. ವಿಶ್ವನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಕೆಂಪೇಗೌಡ ಜಯಂತಿ ಕೇವಲ ಆಚರಣೆಗೆ ಸೀಮಿತವಾಗಬಾರದು. ಅವರ ಆದರ್ಶಗಳು, ಮೌಲ್ಯಗಳು ಮತ್ತು ಜನಪರ ಆಡಳಿತವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪದ ದಿನವಾಗಬೇಕು. ಈ ನಿಟ್ಟಿನಲ್ಲಿ ಸಂಘದ ವತಿಯಿಂದ 25 ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ ಕಲ್ಪಿಸಿ ಶಿಕ್ಷಣಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ಯಾವುದೇ ಆಧುನಿಕ ತಂತ್ರಜ್ಞಾನವಿಲ್ಲದ ಕಾಲದಲ್ಲಿಯೇ ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರು ನಿರ್ಮಿಸಿರುವುದು ಇಂದಿಗೂ ಪ್ರೇರಣೆಯಾಗಿದೆ ಎಂದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮುರುಳಿ ಮೋಹನ್ ಮಾತನಾಡಿ,
ಕೆಂಪೇಗೌಡರು ನಿರ್ಮಿಸಿದ ದೇವಸ್ಥಾನಗಳು, ರಸ್ತೆಗಳು ಹಾಗೂ ಮೂಲಸೌಕರ್ಯಗಳು ಇಂದಿಗೂ ಮಾದರಿಯಾಗಿದ್ದು, ಅವರ ಆದರ್ಶಗಳನ್ನು ಪಾಲಿಸಿ ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಟೋಲ್‌ಗೇಟ್ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐದು ಗಣ್ಯರನ್ನು ಸನ್ಮಾನಿಸಲಾಯಿತು.
ಕೆ.ಎಸ್.ತಹಸೀಲ್ದಾರ್ ಸುಪ್ರೀತಾ, ಸಕಲೇಶಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಮುಫೀಜ್, ಪುರಸಭೆ ಮುಖ್ಯಾಧಿಕಾರಿ ಮಹೇಶ್ವರಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಾಧರ್, ಜೆಡಿಎಸ್ ತಾಲೂಕು ಅಧ್ಯಕ್ಷ ದೊಡ್ಡದಿಣ್ಣೆ ಸ್ವಾಮಿಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಅಶ್ವಥ್ ವಳಲಹಳ್ಳಿ, ಕಾಂಗ್ರೆಸ್ ತಾಲೂಕು ಅಧ್ಯಕ್ಷ ಬಿ.ಎನ್. ರಾಮಚಂದ್ರ (ಬೈರುಮಡಿ ಚಂದ್ರು), ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.