ನೀಟ್ ಅಕ್ರಮ ಖಂಡಿಸಿ ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಪಟ್ಟಣದ ವಿವಿಧ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಚನ್ನರಾಯಪಟ್ಟಣ: ನೀಟ್ ಅಕ್ರಮ ಖಂಡಿಸಿ ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಪಟ್ಟಣದ ವಿವಿಧ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ಪ್ರತಿಭಟನೆ ಹಮ್ಮಿಕೊಂಡಿದ್ದವು.
ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ಜಮಾಯಿಸಿದ ಸಿಐಟಿಯು, ಕೆಪಿಆರ್‌ಎಸ್, ವಿದ್ಯಾರ್ಥಿಗಳ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಜನಪರ ಚಳವಳಿಗಳ ಒಕ್ಕೂಟದ ಪದಾಧಿಕಾರಿಗಳು ವಿದ್ಯಾರ್ಥಿಗಳ ಹಕ್ಕುಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಮುಂದಾಗಿರುವುದು ಖಂಡನೀಯ. ವಿದ್ಯಾರ್ಥಿಗಳ ಮೇಲೆ ಅಮಾನ ವೀಯವಾಗಿ ಲಾಠಿ ಚಾರ್ಜ್ ಮಾಡಿ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ೋಷಣೆ ಕೂಗಿದರು.
ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಾವಿಗೆ ನ್ಯಾಯ ಸಿಗಬೇಕು. ಅದಕ್ಕಾಗಿ ಕೇಂದ್ರ ಸಚಿವ ಧಮೇರ್ಂದ್ರ ಪ್ರಧಾನ್ ರಾಜೀನಾಮೆ ಕೊಡಬೇಕು. ಪ್ರಧಾನಿ ಮೋದಿ ದೇಶದ ಜನತೆಗೆ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಿಐಟಿಯು ಮುಖಂಡ ಎಚ್.ಎಸ್.ಮಂಜುನಾಥ್ ಮಾತನಾಡಿ, ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನೀಟ್ ಪರೀಕ್ಷೆ ನಡೆಸುವಲ್ಲಿ ವಿಫಲವಾಗಿದೆ. ಇದರಿಂದ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಕೇಂದ್ರ ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಕೈಬಿಟ್ಟಿಲ್ಲ. ಕೇಂದ್ರ ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ್ ರಾಜೀನಾಮೆ ನೀಡಿಲ್ಲ. ದೇಶದ ಯುವಜನರ ಭವಿಷ್ಯದ ಕನಸುಗಳನ್ನು ಚಿವುಟುವ ಕಾರ್ಯವನ್ನು ಬಿಜೆಪಿ ನೇತೃತ್ವದ ಸರ್ಕಾರ ಮಾಡಿದೆ. ಇದನ್ನು ಗಮನಿಸುತ್ತಿರುವ ಜನರು ಮುಂಬರುವ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಕರ್ನಾಟಕ ಪ್ರಾಂತ್ಯ ರೈತ ಸಂಘದ ವಳಗೆರಹಳ್ಳಿ ರಾಮಚಂದ್ರ, ವಾಸು ಕಲ್ಕೆರೆ, ತೇಜಸ್ ಗೌಡ, ಸುಜಾತಾ ಕುಮಾರಸ್ವಾಮಿ, ರೈತ ಸಂಘದ ರವಿ ಗೌಡಯ್ಯ, ಶಂಕರಣ್ಣ ಬರಗೂರು, ರಘು ಹಿರಿಸಾವೆ, ದಲಿತ ಸಂಘರ್ಷ ಸಮಿತಿಯ ದಂಡೋರ ಮಂಜುನಾಥ್, ಸತೀಶ, ಮಂಜು, ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು, ವಿದ್ಯಾರ್ಥಿಗಳು ಹೋರಾಟದಲ್ಲಿ ಭಾಗವಹಿಸಿದ್ದರು.