ಬೇಲೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿದ್ದು, ಜನಸಾಮಾನ್ಯರು ಬೆಲೆ ಏರಿಕೆ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಶಾಸಕ ಎಚ್.ಕೆ.ಸುರೇಶ್ ಆರೋಪಿಸಿದರು.
ರಾಜ್ಯ ಸರ್ಕಾರದ ಬೆಲೆ ಏರಿಕೆ, ಹಾಲಿನ ದರ ಹೆಚ್ಚಳ, ಬಸ್ ಪ್ರಯಾಣ ದರ ಏರಿಕೆ ಹಾಗೂ ಅಭಿವೃದ್ಧಿ ಕಾರ್ಯಗಳ ನಿರ್ಲಕ್ಷ್ಯ ಖಂಡಿಸಿ ಬಿಜೆಪಿಯಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಸಂಜೆ ವಾಹನಗಳ ಸಂಚಾರ ತಡೆ ಮೂಲಕ ಪ್ರತಿಭಟಿಸಿ ಮಾತನಾಡಿದ ಅವರು, ಹಾಲು ಉತ್ಪಾದಕ ರೈತರಿಗೆ ಪ್ರತಿ ಲೀಟರ್ಗೆ 6 ರೂ. ಸಹಾಯಧನ ನೀಡುತ್ತಿರುವುದಾಗಿ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ಹಾಲಿನ ಖರೀದಿ, ಮಾರಾಟದ ದರದಲ್ಲಿ 12 ರೂ. ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೆಚ್ಚುವರಿ ಹೊರೆ ಹಾಕುತ್ತಿದೆ. ಸರ್ಕಾರ ಆರನೇ ಗ್ಯಾರಂಟಿ ಹೆಸರಲ್ಲಿ ಜನರಿಗೆ ಹೊಸ ಭರವಸೆ ನೀಡಿದೆ ಎಂದು ಆರೋಪಿಸಿದರು.
ಜಿಲ್ಲಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ ಮಾತನಾಡಿ, ರಾಜ್ಯ ಸರ್ಕಾರದ ಆಡಳಿತ ವೈಖರಿಯಿಂದ ಜನಸಾಮಾನ್ಯರು ಹಾಗೂ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರಿಗೆ ಸಹಾಯಧನ ನೀಡುವ ಹೆಸರಲ್ಲಿ ಹಾಲಿನ ದರ ಹೆಚ್ಚಳ ಮಾಡಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ ಎಂದು ಹೇಳಿ, ಬಸ್ ಪ್ರಯಾಣ ದರ ಏರಿಸಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.
ಬಿಜೆಪಿ ತಾಲೂಕು ಅಧ್ಯಕ್ಷ ಸಂಜು ಕೌರಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಹೆಸರಿನಲ್ಲಿ ಜನರನ್ನು ದಾರಿ ತಪ್ಪಿಸುತ್ತಿದೆ. ರೈತರಿಗೆ ನೀಡುವ ಸಹಾಯಧನದ ವಿಚಾರದಲ್ಲಿ ಒಂದು ಕಡೆ ಭರವಸೆ ನೀಡಿ ಮತ್ತೊಂದು ಕಡೆ ಬೆಲೆ ಏರಿಕೆ ಮಾಡಲಾಗುತ್ತಿದೆ. ಬಸ್ ದರ ಹೆಚ್ಚಳದಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.
ಬಿಜೆಪಿ ಮುಖಂಡರಾದ ಮೋಹನ್, ರಘು, ಲಕ್ಷ್ಮೀ ನಾಗರಾಜ್, ಶೋಭಾ ಗಣೇಶ್, ರಮೇಶ್ ಸುವರ್ಣಾ, ಪರ್ವತಯ್ಯ, ತೀರ್ಥಂಕರ್, ಸುಮನ್, ಸಂಜು, ಭರತ್, ನವೀನ್, ಪ್ರಸನ್ನ, ದೀಪು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರಿದ್ದರು.