ಚನ್ನರಾಯಪಟ್ಟಣ: ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್‌ನ ಮೂರನೇ ವರ್ಷದ ಸಂಸ್ಥಾಪನಾ ದಿನ ಆಚರಣೆಯನ್ನು ಅ.9ರಂದು ಹಾಸನದ ಕಲಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘಟನೆಯ ತಾಲೂಕು ಅಧ್ಯಕ್ಷ ಎಚ್.ಎಸ್. ಮಂಜುನಾಥ್ ತಿಳಿಸಿದರು.
ಅಂದು ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಮೊಮ್ಮಗ ಅಮನ್ ಆನಂದ್‌ರಾಜ್ ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಂಬೇಡ್ಕರ್‌ರ ಅನುಯಾಯಿಗಳು ಸೇರಿದಂತೆ 3 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಯಲಿದ್ದು, ಅಂಬೇಡ್ಕರ್‌ರ ವಿಚಾರಧಾರೆ, ಸಾಮಾಜಿಕ ಸಮಾನತೆ, ನ್ಯಾಯ ಹಾಗೂ ಸಂಘಟನೆಯ ಮೂರು ವರ್ಷಗಳ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ ನಡೆಯಲಿದೆ. ಸಂಘಟನೆ ನಡೆದು ಬಂದ ಹಾದಿಯ ಅವಲೋಕನದ ಜತೆಗೆ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳು ಹಾಗೂ ಸಂಘಟನೆಯ ಕಾರ್ಯವೈಖರಿ ಕುರಿತು ಸಂವಾದವೂ ನಡೆಯಲಿದೆ ಎಂದರು.
ಜಿಲ್ಲೆಯ ಎಲ್ಲ ತಾಲೂಕುಗಳಿಂದ ಆಗಮಿಸುವ 500ಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಬೈಕ್ ರ‌್ಯಾಲಿ ಹಾಗೂ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಲಿದೆ ಎಂದರು.
ಸಂಘಟನೆಯ ಸಂಸ್ಥಾಪಕ ಹಾಗೂ ಅಧ್ಯಕ್ಷ ಮತೀನ್‌ಕುಮಾರ್ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಘಟನೆಯನ್ನು ಬಲಪಡಿಸುವ ಕಾರ್ಯ ನಡೆಯುತ್ತಿದೆ ಎಂದರು.
ಸಂಘಟನೆ ಕಳೆದ ಮೂರು ವರ್ಷಗಳಲ್ಲಿ ನಡೆಸಿರುವ ಸಮಾಜಮುಖಿ ಕಾರ್ಯಗಳನ್ನು ಅವಲೋಕಿಸಲಾಗುವುದು. ಮುಂದಿನ ದಿನಗಳಲ್ಲಿ ಸಂಘಟನೆಯ ವ್ಯಾಪ್ತಿ ವಿಸ್ತರಣೆ, ಯುವಕರನ್ನು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಜನರಿಗೆ ತಲುಪಿಸುವ ಕುರಿತು ರಾಜ್ಯ, ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳೊಂದಿಗೆ ಸಂವಾದ ನಡೆಸಲಾಗುವುದು ಎಂದರು.
ಜಯಕುಮಾರ್ ಹಾದಿಗೆ ಅವರ ಮೊದಲ ಕವನ ಸಂಕಲನ ಬಿಡುಗಡೆಯಾಗಲಿದೆ. ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳ ಸಂಘಟನೆಯ ಪದಾಧಿಕಾರಿಗಳು, ದಲಿತಪರ, ಪ್ರಗತಿಪರ ಹಾಗೂ ರೈತಪರ ಸಂಘಟನೆಗಳ ಮುಖಂಡರು, ವಿವಿಧ ಸಮುದಾಯಗಳ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸಂಘಟನೆ ಪದಾಧಿಕಾರಿಗಳಾದ ಪುಟ್ಟಸ್ವಾಮಿ, ಗಣೇಶ್, ರವಿ ಮಾದಿಹಳ್ಳಿ ಹಾಗೂ ಎಸ್.ಜೆ. ಮಂಜುನಾಥ್ ಸುದ್ದಿಗೋಷ್ಠಿಯಲ್ಲಿದ್ದರು.