ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಬೇಲೂರಿನಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು. 
ಹಾಸನ

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಿ

ಬೇಲೂರಿನಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ

ಬೇಲೂರು: ತಾಲೂಕಿನಲ್ಲಿ ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ವಕೀಲರ ಸಂಘದಿಂದ ಬುಧವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ವಕೀಲ ಎಸ್.ಎನ್.ಲಿಂಗೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ದಾಳಿಗೆ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈವರೆಗೂ ತಾಲೂಕಿನಲ್ಲಿ 14 ಜನರು ಆನೆ ದಾಳಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರ ಕೇವಲ ಭರವಸೆ ನೀಡುತ್ತಿದೆ ಹೊರತು ಪರಿಹಾರ ಕೈಗೊಳ್ಳುತ್ತಿಲ್ಲ. ಕಾಡಾನೆಗಳನ್ನು ಎಲ್ಲಿಗೆ ಸ್ಥಳಾಂತರಿಸಬೇಕೆಂಬ ಸ್ಪಷ್ಟತೆ ಇಲ್ಲದ ಕಾರಣ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸುವುದಾಗಿ ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಕೆ.ಎಲ್.ನಟರಾಜ್ ಮಾತನಾಡಿ, ಮಲೆನಾಡು ಭಾಗದಲ್ಲಿ ಐದಾರು ವರ್ಷದಿಂದ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಸಂಜೆ ನಂತರ ಓಡಾಡುವುದೇ ಕಷ್ಟವಾಗಿದೆ. ರೈತರಿಗೆ ಬೆಳೆ ಪರಿಹಾರ ಸರಿಯಾಗಿ ವಿತರಿಸುತ್ತಿಲ್ಲ. ತಕ್ಷಣ ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಮಲೆನಾಡಿಗರಿಗೆ ನೆಮ್ಮದಿ ಸಿಗುವಂತೆ ಮಾಡಬೇಕು. ಇಲ್ಲದಿದ್ದಲ್ಲಿ ಅರಣ್ಯ ಸಚಿವರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಹೈಕೋರ್ಟ್‌ನಲ್ಲಿ ಪಿಐಎಲ್ ದಾಖಲಿಸುವುದರ ಜತೆಗೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಕೀಲರ ಸಂಘದ ಮಾಜಿ ಅಧ್ಯಕ್ಷ ಪೃಥ್ವಿ ಮಾತನಾಡಿ, ತಾಲೂಕಿನ ಕುಶಾವರ, ಚೌಡನಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ 50 ರಿಂದ 60ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿವೆ. ಮೂರ‌್ನಾಲ್ಕು ವರ್ಷಗಳಿಂದ ರೈತರಿಗೆ ಪರಿಹಾರ ಸಿಗದೆ ಪರದಾಡುತ್ತಿದ್ದಾರೆ. ಮೃತಪಟ್ಟವರಿಗೆ ನೀಡುತ್ತಿರುವ 20 ಲಕ್ಷ ರೂ.ಪರಿಹಾರ ಸಾಲದು, ಇದನ್ನು ಹೆಚ್ಚಿಸಬೇಕು ಎಂದರು.

ಪ್ರಧಾನ ಕಾರ್ಯದರ್ಶಿ ಸುನಿಲ್, ವಕೀಲರಾದ ಚಂದ್ರೇಗೌಡ, ರಾಜಶೇಖರ್, ಮಂಜುನಾಥ್, ಮಹೇಶ್, ಎಚ್.ಆರ್.ಚಂದ್ರು, ರತೀಶ್, ಗಿರೀಶ್, ನಟರಾಜ್, ಚಂದ್ರು, ಶ್ರೀಧರ್, ಸಿದ್ದೇಗೌಡ, ದೇವರಾಜ್, ಕುಮಾರ್, ಕಿರಣ್, ಪದಾಧಿಕಾರಿಗಳು ಸದಸ್ಯರಿದ್ದರು.