ಹಾಸನದ ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. 
ಹಾಸನ

ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ

ಕನ್ನಡ ರಾಜ್ಯೋತ್ಸವ ಹಾಗೂ ಕಾರ್ತಿಕ ದೀಪೋತ್ಸವ

ಹಾಸನ: ನಗರದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಕಾರ್ತಿಕ ದೀಪೋತ್ಸವ ಆಚರಿಸಲಾಯಿತು.

ಹಾಸನಾಂಬ ಯೋಗ ಶಾಖೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿಹೋತ್ರ, ರುದ್ರನಾಮ ಜಪ, ದೇವತಾ ಆರಾಧನೆ ನೆರವೇರಿದವು. ಶಾಖೆಯ ಆವರಣದಲ್ಲಿ ನೂರಾರು ದೀಪಗಳನ್ನು ಬೆಳಗಿಸುವ ಮೂಲಕ ಆಧ್ಯಾತ್ಮಿಕ ವಾತಾವರಣ ನಿರ್ಮಿಸಲಾಗಿತ್ತು.

ಶಾಖೆಯ ಸದಸ್ಯೆ ಬಿ.ಎಸ್.ವನಜಾಕ್ಷಿ ಮಾತನಾಡಿ, ಕನ್ನಡ ನಾಡು-ನುಡಿಯ ಉಳಿವು ಮತ್ತು ಬೆಳವಣಿಗೆಯಲ್ಲಿ ತಾಯಂದಿರ ಪಾತ್ರ ಮಹತ್ವದ್ದಾಗಿದೆ. ಕಾವೇರಿಯಿಂದ ಗೋದಾವರಿವರೆಗಿನ ಕನ್ನಡ ನಾಡಿನ ಐತಿಹಾಸಿಕ ವ್ಯಾಪ್ತಿ, ಜನಪದ ಸಾಹಿತ್ಯದ ಶ್ರೀಮಂತಿಕೆ ಹಾಗೂ ನಮ್ಮ ಪೂರ್ವಜರ ಬೌದ್ಧಿಕ ಸಾಧನೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಕನ್ನಡ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಿಳಿಸಿದರು.

ವಲಯ ಸಂಚಾಲಕಿ ಶೋಭಾ ಮಾತನಾಡಿ, ಸಂಸ್ಕಾರ, ಸಂಘಟನೆ ಮತ್ತು ಸೇವೆ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಪ್ರಮುಖ ಆಶಯಗಳಾಗಿವೆ. ಸಮಾಜಮುಖಿ ಸೇವೆಯಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳಬೇಕು ಎಂದರು.