ಕಲ್ಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ನುಗ್ಗೇಹಳ್ಳಿ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ಸತೀಶ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಅನಿಲ್ ಇತರರಿದ್ದರು. 
ಹಾಸನ

ಮಕ್ಕಳ ಸೃಜನಶೀಲತೆ ಗುರುತಿಸುವ ಜವಾಬ್ದಾರಿ ಶಿಕ್ಷಕರದು

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ಸತೀಶ್ ಅಭಿಪ್ರಾಯ

ಚನ್ನರಾಯಪಟ್ಟಣ: ಪ್ರತಿಯೊಂದು ಮಗುವಿನಲ್ಲಿಯೂ ಒಂದೊಂದು ವಿಶಿಷ್ಟ ಪ್ರತಿಭೆ ಅಡಗಿರುತ್ತದೆ. ಅಂತಹ ಪ್ರತಿಭೆಯನ್ನು ಗುರುತಿಸಿ, ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಪ್ರೋತ್ಸಾಹಿಸುವ ಕಾರ್ಯವು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳಿಂದ ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ಸತೀಶ್ ತಿಳಿಸಿದರು.

ತಾಲೂಕಿನ ಕಲ್ಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ನುಗ್ಗೇಹಳ್ಳಿ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. ಮಕ್ಕಳಲ್ಲಿರುವ ಸೃಜನಶೀಲತೆ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಅಭಿರುಚಿಯನ್ನು ಗುರುತಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ತನ್ನದೇ ಆದ ಸಾಮರ್ಥ್ಯವಿದ್ದು, ಅದನ್ನು ಹೊರತರುವ ನಿಟ್ಟಿನಲ್ಲಿ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಬೇಕು. ನಮ್ಮ ಸಂಸ್ಕೃತಿಯ ಬೇರುಗಳು ಆಚರಣೆ ಮತ್ತು ಸಂಪ್ರದಾಯಗಳಲ್ಲಿಯೇ ಅಡಕವಾಗಿವೆ. ಅವುಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು ಎಂದು ಹೇಳಿದರು.

ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಅನಿಲ್ ಮಾತನಾಡಿ, ಬದುಕಿನಲ್ಲಿ ಯಶಸ್ಸು ಸಾಧಿಸಲು ಸೃಜನಶೀಲತೆ ಅತ್ಯಗತ್ಯ. ಭಾರತವು ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯ ತೊಟ್ಟಿಲಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಅವುಗಳ ಮಹತ್ವ ಮರೆಯಾಗುತ್ತಿರುವುದು ವಿಷಾದನೀಯ. ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳ ಮೂಲಕ ನಮ್ಮ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಕೆಲಸವಾಗಬೇಕು. ಪ್ರತಿಭಾ ಕಾರಂಜಿಯಲ್ಲಿ 25ಕ್ಕೂ ಹೆಚ್ಚು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ಇಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶವಿದೆ ಎಂದರು.

ಮೈಸೂರಿನ ಮಹಾರಾಜ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಚಂದ್ರೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವರಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡುವ ಮೂಲಕ ಭವಿಷ್ಯದ ಸಾಧಕರನ್ನಾಗಿ ರೂಪಿಸಬೇಕು ಎಂದು ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಎನ್.ಕೆ.ಜಯಶ್ರೀ, ಶಿಕ್ಷಕಿ ಆರ್.ಸತ್ಯಭಾಮಾ, ದೈಹಿಕ ಶಿಕ್ಷಣ ಶಿಕ್ಷಕ ಕೆ.ಎನ್.ರಂಗನಾಥ್, ರಂಗಕರ್ಮಿ ಚಂದ್ರೇಗೌಡ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬೈರೇಗೌಡ, ಕಲ್ಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಾಧರ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಮೇಶ್, ಯೋಗ ನರಸಿಂಹ ಉಪಸ್ಥಿತರಿದ್ದರು.